ಸಾರಾಂಶ
ದ.ಕ. ಜಿಲ್ಲಾ ಪದವಿ ಪೂರ್ವ ಸಂಸ್ಕೃತ ಉಪನ್ಯಾಸಕರ ಸಂಘ, ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಪ್ರಾಂಶುಪಾಲರ ಸಂಘ ಹಾಗೂ ಎಕ್ಸಲೆಂಟ್ ಪದವಿಪೂರ್ವ ಕಾಲೇಜು ಆಶ್ರಯದಲ್ಲಿ ಮೂಡುಬಿದಿರೆಯ ಎಕ್ಸಲೆಂಟ್ ಕಾಲೇಜಿನಲ್ಲಿ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರ ನಡೆಯಿತು.
ಕನ್ನಡಪ್ರಭ ವಾರ್ತೆ ಮೂಡುಬಿದಿರೆನಮ್ಮ ಭಾರತೀಯ ಸಂಸ್ಕೃತಿಯ ಗಾಢ ಬೇರು ಸಂಸ್ಕೃತ ಭಾಷೆಯಲ್ಲಿ ಅಡಕವಾಗಿದೆ. ಸಂಸ್ಕೃತವು ಕೇವಲ ಒಂದು ಭಾಷೆಯಲ್ಲ, ಅದು ನಾಡಿನ ಸಂಸ್ಕೃತಿ, ತತ್ತ್ವ, ಧರ್ಮ, ಸಾಹಿತ್ಯ, ಕಲೆ ಮತ್ತು ಜ್ಞಾನದ ನಿರಂತರ ಪ್ರಕಾಶ ಎಂದು ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಯುವರಾಜ ಜೈನ್ ಅಭಿಪ್ರಾಯಪಟ್ಟಿದ್ದಾರೆ.ದ.ಕ. ಜಿಲ್ಲಾ ಪದವಿ ಪೂರ್ವ ಸಂಸ್ಕೃತ ಉಪನ್ಯಾಸಕರ ಸಂಘ, ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಪ್ರಾಂಶುಪಾಲರ ಸಂಘ ಹಾಗೂ ಎಕ್ಸಲೆಂಟ್ ಪದವಿಪೂರ್ವ ಕಾಲೇಜು ಆಶ್ರಯದಲ್ಲಿ ಮೂಡುಬಿದಿರೆಯ ಎಕ್ಸಲೆಂಟ್ ಕಾಲೇಜಿನಲ್ಲಿ ನಡೆದ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.ಅಧ್ಯಕ್ಷತೆ ವಹಿಸಿದ್ದ ಹಿರಿಯ ವಿದ್ವಾಂಸ, ಮಂಗಳೂರಿನ ವಾಸುದೇವ ಕಾರಂತ ಮಾತನಾಡಿ, ಗುರು
ಎಂದರೆ ಕೇವಲ ಪಾಠ ಹೇಳುವವನು ಮಾತ್ರವಲ್ಲ. ಆತನು ವಿಷಯದಲ್ಲಿ ಆಳವಾದ ಜ್ಞಾನ ಹೊಂದಿರಬೇಕು. ಜ್ಞಾನವು ಕೇವಲ ಪುಸ್ತಕಗಳಲ್ಲಿ ಸೀಮಿತವಾಗದೆ, ಜೀವನದ ವಿವಿಧ ಕ್ಷೇತ್ರಗಳಲ್ಲಿ ಆಳವಾಗಿ ಅರ್ಥೈಸಿದಾಗ ಮಾತ್ರ ಅದು ಶಿಷ್ಯನಿಗೆ ಮಾರ್ಗದರ್ಶಕವಾಗುತ್ತದೆ ಎಂದರು.ಕಳೆದ ವರ್ಷ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಸಂಸ್ಕೃತದಲ್ಲಿ 100 ಅಂಕ ಗಳಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಜ್ಞಾನ, ವಾಣಿಜ್ಯ ಮತ್ತು ಕಲಾ ವಿಭಾಗಗಳಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರದೀಪ ಕುಮಾರ್ ಶೆಟ್ಟಿ ಇದ್ದರು.ಸಂಸ್ಕೃತ ಭಾಷಾ ಉಪನ್ಯಾಸಕರ ಸಂಘದ ಅಧ್ಯಕ್ಷ ರಮೇಶ ಆಚಾರ್ಯ ಸ್ವಾಗತಿಸಿದರು. ಉಪಾಧ್ಯಕ್ಷ ಡಾ. ಪ್ರಸನ್ನ ಕುಮಾರ್ ಐತಾಳ್ ಪ್ರತಿಭಾ ಪುರಸ್ಕಾರ ನಡೆಸಿಕೊಟ್ಟರು. ಕಾರ್ಯಕ್ರಮ ಸಂಯೋಜಕ ತೇಜಸ್ವೀ ಭಟ್ ನಿರೂಪಿಸಿದರು. ಸಂಘದ ಕಾರ್ಯದರ್ಶೀ ಡಾ. ಮಧುಕೇಶ್ವರ ಶಾಸ್ತ್ರೀ ವಂದಿಸಿದರು.