ಸಾರಾಂಶ
ಕನ್ನಡಪ್ರಭ ವಾರ್ತೆ ಮಂಗಳೂರು
ದ.ಕ. ಜಿಲ್ಲೆಯಲ್ಲಿ ಸಿಡಿಲಿನಿಂದ ಸಾವಿನ ಪ್ರಕರಣಗಳು ಹೆಚ್ಚುತ್ತಿವೆ. ಇದನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಸುಳ್ಯ, ಬೆಳ್ತಂಗಡಿ, ಸುಬ್ರಹ್ಮಣ್ಯ ಪ್ರದೇಶದ ನಾಲ್ಕು ಕಡೆ ಮಿಂಚು ಪ್ರತಿಬಂಧಕ ಅಳವಡಿಸಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಳೆಗಾಲದಲ್ಲಿ ಪ್ರಾಕೃತಿಕ ವಿಕೋಪದ ಸಿದ್ಧತೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಆರಂಭಿಕ ಹಂತದಲ್ಲಿ ಪ್ರಾಯೋಗಿಕವಾಗಿ ಸುಳ್ಯ, ಬೆಳ್ತಂಗಡಿ, ಸುಬ್ರಹ್ಮಣ್ಯದ ನಾಲ್ಕೈದು ಕಡೆಗಳಲ್ಲಿ ಈ ಮಿಂಚು ಪ್ರತಿಬಂಧಕ ಉಪಕರಣ ಅಳವಸಲು ಕ್ರಮ ವಹಿಸಲಾಗಿದೆ. ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವಸ್ಥಾನ ವತಿಯಿಂದ ಮಿಂಚು ಪ್ರತಿಬಂಧಕ ವ್ಯವಸ್ಥೆ ಅಳವಡಿಸಲಾಗಿದೆ. ಇದು 500 ಮೀಟರ್‌ನಿಂದ 1.5 ಕಿ.ಮೀ. ವ್ಯಾಪ್ತಿವರೆಗಿನ ಪ್ರದೇಶದಲ್ಲಿ ಮಿಂಚಿನಿಂದಾಗುವ ಅಪಾಯಗಳಿಂದ ರಕ್ಷಣೆ ನೀಡಲಿದೆ ಎಂದರು.
ಕಳೆದ 10 ವರ್ಷಗಳಿಂದೀಚೆಗೆ ಸುಬ್ರಹ್ಮಣ್ಯ ಭಾಗದಲ್ಲಿ ಮಿಂಚಿನಿಂದ ಸಾವು ಹಾಗೂ ಆಸ್ತಿ ಪಾಸ್ತಿ ನಷ್ಟವಾಗಿರುವ ಪ್ರಕರಣಗಳು ನಡೆಯುತ್ತಿವೆ. ಎತ್ತರದ ಪ್ರದೇಶವಾಗಿರುವ ಕಾರಣ ಮಿಂಚಿನಿಂದ ಹೆಚ್ಚಿನ ಅಪಾಯ ಸಂಭವಿಸುತ್ತಿರುವುದಾಗಿ ಅಂದಾಜಿಸಲಾಗಿದೆ. ಹಾಗಾಗಿ ಪ್ರಾಯೋಗಿಕವಾಗಿ ಈ ಪ್ರದೇಶದಲ್ಲಿ ಮಿಂಚು ಪ್ರತಿಬಂಧಕ ಅಳವಡಿಸಲು ಉದ್ದೇಶಿಸಲಾಗಿದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.ಕಲ್ಲಡ್ಕ ರಸ್ತೆ ದುರಸ್ತಿಗೆ ಸೂಚನೆ:
ಕಲ್ಲಡ್ಕದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಿಧಾನಗತಿಯಲ್ಲಿ ನಡೆಯುತ್ತಿರುವುದರಿಂದ ಮಳೆಗಾಲದಲ್ಲಿ ಪ್ರಯಾಣಕ್ಕೆ ತೊಂದರೆಯಾಗುತ್ತಿದೆ. ಮೂರ್ನಾಲ್ಕು ದಿನದೊಳಗೆ ಇಲ್ಲಿನ ರಸ್ತೆಯನ್ನು ವಾಹನ ಸಂಚಾರ ಯೋಗ್ಯ ಮಾಡಿದ ಬಳಿಕ ಕಾಮಗಾರಿ ಮುಂದುವರಿಸುವಂತೆ ರಾ.ಹೆ. ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪುಂಜಾಲಕಟ್ಟೆಯಿಂದ ಚಾರ್ಮಾಡಿವರೆಗಿನ 12 ಕಿ.ಮೀ. ರಸ್ತೆಯನ್ನು ಸರಿಪಡಿಸಲು ಸೂಚಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲಿಸಿ ಕ್ರಮ ವಹಿಸಲು ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.ಹಣ ಕೊರತೆ ಇಲ್ಲ:
ವಿಪತ್ತು ನಿರ್ವಹಣೆಗಾಗಿ ಜಿಲ್ಲಾ ಮಟ್ಟದಲ್ಲಿ 17 ಕೋಟಿ ರು. ಹಾಗೂ ತಾಲೂಕು ಮಟ್ಟದಲ್ಲಿ ನಾಲ್ಕು ಕೋಟಿ ರು. ಹಣ ಹೊಂದಿದ್ದು, ಯಾವುದೇ ಸಮಸ್ಯೆ ಇಲ್ಲ. ಮುಂಜಾಗೃತಾ ಕ್ರಮಗಳ ಬಗ್ಗೆ ಕ್ರಮ ವಹಿಸಿ, ಯಾವುದೇ ಘಟನೆ ನಡೆದಾಗ ತುರ್ತು ಸ್ಪಂದಿಸುವ ವ್ಯವಸ್ಥೆಗೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಉಸ್ತವಾರಿ ಸಚಿವರು ಹೇಳಿದರು.ಕಡಲ್ಕೊರೆತ ಶಾಶ್ವತ ಪರಿಹಾರ:ಕಡಲ್ಕೊರೆತ ಶಾಶ್ವತ ಪರಿಹಾರಕ್ಕೆ 80 ಕೋಟಿ ರು.ಗಳ ಯೋಜನೆಯೊಂದಕ್ಕೆ ಬಂದರು ಇಲಾಖೆ ಪ್ರಸ್ತಾವನೆ ಸಿದ್ಧಗೊಳಿಸಿದೆ. ಶಾಶ್ವತ ಪರಿಹಾರಕ್ಕೆ ಸಂಬಂಧಿಸಿ ಈಗಾಗಲೇ ವಿಧಾನಸಭೆ ಸ್ಪೀಕರ್ ಬೆಂಗಳೂರಿನಲ್ಲಿ ಸಭೆ ನಡೆಸಿ ಕ್ರಮ ವಹಿಸಿದ್ದಾರೆ ಎಂದು ತಿಳಿಸಿದರು.
ಶಾಸಕರಾದ ಹರೀಶ್ ಕುಮಾರ್, ಅಶೋಕ್ ರೈ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ಗೇರು ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಆನಂದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಇದ್ದರು.ಬಾಕ್ಸ್ಕೆಂಪು ಮಣ್ಣು ಗಣಿಗಾರಿಕೆ ನಿಲ್ಲಿಸಲು ಸೂಚನೆ
ಜಿಲ್ಲೆಯಲ್ಲಿ ಅನೇಕ ಕಡೆಗಳಲ್ಲಿ ಅನಧಿಕೃತವಾಗಿ ಕೆಂಪು ಮಣ್ಣು ಗಣಿಗಾರಿಕೆ ಬಗ್ಗೆ ದೂರುಗಳು ಬಂದಿದ್ದು, ಇದನ್ನು ನಿಲ್ಲಿಸುವುದಕ್ಕೆ ಗಣಿ ಇಲಾಖೆಗೆ ತಾಕೀತು ಮಾಡಿದ್ದೇನೆ. ಪೊಲೀಸ್ ಇಲಾಖೆಯ ಸಹಯೋಗ ಪಡೆದುಕೊಂಡು ಅವರು ಕಾರ್ಯ ನಿರ್ವಹಿಸಬೇಕು, ಸರ್ಕಾರದಿಂದ ಅವರಿಗೆ ಎಲ್ಲ ರಕ್ಷಣೆ ಒದಗಿಸಲಾಗುವುದು. ಲೋಪ ಆದರೆ ಅಧಿಕಾರಿಗಳೇ ಹೊಣೆಯಾಗಲಿದ್ದಾರೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.