ಸ್ಟಾರ್ಟಪ್‍ಗಳ ಉತ್ತೇಜಿಸಲು ದ.ಕ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚನೆ

| Published : Apr 17 2025, 12:03 AM IST

ಸಾರಾಂಶ

ಸ್ಟಾರ್ಟಪ್‌ಗಳಿಗೆ ಹಣಕಾಸು ಬೆಂಬಲ ನೀಡುವ ವಿವಿಧ ಯೋಜನೆಗಳನ್ನು ಸರ್ಕಾರ ಜಾರಿಗೆ ತಂದಿದ್ದು, ಜಿಲ್ಲೆಯಲ್ಲಿ ಇವುಗಳಿಗೆ ಹೆಚ್ಚು ಮಂದಿಯನ್ನು ಆಕರ್ಷಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ದ.ಕ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ ಸೂಚಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಗಳೂರು

ಉದ್ಯಮ ಕ್ಷೇತ್ರದಲ್ಲಿ ನಾವೀನ್ಯತೆ ತರಲು ಸ್ಟಾರ್ಟಪ್‌ಗಳಿಗೆ ಹಣಕಾಸು ಬೆಂಬಲ ನೀಡುವ ವಿವಿಧ ಯೋಜನೆಗಳನ್ನು ಸರ್ಕಾರ ಜಾರಿಗೆ ತಂದಿದ್ದು, ಜಿಲ್ಲೆಯಲ್ಲಿ ಇವುಗಳಿಗೆ ಹೆಚ್ಚು ಮಂದಿಯನ್ನು ಆಕರ್ಷಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ ಸೂಚಿಸಿದ್ದಾರೆ.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ಸಾಕಷ್ಟು ವೃತ್ತಿಪರ ಶಿಕ್ಷಣ ಸಂಸ್ಥೆಗಳಿವೆ. ಆದರೂ, ಸ್ಟಾರ್ಟಪ್ ಯೋಜನೆಗಳಿಗೆ ಹೆಚ್ಚಿನ ಬೇಡಿಕೆ ಕಂಡುಬಂದಿಲ್ಲ. ಈ ನಿಟ್ಟಿನಲ್ಲಿ ಜಿಲ್ಲೆಯ ವೃತ್ತಿಪರ ಶಿಕ್ಷಣ ಸಂಸ್ಥೆಗಳೊಂದಿಗೆ ಸಂಯೋಜಿಸಿ ಸ್ಟಾರ್ಟಪ್ ಯೋಜನೆಗಳ ಬಗ್ಗೆ ಜಾಗೃತಿ ಕಾರ್ಯಕ್ರಮ ನಡೆಸುವಂತೆ ಅವರು ಜಿಲ್ಲಾಧಿಕಾರಿಗೆ ಸೂಚಿಸಿದರು.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಮಾತನಾಡಿ, ವೃತ್ತಿಪರ ಶಿಕ್ಷಣ ಮುಗಿಸಿದ ವಿದ್ಯಾರ್ಥಿಗಳಿಗೆ ಸ್ಟಾರ್ಟಪ್ ಉದ್ಯಮಗಳಿಗೆ ಉತ್ತೇಜಿಸಲು ಈಗಾಗಲೇ ಎಂಜಿನಿಯರಿಂಗ್ ಕಾಲೇಜುಗಳೊಂದಿಗೆ ಕಾರ್ಯಕ್ರಮ ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ ಎನ್.ಐ.ಟಿ.ಕೆ. ಸಂಸ್ಥೆಯೊಂದಿಗೆ ತಿಳುವಳಿಕೆ ಒಪ್ಪಂದಕ್ಕೆ ಸಹಿ ಹಾಕಿ, ಎನ್.ಐ.ಟಿ.ಕೆ.ಯನ್ನು ನೋಡಲ್ ಆಗಿ ನೇಮಿಸಲಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಹೆಚ್ಚಿನ ಸ್ಟಾರ್ಟಪ್‍ಗಳು ಬರುವ ಸಾಧ್ಯತೆ ಇದೆ ಎಂದು ತಿಳಿಸಿದರು.

ಕೋರ್ಟ್‌ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ:ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಗಳಲ್ಲಿ ದಾಖಲಾಗಿರುವ ದಾವೆಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶವನ್ನು ಪಾಲಿಸಲು ತ್ವರಿತವಾಗಿ ಅಗತ್ಯ ಕ್ರಮ ಕೈಗೊಳ್ಳಬೇಕು. ಹಲವಾರು ಪ್ರಕರಣಗಳಲ್ಲಿ ನ್ಯಾಯಾಲಯಗಳ ಆದೇಶ ಪಾಲಿಸದಿರುವುದರಿಂದ ಸರ್ಕಾರವು ನ್ಯಾಯಾಂಗ ನಿಂದನೆ ಪ್ರಕರಣಗಳನ್ನು ಎದುರಿಸಬೇಕಾದ ಪ್ರಸಂಗಗಳು ಉಂಟಾಗಿವೆ. ಈ ನಿಟ್ಟಿನಲ್ಲಿ ನ್ಯಾಯಾಲಯ ಪ್ರಕರಣಗಳ ಮೇಲ್ವಿಚಾರಣೆ ವ್ಯವಸ್ಥೆ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ತರಬೇತಿ ನೀಡುವಂತೆ ಉಸ್ತುವಾರಿ ಕಾರ್ಯದರ್ಶಿ ಸೂಚಿಸಿದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ. ಆನಂದ್, ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್, ವಿವಿಧ ಇಲಾಖಾಧಿಕಾರಿಗಳು ಇದ್ದರು.