ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ, ತಮ್ಮಗೆ ನಿಯೋಜಿಸಲಾದ ಕಾರ್ಯಗಳನ್ನು ಅಚ್ಚುಕಟ್ಟಾಗಿ ಮತ್ತು ಸಮಯಕ್ಕೆ ಸರಿಯಾಗಿ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಕನ್ನಡಪ್ರಭ ವಾರ್ತೆ, ತುಮಕೂರುಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ, ತಮ್ಮಗೆ ನಿಯೋಜಿಸಲಾದ ಕಾರ್ಯಗಳನ್ನು ಅಚ್ಚುಕಟ್ಟಾಗಿ ಮತ್ತು ಸಮಯಕ್ಕೆ ಸರಿಯಾಗಿ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ನಗರದ ಗಾಜಿನ ಮನೆಯಲ್ಲಿ ಡಿಸೆಂಬರ್ 29 ಹಾಗೂ 30ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲು ೧೪ ಸಮಿತಿಗಳನ್ನು ರಚನೆ ಮಾಡಲಾಗಿದೆ ಎಂದು ಹೇಳಿದರು. ಜಿಲ್ಲೆಯ ಪ್ರತಿ ತಾಲೂಕಿನಿಂದ ಒಂದೊಂದು ಕಲಾ ತಂಡ ಹಾಗೂ ವಿವಿಧ ಸಾಂಸ್ಕೃತಿಕ ಕಲಾ ತಂಡಗಳೊಂದಿಗೆ ಸಮ್ಮೇಳನಾಧ್ಯಕ್ಷರ ಭವ್ಯ ಮೆರವಣಿಗೆಯನ್ನು ನಗರದ ಮಹಾನಗರ ಪಾಲಿಕೆ ಮುಂಭಾಗದಿಂದ ಎಂ.ಜಿ. ರಸ್ತೆ, ಗುಂಚಿ ಚೌಕ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದ ಮಾರ್ಗವಾಗಿ ಗಾಜಿನ ಮನೆಯವರೆಗೂ ಆಯೋಜಿಸಲಾಗುತ್ತದೆ ಎಂದು ಅವರು ಹೇಳಿದರು.ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಕಾರ್ಯಕ್ರಮಕ್ಕೆ ವ್ಯಾಪಕವಾದ ಪ್ರಚಾರಗೊಳಿಸಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಜಿಲ್ಲೆಯ 330 ಗ್ರಾಮ ಪಂಚಾಯತಿ ಹಾಗೂ ಮಹಾನಗರ ಪಾಲಿಕೆಯ 35 ವಾರ್ಡ್‌ಗಳ ಕಸ ವಿಲೇವಾರಿ ವಾಹನಗಳಲ್ಲಿ ಧ್ವನಿಮುದ್ರಿಕೆಗಳನ್ನು ಪ್ರಸಾರ ಮಾಡಲು ಸೂಚಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಈಶ್ವರ್ ಕು.ಮಿರ್ಜಿ ಮಾತನಾಡಿ, ಎರಡು ದಿನಗಳ ಕಾಲ ನಡೆಯುವ ಸಮ್ಮೇಳನದಲ್ಲಿ ಸುಗಮ ಸಂಗೀತ, ನೃತ್ಯ ಕಾರ್ಯಕ್ರಮ, ರಂಗಗೀತೆಗಳ ಗಾಯನ, ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಹರಿಕಥೆ ಸೇರಿದಂತೆ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಹೇಳಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಮಹಾನಗರ ಪಾಲಿಕೆ ಆಯುಕ್ತ ಯೋಗಾನಂದ, ಉಪ ವಿಭಾಗಧಿಕಾರಿ ನಾಹಿದಾ ಜಮ್ ಜಮ್, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಡಾ. ಚಂದ್ರಶೇಖರ್, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.