ಸಾರಾಂಶ
ಕಾಂಗ್ರೆಸ್ ನಾಯಕ ಎಂ.ಜಿ. ಹೆಗಡೆ ಮಾತನಾಡಿ, ನೀಟ್ ಪರೀಕ್ಷೆಯಲ್ಲೂ ಹಗರಣ ಮಾಡುವ ಮೂಲಕ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಬಿಜೆಪಿ ಚೆಲ್ಲಾಟವಾಡುತ್ತಿದೆ ಎಂದರು.
ಕನ್ನಡಪ್ರಭ ವಾರ್ತೆ ಮಂಗಳೂರು
ನೀಟ್ ಪರೀಕ್ಷೆಯಲ್ಲಿ ಹಗರಣ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಹಾಗೂ ಎನ್‌ಎಸ್‌ಯುಐ ವತಿಯಿಂದ ನಗರದ ಕ್ಲಾಕ್ ಟವರ್ ಬಳಿ ಮಂಗಳವಾರ ಪ್ರತಿಭಟನೆ ನಡೆಯಿತು. ಕೂಡಲೇ ಮರು ಪರೀಕ್ಷೆ ನಡೆಸುವಂತೆ ಕಾಂಗ್ರೆಸ್ ಮುಖಂಡರು ಆಗ್ರಹಿಸಿದರು.ಈ ಸಂದರ್ಭ ಮಾತನಾಡಿದ ಮಾಜಿ ಸಚಿವ ಬಿ. ರಮಾನಾಥ ರೈ, ನೀಟ್ ಹಗರಣಕ್ಕೆ ಸಂಬಂಧಿಸಿ ನಡೆಯುತ್ತಿರುವ ತನಿಖೆಯಲ್ಲಿ ನಮಗೆ ನಂಬಿಕೆ ಇಲ್ಲ. ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ತನಿಖೆಯಾಗಬೇಕು ಎನ್ನುವುದು ಕಾಂಗ್ರೆಸ್ ಬೇಡಿಕೆಯಾಗಿದೆ ಎಂದು ಹೇಳಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಮಾತನಾಡಿ, ವಿದ್ಯಾರ್ಥಿಗಳ ಮನಸ್ಸನ್ನು ಕೆಡಿಸಿದ್ದ ಬಿಜೆಪಿ ಇದೀಗ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲೆಗೆ ತಳ್ಳಲು ಹೊರಟಿದ್ದು ಖಂಡನೀಯ. ನೀಟ್ ಪರೀಕ್ಷೆಯಲ್ಲಿ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಆಗ್ರಹಿಸಿದರು.ಕಾಂಗ್ರೆಸ್ ನಾಯಕ ಎಂ.ಜಿ. ಹೆಗಡೆ ಮಾತನಾಡಿ, ನೀಟ್ ಪರೀಕ್ಷೆಯಲ್ಲೂ ಹಗರಣ ಮಾಡುವ ಮೂಲಕ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಬಿಜೆಪಿ ಚೆಲ್ಲಾಟವಾಡುತ್ತಿದೆ ಎಂದರು.
ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೊ ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್, ಮಾಜಿ ಮೇಯರ್‌ಗಳಾದ ಶಶಿಧರ ಹೆಗ್ಡೆ, ಕೆ.ಅಶ್ರಫ್, ಜಿಲ್ಲಾ ಎನ್‌ಎಸ್‌ಯುಐ ಅಧ್ಯಕ್ಷ ಸುಹಾನ್ ಆಳ್ವ, ಉಪಾಧ್ಯಕ್ಷ ಸುಖ್ವಿಂದರ್ ಸಿಂಗ್ ಮತ್ತಿತರರು ಇದ್ದರು.