ಕಳೆದ ಎರಡು ದಿನಗಳಿಂದ ರಾಜ್ಯಾದ್ಯಂತ ಅಬ್ಬರಿಸಿದ್ದ ಮುಂಗಾರು ಮಳೆ ಶುಕ್ರವಾರ ಕೊಂಚ ಬಿಡುವು ನೀಡಿದೆ. ಆದರೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯ ಸಂಭವ ಹೆಚ್ಚಿರುವ ಕಾರಣ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಬೆಂಗಳೂರು : ಕಳೆದ ಎರಡು ದಿನಗಳಿಂದ ರಾಜ್ಯಾದ್ಯಂತ ಅಬ್ಬರಿಸಿದ್ದ ಮುಂಗಾರು ಮಳೆ ಶುಕ್ರವಾರ ಕೊಂಚ ಬಿಡುವು ನೀಡಿದೆ. ಆದರೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯ ಸಂಭವ ಹೆಚ್ಚಿರುವ ಕಾರಣ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಬೀದರ್ ಸೇರಿದಂತೆ ಹಲವೆಡೆ ಶುಕ್ರವಾರ ಅಲ್ಪ ಪ್ರಮಾಣದಲ್ಲಿ ಮಳೆ ಸುರಿದಿದೆ. ಬುಧವಾರ ತಡರಾತ್ರಿ ಸುರಿದ ಧಾರಕಾರ ಮಳೆಗೆ ತತ್ತರಿಸಿದ್ದ ಹುಬ್ಬಳ್ಳಿ, ಧಾರವಾಡ ಸೇರಿ ಉತ್ತರ ಕರ್ನಾಟಕದ ನೆರೆ ಪ್ರದೇಶಗಳು ಸಹಜ ಸ್ಥಿತಿಗೆ ಮರಳಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಮಳೆಯಾಗಿದ್ದು, 4 ಮನೆ, ಸುಮಾರು 40 ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಇನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಜೂ.15 ರಿಂದ ಸೆ.30ರ ವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.
ಹುಬ್ಬಳ್ಳಿಯ ನೇಕಾರ ನಗರದ ಸೇತುವೆ ಬಳಿ ಭಾರಿ ಮಳೆಯಿಂದ ಉಂಟಾದ ದಿಢೀರ್ ಪ್ರವಾಹದಲ್ಲಿ ಕೊಚ್ಚಿಹೋಗಿದ್ದ ಹುಸೇನ್ ಕಳಸ ಎಂಬುವವರ ಶವ ಶುಕ್ರವಾರ ಪತ್ತೆಯಾಗಿದೆ. ಕೊಚ್ಚಿಹೋದ ಸ್ಥಳದಿಂದ ಸುಮಾರು 2 ಕಿಮೀ ದೂರ ಶವ ದೊರೆತಿದೆ.
ಧಾರವಾಡ ಕುಂದಗೋಳ ತಾಲೂಕಿನ ವಿವಿಧ ನೆರೆ ಪ್ರದೇಶಗಳಿಗೆ ಸಚಿವ ಸಂತೋಷ ಲಾಡ್ ತೆರಳಿ ಸಂತ್ರಸ್ತರನ್ನು ಭೇಟಿ ಮಾಡಿದರು. ಪ್ರವಾಹಕ್ಕೆ ಸಿಲುಕಿ ಮೃತರಾದ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಸರ್ಕಾರದಿಂದ ₹5 ಲಕ್ಷ ಪರಿಹಾರ ಬಿಡುಗಡೆ ಮಾಡಿದ ಆದೇಶದ ಪ್ರತಿಯನ್ನು ವಿತರಿಸಿದರು.
