ಸಾರಾಂಶ
ನಿಮ್ಮ ಈ ಕಾರ್ಯ ಶ್ಲಾಘನೀಯವಾಗಿದೆ. ಇದೊಂದು ದ.ಕ. ಜಿಲ್ಲೆಗೆ ಹೆಮ್ಮೆ ತರುವಂತಹ ಕಾರ್ಯ ಎಂದು ಜಿಲ್ಲಾಧಿಕಾರಿ ಶ್ಲಾಘಿಸಿದರು.
ಕನ್ನಡಪ್ರಭ ವಾರ್ತೆ ಮಂಗಳೂರು
ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟಿದ್ದ ವೃದ್ಧೆಯ ಅಂತ್ಯ ಸಂಸ್ಕಾರಕ್ಕೆ ಮಾನವೀಯತೆ ನೆಲೆಯಲ್ಲಿ ನೆರವು ನೀಡಿದ್ದ ಮಂಗಳೂರಿನ ಪತ್ರಕರ್ತರನ್ನು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಬುಧವಾರ ತಮ್ಮ ಕಚೇರಿಗೆ ಆಹ್ವಾನಿಸಿ ಸನ್ಮಾನಿಸಿದರು.ಶಿರೂರು ಗುಡ್ಡ ದುರಂತದಲ್ಲಿ ಉಳುವರೆ ಗ್ರಾಮದ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃತದೇಹ ಎಂಟು ದಿನಗಳ ಬಳಿಕ ಮಂಗಳವಾರ ಸಿಕ್ಕಿತ್ತು. ಪೋಸ್ಟ್ ಮಾರ್ಟಂ ಬಳಿಕ ಮೃತದೇಹವನ್ನು ಮನೆಯಿದ್ದ ಜಾಗಕ್ಕೆ ಸಾಗಿಸಿ ಅಂತಿಮ ಸಂಸ್ಕಾರ ನಡೆಸಲು ಪತ್ರಕರ್ತರಾದ ಶಶಿ ಬೆಳ್ಳಾಯರು, ಮೋಹನ್ ಕುತ್ತಾರ್, ಆರಿಫ್ ಯು.ಆರ್. ಗಿರೀಶ್ ಮಳಲಿ ಹಾಗೂ ಶಿವಶಂಕರ್ ನೆರವಾಗಿದ್ದರು. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದ್ದನ್ನು ಗಮನಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯ್ಕ್ ಇಂದಾಜೆ ಅವರಿಂದ ಪತ್ರಕರ್ತರ ಮಾಹಿತಿ ಪಡೆದು ಕಚೇರಿಯಲ್ಲಿ ಸನ್ಮಾನಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ಇಂದಾಜೆ ಅವರು ಜಿಲ್ಲಾಧಿಕಾರಿಯವರಿಗೆ ಪತ್ರಕರ್ತರ ಪರಿಚಯ ಮಾಡಿಕೊಟ್ಟರು. ಬಳಿಕ ಮಾತಾಡಿದ ಜಿಲ್ಲಾಧಿಕಾರಿ ಮುಲ್ಲೈ ಮಹಿಲನ್, ನಿಮ್ಮ ಈ ಕಾರ್ಯ ಶ್ಲಾಘನೀಯವಾಗಿದೆ. ಇದೊಂದು ದ.ಕ. ಜಿಲ್ಲೆಗೆ ಹೆಮ್ಮೆ ತರುವಂತಹ ಕಾರ್ಯ ಎಂದು ಬೆನ್ನುತಟ್ಟಿದರು. ಶಿರೂರು ಮತ್ತು ಉಳುವರೆ ಗ್ರಾಮದ ಸದ್ಯದ ಸ್ಥಿತಿಗತಿಯ ಬಗ್ಗೆ ಪತ್ರಕರ್ತರಿಂದ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಉಳ್ಳಾಲ ತಾಲೂಕು ಅಧ್ಯಕ್ಷ ವಸಂತ್ ಎನ್. ಕೊಣಾಜೆ, ಗಣೇಶ್ ತಲಪಾಡಿ ಇದ್ದರು.