ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ತಾಲೂಕಿನ ವಿವಿಧ ಗ್ರಾಮಗಳಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಶಾಸಕ ಎಚ್.ಟಿ.ಮಂಜು ಅಬಕಾರಿ ಅಧಿಕಾರಿಗಳಿಗ ಸೂಚನೆ ನೀಡಿದರು.ಪಟ್ಟಣದ ಹೊರವಲಯದ ಚಿಕ್ಕೋನಹಳ್ಳಿ ರೇಷ್ಮೆ ತರಬೇತಿ ಕೇಂದ್ರದಲ್ಲಿ ವಿವಿಧ ಇಲಾಖೆಗಳ (ಕೆಡಿಪಿ) ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನ ಮೂಡನಹಳ್ಳಿ ಹಾಗೂ ದೊಡ್ಡಸೋಮನಹಳ್ಳಿ ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟದಿಂದ ಕಲುಷಿತ ವಾತಾವರಣ ನಿರ್ಮಾಣವಾಗಿರುವ ಬಗ್ಗೆ ಆ ಗ್ರಾಮಗಳ ಮಹಿಳೆಯರು ನಮಗೆ ದೂರು ಹೇಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಗ್ರಾಮಗಳಲ್ಲದೆ ತಾಲೂಕಿನಾದ್ಯಂತ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದೆ. ಅಬಕಾರಿ ಅಧಿಕಾರಿಗಳು ಅಕ್ರಮ ಮದ್ಯ ಮಾರಾಟ ಮಾಡುವವರ ವಿರುದ್ದ ಕಠಿಣ ಕ್ರಮ ಕೈಗೊಂಡು ಗ್ರಾಮಗಳಲ್ಲಿ ಉತ್ತಮ ವಾತಾವರಣ ನಿರ್ಮಿಸಲು ಕ್ರಮ ವಹಿಸಬೇಕು ಎಂದು ಸೂಚಿಸಿದರು.ರೈತರು ಸ್ವಾಧೀನದಲ್ಲಿರುವ ಭೂಮಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಬ್ಬಾಳಿಕೆ ಮಾಡಿ ರೈತರನ್ನು ಭೂಮಿಯಿಂದ ಒಕ್ಕಲೆಬ್ಬಿಸಲು ಪ್ರಯತ್ನಿಸಿದರೆ ನಾನು ಸಹಿಸುವುದಿಲ್ಲ. ರೈತರು ತಮ್ಮ ಬದುಕಿಗಾಗಿ ಅರಣ್ಯದ ಬಳಿ ಹತ್ತಾರು ವರ್ಷಗಳಿಂದ ಉಳುಮೆ ಮಾಡಿಕೊಂಡು ಬರುತ್ತಿರುತ್ತಾರೆ. ಆದರೆ, ಜಂಟಿ ಸರ್ವೆ ಮಾಡಿಸದೆ ಸದರಿ ಭೂಮಿಯಿಂದ ರೈತರನ್ನು ಒಕ್ಕಲೆಬ್ಬಿಸಿದರೆ ರೈತರೊಡಗೂಡಿ ಹೋರಾಟ ನಡೆಸಬೇಕಾಗುತ್ತದೆ. ಕೆರೆ ಕಟ್ಟೆಗಳ ಹೂಳು ತೆಗೆದು ಅಭಿವೃದ್ಧಿ ಮಾಡುವ ರೈತರನ್ನು ತಡೆಯುವುದು ಸರಿಯಲ್ಲ ಎಂದು ಎಚ್ಚರಿಕೆ ನೀಡಿದರು.
ಹಲವು ಗ್ರಾಮಗಳಲ್ಲಿ ಜೆಜೆಎಂ ಕೆಲಸ ಪೂರ್ಣಗೊಳ್ಳದೇ ಇದ್ದರೂ ಸಹ ಗ್ರಾಪಂ ಕೆಲಸ ಪೂರ್ಣಗೊಂಡಿದೆ ಎಂದು ಚಾರ್ಜ್ ತೆಗೆದುಕೊಳ್ಳುತ್ತಿರುವುದು ಕಂಡು ಬರುತ್ತಿದೆ. ಗುತ್ತಿಗೆದಾರರಿಗೆ ಅನುಕೂಲ ಮಾಡಿಕೊಟ್ಟು ಸಾರ್ವಜನಿಕರ ಕೆಲಸ ಅರ್ಧಕ್ಕೆ ನಿಂತು ತೊಂದರೆಯಾದರೆ ಸಂಬಂಧಪಟ್ಟ ಪಿಡಿಓ ಹಾಗೂ ಜಿಪಂ ಕುಡಿಯುವ ನೀರು ವಿಭಾಗದ ಇಂಜಿನಿಯರ್ ಅವರನ್ನು ಹೊಣೆಗಾರರನ್ನಾಗಿ ಮಾಡಿ ಸೂಕ್ತ ಕಾನೂನು ಕ್ರಮಕ್ಕೆ ಮೇಲಾಧಿಕಾರಿಗಳಿಗೆ ಪತ್ರ ಬರೆಯಬೇಕಾಗುತ್ತದೆ ಎಂದು ಎಚ್ಚರಿಸಿದರು.
ಬಣ್ಣೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ರೈತರ ಹೆಸರಿನಲ್ಲಿ ಜಮೀನು ಸಾಗುವಳಿ ಚೀಟಿಯಿದ್ದು ಭೂಮಿ ರೈತರಿಗೆ ಸೇರಿದ್ದರೂ ಸಹ ಅಧಿಕಾರಿಗಳು ರೈತರಿಗೆ ಪರಿಹಾರ ಕೊಡಿಸದೇ ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಗುತ್ತಿಗೆ ಪಡೆದುಕೊಂಡಿರುವ ಫೇವರೀಚ್ ಮೆಘಾ ಫುಡ್‌ಪಾರ್ಕ್ ಮಾಲೀಕನಿಗೆ ಅನುಕೂಲ ಮಾಡಿಕೊಡುತ್ತಿರುವ ಕಾರಣ ಹಲವು ರೈತರಿಗೆ ಅನ್ಯಾಯವಾಗಿದೆ ಎಂದರು.
ಇತ್ತ ಭೂಮಿಯೂ ಇಲ್ಲ, ಅತ್ತ ಪರಿಹಾರವೂ ಇಲ್ಲದೆ ರೈತರು ಕಂಗಾಲಾಗಿದ್ದಾರೆ. ಈ ಬಗ್ಗೆ ಕಂದಾಯ ಇಲಾಖೆ ಹಾಗೂ ಸರ್ವೇ ಇಲಾಖೆಯ ಅಧಿಕಾರಿಗಳು ತುರ್ತು ಗಮನ ಹರಿಸಿ ಸಾಗುವಳಿ ಚೀಟಿ, ಆರ್.ಟಿ.ಸಿ ಇತರೆ ದಾಖಲೆಗಳು ಇರುವ ರೈತರಿಗೆ ಪರಿಹಾರ ಪಡೆದುಕೊಳ್ಳಲು ಅಗತ್ಯ ಸಹಕಾರ ನೀಡಬೇಕು ಎಂದು ತಾಕೀತು ಮಾಡಿದರು.ಸಭೆಗೆ ಹಲವು ಇಲಾಖೆಗಳ ಅಧಿಕಾರಿಗಳ ಗೈರು, ಪ್ರಗತಿ ಹಿನ್ನೆಡೆ ಕುರಿತು ಅತೃಪ್ತಿ ವ್ಯಕ್ತಪಡಿಸಿ ನೋಟಿಸ್ ಜಾರಿ ಮಾಡುವಂತೆ ತಾಪಂ ಇಒ ಕೆ.ಸುಷ್ಮ ಅವರಿಗೆ ಸಲಹೆ ನೀಡಿದರು.
ಸಭೆಯಲ್ಲಿ ತಹಸೀಲ್ದಾರ್ ಡಾ.ಎಸ್.ಯು.ಅಶೋಕ್, ತಾಪಂ ಆಡಳಿತಾಧಿಕಾರಿ ಮೀನುಗಾರಿಕೆ ಜಿಲ್ಲಾ ನಿರ್ದೇಶಕ ಬಾಬಾಸಾಬ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಗ್ರಹಾರಬಾಚಹಳ್ಳಿ ಎ.ಬಿ.ಕುಮಾರ್, ಪಾಂಡವಪುರ ಉಪ ವಿಭಾಗದ ಸಹಾಯಕ ನಿಬಂಧಕ ನಾಗಭೂಷಣ್, ತಾಪಂ ಇಒ ಕೆ.ಸುಷ್ಮ, ಯೋಜನಾಧಿಕಾರಿ ಎಂ.ಶ್ರೀನಿವಾಸ್, ಕೆ.ಡಿ.ಪಿ ಸಮಿತಿ ಸದಸ್ಯರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.