ವಿಜಯಪುರ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಎಸ್‌ಐಆರ್ ಸಂಬಂಧಿಸಿದಂತೆ ಮನೆ-ಮನೆ ಸಮೀಕ್ಷೆ ಹಾಗೂ ಪರಿಶೀಲನೆ ಕಾರ್ಯ ಕೈಗೊಂಡು ಸೋಮವಾರ ಅಂತಿಮ ಕರಡು ಪ್ರತಿ ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳಿದ್ದಲ್ಲಿ ರಾಜಕೀಯ ಪಕ್ಷಗಳು ಸೆ.23ರೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ತಿಳಿಸಿದರು.
ಕನ್ನಡಪ್ರಭ ವಾರ್ತೆ ವಿಜಯಪುರ
ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದಂತೆ ಮನೆ-ಮನೆ ಸಮೀಕ್ಷೆ ಹಾಗೂ ಪರಿಶೀಲನೆ ಕಾರ್ಯ ಕೈಗೊಂಡು ಸೋಮವಾರ ಅಂತಿಮ ಕರಡು ಪ್ರತಿ ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳಿದ್ದಲ್ಲಿ ರಾಜಕೀಯ ಪಕ್ಷಗಳವರು ಸೆ.23ರೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಆನಂದ.ಕೆ ತಿಳಿಸಿದರು.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಚುನಾವಣೆ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಪೂರ್ಣಗೊಂಡಿದೆ. ಕರಡು ಮತದಾರರ ಪಟ್ಟಿಯನ್ನು ಜಿಲ್ಲೆಯ ಎಲ್ಲಾ ತಹಸೀಲ್ದಾರ ಕಚೇರಿಗಳು, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯತಿಯಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ. ಮತದಾರರು ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಕರಡು ಪಟ್ಟಿ ಪರಿಶೀಲಿಸಬಹುದಾಗಿದೆ. ಒಂದು ವೇಳೆ ಯಾವುದೇ ತಮ್ಮ ಹಕ್ಕು ಮತ್ತು ಆಕ್ಷೇಪಣೆಗಳಿದ್ದಲ್ಲಿ ಆಗಸ್ಟ್ 24 ರಿಂದ ಸೆಪ್ಟೆಂಬರ್ 23ರ ವರೆಗೆ ಸಲ್ಲಿಸಬಹುದಾಗಿದೆ ಎಂದರು. ಸಭೆಯಲ್ಲಿ ಜಿಲ್ಲೆಯ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.