ಬಿಜೆಪಿ ವಿರುದ್ಧ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

| Published : Oct 31 2024, 12:45 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಎಫ್‌ಐಆರ್‌ ದಾಖಲಿಸಿರುವ ಹಿನ್ನಲೆಯಲ್ಲಿ ಅವರು ರಾಜೀನಾಮೆ ಕೊಡಬೇಕೆಂದು ಬಿಜೆಪಿ ನಾಯಕರು ಹೋರಾಟ ಪ್ರಾರಂಭಿಸಿದ್ದಾರೆ. ಇದನ್ನು ಖಂಡಿಸಿ ನವೆಂಬರ್‌ 6ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಅರೆಬೆತ್ತಲೆ ಮೆರವಣಿಗೆ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಡಾ.ಡಿ.ಜಿ.ಸಾಗರ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಎಫ್‌ಐಆರ್‌ ದಾಖಲಿಸಿರುವ ಹಿನ್ನಲೆಯಲ್ಲಿ ಅವರು ರಾಜೀನಾಮೆ ಕೊಡಬೇಕೆಂದು ಬಿಜೆಪಿ ನಾಯಕರು ಹೋರಾಟ ಪ್ರಾರಂಭಿಸಿದ್ದಾರೆ. ಇದನ್ನು ಖಂಡಿಸಿ ನವೆಂಬರ್‌ 6ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಅರೆಬೆತ್ತಲೆ ಮೆರವಣಿಗೆ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಡಾ.ಡಿ.ಜಿ.ಸಾಗರ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಂದು ಹೋರಾಟ ನಡೆಸಿದ ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ನೀಡಲಾಗುವುದು. ಈ ಹೋರಾಟದಲ್ಲಿ ನಾಡಿನ ಸಮಸ್ತ ನಾಗರಿಕರು ಮತ್ತು ಪ್ರಗತಿಪರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಕೇವಲ ಎಫ್‌ಐಆರ್‌ ಆಗಿರುವ ಕಾರಣಕ್ಕೆ ರಾಜೀನಾಮೆ ನೀಡಬೇಕೆಂದು ಮಾನದಂಡ ನಿಗದಿಪಡಿಸಿದರೆ, ಸಿದ್ದರಾಮಯ್ಯನವರು ಮಾತ್ರವಲ್ಲ ನರೇಂದ್ರ ಮೋದಿ ಸಂಪುಟದ ಕನಿಷ್ಠ 23ರಿಂದ 24 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ. ಧರ್ಮ ಧರ್ಮಗಳ ನಡುವೆ ಸೌಹಾರ್ದತೆಗೆ ದುಡಿದು ಬಡಬಗ್ಗರಿಗೆ, ಅಸಹಾಯಕರಿಗೆ, ದಲಿತರಿಗೆ, ಹಿಂದುಳಿದವರಿಗೆ, ಅಲ್ಪಸಂಖ್ಯಾತರಿಗೆ ಶಕ್ತಿ ತುಂಬುವ 5 ಗ್ಯಾರಂಟಿ ಯೋಜನೆಗಳನ್ನು ಕೊಟ್ಟ ಸಿದ್ದರಾಮಯ್ಯ ಅವರ ನೈತಿಕತೆಯನ್ನು ಪ್ರಶ್ನಿಸುವುದು ವಿಪರ್ಯಾಸ. ಕೇಂದ್ರ ಸರ್ಕಾರ ಇಡಿ, ಐಟಿ, ಸಿಬಿಐಗಳನ್ನು ದುರ್ಬಳಕೆ ಮಾಡಿಕೊಳ್ಳಬಾರದು. ಅದರಂತೆ ದ್ವೇಷ ರಾಜಕಾರಣಕ್ಕೆ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಪ್ರಕರಣವನ್ನು ಬಳಸಿಕೊಳ್ಳಬಾರದು ಎಂದು ಒತ್ತಾಯಿಸಿದರು.ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಸಂಚಾಲಕ ಸಿದ್ದು ರಾಯಣ್ಣವರ, ಮುಖಂಡರಾದ ವೈ.ಸಿ.ಮಯೂರ, ರಮೇಶ ಧರನಾಕಾರ, ವಿಜಯಕುಮಾರ ಕಾಂಬಳೆ ಸೇರಿದಂತೆ ಇತರರು ಉಪಸ್ಥಿತರಿದ್ದರು.