ಮಂಡ್ಯ ಜಿಲ್ಲೆಯಲ್ಲಿ ನಿತ್ಯ 90 ಕೋವಿಡ್‌ ಪರೀಕ್ಷೆ: ಜಿಲ್ಲಾಧಿಕಾರಿ ಡಾ.ಕುಮಾರ

| Published : Dec 20 2023, 01:15 AM IST

ಮಂಡ್ಯ ಜಿಲ್ಲೆಯಲ್ಲಿ ನಿತ್ಯ 90 ಕೋವಿಡ್‌ ಪರೀಕ್ಷೆ: ಜಿಲ್ಲಾಧಿಕಾರಿ ಡಾ.ಕುಮಾರ
Share this Article
  • FB
  • TW
  • Linkdin
  • Email

ಸಾರಾಂಶ

ನೆರೆ ರಾಜ್ಯ ಕೇರಳದಲ್ಲಿ ಕೊರೋನಾ ರೂಪಾಂತರಿ ತಳಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 60 ವರ್ಷ ಮೇಲ್ಪಟ್ಟವರು ಮಾಸ್ಕ್‌ ಧರಿಸುವುದು ಕಡ್ಡಾಯ, ಜನಸಂದಣಿ ಇರುವ ಪ್ರದೇಶಗಳಲ್ಲಿ ಓಡಾಡದಂತೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

ಕನ್ನಡಪ್ರಭ ವಾರ್ತೆ ಮಂಡ್ಯ

ನೆರೆ ರಾಜ್ಯ ಕೇರಳದಲ್ಲಿ ಕೊರೋನಾ ರೂಪಾಂತರಿ ತಳಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪ್ರತಿ ದಿನ 90 ಕೋವಿಡ್ ಪರೀಕ್ಷೆ ನಡೆಸಲು ಆರೋಗ್ಯ ಇಲಾಖೆಗೆ ಗುರಿ ನಿಗಧಿಯಾಗಿದ್ದು, SARI (severe acute respiratory infection) ತೀವ್ರತರ ಉಸಿರಾಟದ ಸೋಂಕು ಪ್ರಕರಣಗಳನ್ನು ಪರೀಕ್ಷೆಗೆ ಒಳಪಡಿಸುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.

ಮಂಗಳವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿ, ಸರ್ಕಾರದ ಮಾರ್ಗಸೂಚಿಯಂತೆ 60 ವರ್ಷ ಮೇಲ್ಪಟ್ಟವರು ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಗರ್ಭಿಣಿಯರು ಹಾಗೂ ಮಕ್ಕಳಿಗೆ ಹಾಲುಣಿಸುವ ತಾಯಂದಿರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು. ಹೆಚ್ಚು ಜನ ಸಂದಣಿ ಇರುವ ಪ್ರದೇಶದಲ್ಲಿ ಅನವಶ್ಯಕವಾಗಿ ಓಡಾಡುವುದು, ಸೇರುವುದು ಬೇಡ ಎಂದು ಸಲಹೆ ನೀಡಿದರು.

ಕೋವಿಡ್ ಪರೀಕ್ಷೆಗೆ ಬೇಕಿರುವ ಸಲಕರಣೆಗಳು, ಸೋಂಕು ಪತ್ತೆಯಾದ ನಂತರ ಚಿಕಿತ್ಸೆಗೆ ಬೇಕಿರುವ ಬೆಡ್ ವ್ಯವಸ್ಥೆ, ಔಷಧಗಳು, ಕಾಂಟ್ಯಾಕ್ಟ್‌ ಟ್ರೆಸಿಂಗ್‌ಗೆ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ತಾಲ್ಲೂಕು ಮಟ್ಟದ ವೈದ್ಯಾಧಿಕಾರಿಗಳು ಸಭೆ ನಡೆಸಿ ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ತಿಳಿಸಿದರು.

ಹೊರ ರಾಜ್ಯ ಹಾಗೂ ಹೊರ ದೇಶಗಳಿಗೆ ಪ್ರಯಾಣ ನಡೆಸಿ ಹಿಂದಿರುಗಿದ ನಂತರ ಅವರಿಗೆ ಕೋವಿಡ್ ಲಕ್ಷಣಗಳಿದ್ದಲ್ಲಿ ಪರೀಕ್ಷೆಗೆ ಒಳಪಡಿಸುವುದು. ಸಾರ್ವಜನಿಕರು ಶೀತ, ಜ್ವರ, ಕೆಮ್ಮು ಲಕ್ಷಣಗಳು ಇದ್ದಲ್ಲಿ ಮಾಸ್ಕ್ ಧರಿಸುವುದು ಅವಶ್ಯ. ಜೊತೆಗೆ ಸಾರ್ವಜನಿಕ ಸ್ಥಳದಿಂದ ದೂರವಿರಿ ಎಂದು ಸಲಹೆ ನೀಡಿದರು.

ಜಿಲ್ಲೆಯಲ್ಲಿ ಒಂದು ಕೋವಿಡ್ ಪ್ರಕರಣ ವರದಿಯಾಗಿದ್ದು, ಸಾರ್ವಜನಿಕರು ಭಯ ಪಡುವುದು ಬೇಡ. ಸರ್ಕಾರದಿಂದ ನೀಡಲಾಗುವ ಮಾರ್ಗಸೂಚಿಗಳನ್ನು ಪಾಲಿಸಿ, ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿದರೆ ಕೊರೋನಾವನ್ನು ದೂರವಿಡಬಹುದು ಎಂದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮೋಹನ್, ಆರೋಗ್ಯ ಇಲಾಖೆ ಕಾರ್ಯಕ್ರಮ ಅಧಿಕಾರಿ ಡಾ.ಕುಮಾರ್, ಡಾ. ಅನಿಲ್ ಕುಮಾರ್, ಡಾ.ಸೋಮಶೇಖರ್, ಮಿಮ್ಸ್ ಅಧೀಕ್ಷಕ ಡಾ.ಶ್ರೀಧರ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.