ಸಾರಾಂಶ
ಬಳ್ಳಾರಿ: ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಮೇ 7ರಂದು ಮತದಾನ ನಡೆಯಲಿದೆ. ಜಿಲ್ಲೆಯ ವಿವಿಧ ವಾಣಿಜ್ಯ ಉದ್ದಿಮೆಗಳಲ್ಲಿ, ಕೈಗಾರಿಕಾ ಘಟಕ ಸೇರಿದಂತೆ ಸಣ್ಣ ಮತ್ತು ದೊಡ್ಡ ಘಟಕಗಳಲ್ಲಿ ಸೇವೆ ಸಲ್ಲಿಸುತ್ತಿರುವ ಕಾರ್ಮಿಕ ಹಾಗೂ ಸಿಬ್ಬಂದಿಗೆ ಮತದಾನದ ದಿನದಂದು ವೇತನ ಸಹಿತ ರಜೆ ನೀಡುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತಕುಮಾರ್ ಮಿಶ್ರಾ ಸೂಚಿಸಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿಯಿಂದ ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಜಾಗೃತಿ ಅಭಿಯಾನದ ಅಂಗವಾಗಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
ಬಳ್ಳಾರಿ ಲೋಕಸಭೆ ಕ್ಷೇತ್ರದ ಚುನಾವಣೆಯ ಮತದಾನ ಮೇ 7ರಂದು ನಡೆಯಲಿದೆ. ಮತ ಚಲಾಯಿಸುವ ಅರ್ಹ ಕಾರ್ಮಿಕರು ಮತದಾನದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಇತರ ಸಂಸ್ಥೆಗಳ ಮಾಲೀಕರು ವೇತನ ಸಹಿತ ರಜೆ ನೀಡಬೇಕು. ಈ ಆದೇಶ ಉಲ್ಲಂಘನೆ ಮಾಡಿದರೆ ಸಂಬಂಧಪಟ್ಟ ಸಂಸ್ಥೆ, ನಿಯೋಜಕರು, ವ್ಯವಸ್ಥಾಪಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.ಯಾವುದೇ ಅರ್ಹ ಮತದಾರ ಮತದಾನದ ಸಾಂವಿಧಾನಿಕ ಹಕ್ಕಿನಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಮತದಾನ ದಿನದಂದು ಮತದಾನ ಮಾಡಲು ಅನುಕೂಲವಾಗುವಂತೆ ಎಲ್ಲ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಹಾಗೂ ಇತರ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಬೇಕು ಎಂದು ಕೇಂದ್ರ ಚುನಾವಣಾ ಆಯೋಗ ಸೂಚನೆ ನೀಡಿದ್ದು, ಇದನ್ನು ತಪ್ಪದೆ ಎಲ್ಲರೂ ಪಾಲಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರೂ ಆದ ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ ಮಾತನಾಡಿ, ಜಿಲ್ಲೆಯ ಶೇಕಡಾವಾರು ಮತದಾನ ಪ್ರಮಾಣ ಹೆಚ್ಚಿಸಲು ಕೈಗಾರಿಕೆ ವಲಯಗಳಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ತಿಳಿಸಿದರು.ಕಳೆದ ಬಾರಿ ಬಳ್ಳಾರಿ ನಗರ ಕ್ಷೇತ್ರದಲ್ಲಿ 2019ರ ಲೋಕಸಭೆ ಚುನಾವಣೆಯಲ್ಲಿ ಶೇ.63, 2023ರ ವಿಧಾನಸಭೆ ಚುನಾವಣೆಯಲ್ಲಿ ಶೇ.76 ಮತದಾನವಾಗಿತ್ತು. ಈ ಬಾರಿಯ ಚುನಾವಣೆಯಲ್ಲಿ ಮತದಾನ ಪ್ರಮಾಣ ಇನ್ನೂ ಹೆಚ್ಚಿಸಲು ಆದ್ಯತೆ ನೀಡಿ ಸಹಕರಿಸಬೇಕು ಎಂದು ಕೋರಿದರು.
ಮತದಾನ ಮಾಡಲು ಭಾವಚಿತ್ರವಿರುವ ಮತದಾರರ ಗುರುತಿನ ಚೀಟಿ ಇಲ್ಲದಿದ್ದಲ್ಲಿ, ಮತದಾನಕ್ಕೆ ಅಗತ್ಯವಿರುವ ಪರ್ಯಾಯ ದಾಖಲೆಗಳು ಯಾವುವು ಎಂಬುದರ ಬಗ್ಗೆ ಅಧಿಕಾರಿಗಳಿಗೆ ತಿಳಿದಿರುತ್ತದೆ. ಆದರೆ, ಕಾರ್ಯಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಗೊತ್ತಿರುವುದಿಲ್ಲ. ಹೀಗಾಗಿ ಜಿಲ್ಲೆಯಲ್ಲಿ ಹಲವಾರು ರೀತಿಯ ಕೈಗಾರಿಕೆಗಳಿದ್ದು, ಜಿಲ್ಲಾ ಸ್ವೀಪ್ ಸಮಿತಿಯಿಂದ ಮಾಹಿತಿ ನೀಡಲಾಗುತ್ತದೆ. ಅವುಗಳನ್ನು ತಮ್ಮ ತಮ್ಮ ಸಂಸ್ಥೆಗಳ ಮುಂದೆ ಈ ವಿವರಗಳನ್ನು ಪ್ರದರ್ಶಿಸಬೇಕು ಎಂದು ತಿಳಿಸಿದರು.ಮತದಾನ ಕೇಂದ್ರಗಳಲ್ಲಿ ನೀರು, ಗಾಳಿ, ನೆರಳಿನ ವ್ಯವಸ್ಥೆ, ರ್‍ಯಾಂಪ್, ವೀಲ್ ಚೇರ್, ವಿಶ್ರಾಂತಿ ಕೊಠಡಿ ಸೇರಿದಂತೆ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು. ಈ ಭಾಗದ ಜೀನ್ಸ್ ಗಾರ್ಮೆಂಟ್ಸ್ ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳೆಯರು ಸೇರಿದಂತೆ ಎಲ್ಲ ಮತದಾರರೂ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಲು ಸೂಚಿಸಬೇಕು ಎಂದರು.
ಬಳ್ಳಾರಿ ನಗರದ ಮತದಾನ ಪ್ರಮಾಣ ಹೆಚ್ಚಿಸಲು ಜಿಲ್ಲಾ ಸ್ವೀಪ್ ಸಮಿತಿಯೊಂದಿಗೆ ಕೈಜೋಡಿಸಬೇಕು, ನಗರದ ಪ್ರಮುಖ ಮಾರುಕಟ್ಟೆಗಳ ರಸ್ತೆಗಳಲ್ಲಿ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮ ಆಯೋಜಿಸಬೇಕು. ಇದಕ್ಕೆ ವಿವಿಧ ವಾಣಿಜ್ಯೋದ್ಯಮ ಸಂಸ್ಥೆಯ ಪದಾಧಿಕಾರಿಗಳು ಸಾಥ್ ನೀಡಲಾಗುವುದು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಪದಾಧಿಕಾರಿಗಳು ಸಭೆಗೆ ತಿಳಿಸಿದರು.ಜಿಪಂ ಮುಖ್ಯ ಯೋಜನಾಧಿಕಾರಿ ವಾಗೀಶ್ ಶಿವಾಚಾರ್ಯ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಬಿ.ಸೋಮಶೇಖರ ಸೇರಿದಂತೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಹಿರಿಯ ಪದಾಧಿಕಾರಿಗಳು, ವಿವಿಧ ವಾಣಿಜ್ಯ ಉದ್ಯಮಿಗಳು, ವ್ಯವಸ್ಥಾಪಕರುಗಳು ಹಾಗೂ ಇತರರು ಉಪಸ್ಥಿತರಿದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))