ಕನ್ನಡಪ್ರಭ ವಾರ್ತೆ ಬೆಂಗಳೂರು:
ಜೆಡಿಎಸ್ ಶಾಸಕರ ನಿಯೋಗವು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ತಮ್ಮ ಕ್ಷೇತ್ರಗಳಿಗೆ ಸಮರ್ಪಕ ಅನುದಾನ ನೀಡುವಂತೆ ಮನವಿ ಮಾಡಿದರು.ಜೆಡಿಎಸ್ ಕಾರ್ಯಕರ್ತರಿಗೆ ನಮ್ಮ ಮನೆ ಬಾಗಿಲು ತೆರೆದಿದೆ ಎಂಬ ಮುಖ್ಯಮಂತ್ರಿ ಶಿವಕುಮಾರ್ ಅವರು ಹೇಳಿಕೆ ನೀಡಿದ ಮರುದಿನವಾದ ಸೋಮವಾರ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್ ಬಾಬು ಅವರ ನೇತೃತ್ವದಲ್ಲಿ 12ಕ್ಕೂ ಹೆಚ್ಚು ಶಾಸಕರು ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದರು. ಅನುದಾನ ನೀಡುವಾಗ ತಮ್ಮ ಕ್ಷೇತ್ರಗಳಿಗೂ ತಾರತಮ್ಯ ಮಾಡದೆ ಹೆಚ್ಚಿನ ಅನುದಾನಕ್ಕೆ ನೀಡುವಂತೆ ಮನವಿ ಮಾಡಿದರು.
ಇದಕ್ಕೂ ಮುನ್ನ ಸುದ್ದಿಗಾರರ ಜೊತೆಗೆ ಮಾತನಾಡಿದ ಸುರೇಶ್ ಬಾಬು, ಜೆಡಿಎಸ್ ಪಕ್ಷ ಕಾರ್ಯಕರ್ತರನ್ನು ತಯಾರಿಸುವ ಫ್ಯಾಕ್ಟರಿ. ಕಾಂಗ್ರೆಸ್ ನಾಯಕರನ್ನು ನೋಡಿದಾಗ ಅದು ಗೊತ್ತಾಗುತ್ತದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಎಲ್ಲರನ್ನೂ ಸಮಾನವಾಗಿ ನೋಡಲಿ. ಎಲ್ಲ ಶಾಸಕರಿಗೂ ಸಮಾನ ಅನುದಾನ ನೀಡಲಿ ಎಂದು ಆಗ್ರಹಿಸಿದರು.ಮುಖ್ಯಮಂತ್ರಿಗಳ ಭೇಟಿ ಬಳಿಕ ಮಾತನಾಡಿದ ಶಾಸಕ ಸಿ.ಎನ್.ಬಾಲಕೃಷ್ಣ, ಅನುದಾನದ ವಿಚಾರದಲ್ಲಿ ಯಾವ ತಾರತಮ್ಯ ಮಾಡದೆ ಎಲ್ಲರನ್ನೂ ಸಮಾನವಾಗಿ ಕಾಣುವಂತೆ ಮುಖ್ಯಮಂತ್ರಿ ಅವರ ಬಳಿ ಮನವಿ ಮಾಡಿದ್ದೇವೆ. ರಾಜಕಾರಣ ಬೇರೆ, ಅಭಿವೃದ್ಧಿ ಬೇರೆ. ಹೀಗಾಗಿ ಸಹಕಾರ ಕೊಡುವಂತೆ ಕೋರಿದ್ದೇವೆ. ವಿಧಾನ ಪರಿಷತ್ ಚುನಾವಣೆಗೆ ಜೆಡಿಎಸ್‌ನಿಂದ ಅಭ್ಯರ್ಥಿ ಹಾಕಿದ್ದೇವೆ. ನಮ್ಮ ಅಭ್ಯರ್ಥಿ ಗೆಲ್ಲಲು ಸಹಕರಿಸುವಂತೆಯೂ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ್ದೇವೆ ಎಂದು ಹೇಳಿದರು.