ಪರ್ಯಾಯ ಬೆಳೆ ಪದ್ಧತಿ-ಸಾವಯವ ಗೊಬ್ಬರಗಳ ಬಳಕೆ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುರಾಗಿ, ಮುಸುಕಿನ ಜೋಳ, ತೊಗರಿ, ಸೂರ್ಯಕಾಂತಿ, ನೆಲಗಡಲೆ, ಹುರುಳಿಯನ್ನು ಬೆಳೆಯುವಂತೆ ರೈತರಿಗೆ ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಮನವಿ ಮಾಡಿದ್ದಾರೆ.
ಪರ್ಯಾಯ ಬೆಳೆ ಪದ್ಧತಿ ಮತ್ತು ಸಾವಯವ ಗೊಬ್ಬರಗಳ ಬಳಕೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.ರೈತರು ಖಾಸಗಿ ಮಳಿಗೆಗಳಿಂದ ಬಿತ್ತನೆ ಬೀಜ, ರಸಗೊಬ್ಬರ ಮತ್ತು ಕೀಟನಾಶಕಗಳನ್ನು ಖರೀದಿಸುವಾಗ ಕಡ್ಡಾಯವಾಗಿ ರಶೀದಿಗಳನ್ನು ಕೇಳಿ ಪಡೆಯುವಂತೆ ತಿಳಿಸಿದರು. ಕೃಷಿ ಇಲಾಖೆ ಮತ್ತು ಕೃಷಿ ವಿಜ್ಞಾನಿಗಳು ಗ್ರಾಮೀಣ ಭಾಗದಲ್ಲಿ ಹೆಚ್ಚು ಹೆಚ್ಚು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ನಿರ್ದೇಶನ ನೀಡಿದರು.
ಜಂಟಿ ಕೃಷಿ ನಿರ್ದೇಶಕ ಡಾ.ಎಂ.ತಿರುಮಲೇಶ ಮಾತನಾಡಿ, ಜಿಲ್ಲೆಯಲ್ಲಿ ರಸಗೊಬ್ಬರಗಳಿಗೆ ಯಾವುದೇ ಕೊರತೆ ಇರುವುದಿಲ್ಲವಾದರೂ ಮಧ್ಯ ಪ್ರಾಚ್ಯ ರಾಷ್ಟ್ರಗಳ ಯುದ್ದದ ಪರಿಣಾಮವಾಗಿ ಮುಂದಿನ ದಿನಗಳಲ್ಲಿ ಯೂರಿಯಾ ಮತ್ತು ಡಿಎಪಿ ಲಭ್ಯತೆಯಲ್ಲಿ ವ್ಯತ್ಯಯವಾದರೆ ರೈತರು ಆತಂಕಪಡದೆ ವಿವಿಧ ಪ್ರಮಾಣದಲ್ಲಿ ಸಾರಜನಕ ಮತ್ತು ರಂಜಕ ಪೋಷಕಾಂಶಗಳನ್ನು ಒದಗಿಸುವ ಸಂಯುಕ್ತ (ಕಾಂಪ್ಲೆಕ್ಸ್) ರಸಗೊಬ್ಬರಗಳನ್ನು ಬಳಸುವಂತೆ ರೈತರಲ್ಲಿ ಮನವಿ ಮಾಡಿದರು.
ರೈತರು ಸಾರಜನಕ ಹಾಗೂ ರಂಜಕದ ಪೋಷಕಾಂಶಗಳಿಗಾಗಿ ಕೇವಲ ಯೂರಿಯಾ ಮತ್ತು ಡಿಎಪಿ ಗೊಬ್ಬರಗಳ ಮೇಲೆ ಅವಲಂಬಿತರಾಗದೆ, ಹಸಿರೆಲೆ ಗೊಬ್ಬರ, ಕೊಟ್ಟಿಗೆ ಗೊಬ್ಬರ, ಎರೆಹುಳ ಗೊಬ್ಬರ, ಜೀವಾಮೃತ, ಬೀಜಾಮೃತ, ಜೈವಿಕ ಗೊಬ್ಬರ, ಕಾಂಪೋಸ್ಟ್ ಗೊಬ್ಬರ ಮುಂತಾದ ಸಾವಯವ ಗೊಬ್ಬರಗಳನ್ನು ಬಳಸುವಂತೆ ಸಲಹೆ ನೀಡಿದರು.