ರೋಣ:ಮಳೆ ಕೈಕೊಟ್ಟರೆ ಕೆಲಸಕ್ಕಾಗಿ ಊರು ಬಿಟ್ಟು ಹೊರಡಬೇಕಾಗಿದ್ದ ಗ್ರಾಮೀಣ ಕೂಲಿಕಾರರಿಗೆ ಈಗ ಹೊಸ ಆಶಾಕಿರಣ ಮೂಡಿದೆ. ಗ್ರಾಮೀಣ ಕುಟುಂಬಗಳಿಗೆ ಸ್ಥಳೀಯ ಮಟ್ಟದಲ್ಲೇ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ರೋಣ ಹಾಗೂ ಗಜೇಂದ್ರಗಡ ತಾಲೂಕಿನಲ್ಲಿ ಸಿದ್ಧತೆ ವೇಗ ಪಡೆದುಕೊಂಡಿವೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯಿದೆಯ ಬದಲಿಗೆ ಜಾರಿಗೆ ಬಂದಿರುವ ಈ ಯೋಜನೆಯಡಿ ದಿನಕ್ಕೆ ₹382 ಕೂಲಿ ನಿಗದಿಯಾಗಿದ್ದು, ಅರ್ಹ ಗ್ರಾಮೀಣ ಕುಟುಂಬಗಳಿಗೆ ವರ್ಷಕ್ಕೆ 125 ದಿನಗಳ ಕೌಶಲರಹಿತ ಉದ್ಯೋಗ ಖಾತರಿ ನೀಡಲಾಗುತ್ತಿದೆ.

ಈ ವರ್ಷ ಮುಂಗಾರು ನಿರೀಕ್ಷೆಯಂತೆ ಆರಂಭವಾಗದ ಕಾರಣ ಹಲವು ಗ್ರಾಮಗಳಲ್ಲಿ ಕೃಷಿ ಚಟುವಟಿಕೆಗಳು ಇನ್ನೂ ಪೂರ್ಣ ಪ್ರಮಾಣದಲ್ಲಿ ಆರಂಭವಾಗಿಲ್ಲ. ಇಂತಹ ಸಂದರ್ಭದಲ್ಲಿ ಗ್ರಾಮೀಣ ಕೂಲಿಕಾರರಿಗೆ ಸ್ಥಳೀಯವಾಗಿ ಉದ್ಯೋಗದ ಅವಕಾಶ ಕಲ್ಪಿಸುವ ಯೋಜನೆಗೆ ಹೆಚ್ಚಿನ ಮಹತ್ವ ಬಂದಿದೆ. ಕೃಷಿ ಕೆಲಸವಿಲ್ಲದ ಅವಧಿಯಲ್ಲಿ ಕುಟುಂಬಗಳ ಆದಾಯಕ್ಕೆ ಆಸರೆಯಾಗಲಿದೆ ಎಂಬ ನಿರೀಕ್ಷೆ ಕೂಲಿಕಾರರಲ್ಲಿ ಮೂಡಿದೆ.

ಯೋಜನೆಯ ಆರಂಭಿಕ ಹಂತದಲ್ಲಿ ಈಗಾಗಲೇ ಇ ಕೆವೈಸಿ ಪೂರ್ಣಗೊಳಿಸಿರುವ ಹಳೆಯ ನರೇಗಾ ಜಾಬ್ ಕಾರ್ಡ್‌ಗಳನ್ನೇ ಮಾನ್ಯಗೊಳಿಸಿ ಕೆಲಸ ನೀಡಲಾಗುತ್ತದೆ. ಇದರಿಂದ ಹೊಸ ಕಾರ್ಡ್‌ಗಾಗಿ ಕಾಯಬೇಕಾದ ಅಗತ್ಯ ಇರುವುದಿಲ್ಲ. ನಂತರ ಹಂತ- ಹಂತವಾಗಿ ಎಲ್ಲ ಅರ್ಹ ಕುಟುಂಬಗಳಿಗೆ ಗ್ರಾಮೀಣ ರೋಜ್‌ಗಾರ್ ಗ್ಯಾರಂಟಿ ಕಾರ್ಡ್ ವಿತರಿಸಲಾಗುತ್ತದೆ. ಈವರೆಗೆ ಯಾವುದೇ ಯೋಜನೆಯಲ್ಲಿ ಹೆಸರು ನೋಂದಾಯಿಸದ ಗ್ರಾಮೀಣ ಕುಟುಂಬಗಳಿಗೂ ಹೊಸದಾಗಿ ಅರ್ಜಿ ಸಲ್ಲಿಸಿ ಯೋಜನೆಯ ಸೌಲಭ್ಯ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಎರಡು ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಯೋಜನೆ ಅನುಷ್ಠಾನಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ತಾಂತ್ರಿಕ ಸಿಬ್ಬಂದಿ ಹಾಗೂ ಸಂಬಂಧಿತ ಅಧಿಕಾರಿಗಳಿಗೆ ತರಬೇತಿ ನೀಡಲಾಗಿದ್ದು, ಗ್ರಾಮಸಭೆಗಳ ಮೂಲಕ ಕಾಮಗಾರಿಗಳ ಕ್ರಿಯಾಯೋಜನೆ ರೂಪಿಸುವ ಕಾರ್ಯ ಪ್ರಗತಿಯಲ್ಲಿದೆ.


ಜಲ ಸಂರಕ್ಷಣೆ, ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ, ಜೀವನೋಪಾಯ ವೃದ್ಧಿ ಹಾಗೂ ಹವಾಮಾನ ಬದಲಾವಣೆಗೆ ಹೊಂದಿಕೊಳ್ಳುವ ಕಾಮಗಾರಿಗಳಿಗೆ ಆದ್ಯತೆ ನೀಡಲಾಗಿದೆ.

ಹೊಸ ಯೋಜನೆಯಲ್ಲಿ ಪಾರದರ್ಶಕತೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಕೆಲಸದ ಸ್ಥಳಗಳಲ್ಲಿ ಫೇಸ್ ಅಥೆಂಟಿಕೇಶನ್ ಮೂಲಕವೇ ಹಾಜರಾತಿ ದಾಖಲಿಸಲಾಗುತ್ತದೆ. ಜತೆಗೆ ಕಾರ್ಮಿಕರಿಗೆ ಸುರಕ್ಷಿತ ಕುಡಿಯುವ ನೀರು, ನೆರಳು, ವಿಶ್ರಾಂತಿ ಸೌಲಭ್ಯ ಹಾಗೂ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಒದಗಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ತಾಂತ್ರಿಕ ಸಮಸ್ಯೆ ಎದುರಾದಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಪರ್ಯಾಯ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ.

ವಿಬಿ ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತಾಲೂಕು ಮಟ್ಟದಲ್ಲಿ ಅಗತ್ಯ ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಗ್ರಾಪಂಗಳಿಗೆ ಅಗತ್ಯ ತರಬೇತಿ ಹಾಗೂ ಮಾರ್ಗದರ್ಶನ ನೀಡಿದ್ದು, ಅರ್ಹ ಗ್ರಾಮೀಣ ಕುಟುಂಬಗಳಿಗೆ ಸ್ಥಳೀಯ ಮಟ್ಟದಲ್ಲೇ ಉದ್ಯೋಗ ಕಲ್ಪಿಸಲು ಕ್ರಮ ವಹಿಸಲಾಗಿದೆ. ಯೋಜನೆಯ ಸೌಲಭ್ಯವನ್ನು ಎಲ್ಲ ಅರ್ಹ ಕಾರ್ಮಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಾಪಂ ಇಒ ಚಂದ್ರಶೇಖರ ಬಿ. ಕಂದಕೂರ ಹೇಳಿದ್ದಾರೆ.