ಜಿಲ್ಲೆಯ ಎಲ್ಲಾ ಹೋಬಳಿ ಹಾಗೂ ತಾಲ್ಲೂಕು ಮಟ್ಟದಲ್ಲಿ ಮೇವು ಲಭ್ಯತೆಯನ್ನು ತಕ್ಷಣ ಪರಿಶೀಲಿಸಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕನ್ನಡಪ್ರಭ ವಾರ್ತೆ ತುಮಕೂರುಜಿಲ್ಲೆಯ ಎಲ್ಲಾ ಹೋಬಳಿ ಹಾಗೂ ತಾಲ್ಲೂಕು ಮಟ್ಟದಲ್ಲಿ ಮೇವು ಲಭ್ಯತೆಯನ್ನು ತಕ್ಷಣ ಪರಿಶೀಲಿಸಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪಶುಪಾಲನಾ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮೇವು ಲಭ್ಯತೆ ಮತ್ತು ಬರ ಪರಿಸ್ಥಿತಿ ಹಾಗೂ ರಾಷ್ಟ್ರೀಯ ಲಸಿಕ ಕಾರ್ಯಕ್ರಮ ಅಭಿಯಾನ ಕುರಿತು ಚರ್ಚಿಸಿದ ಅವರು, ಪ್ರಸ್ತುತ ಜಿಲ್ಲೆಯಲ್ಲಿ ಬೇಸಿಗೆಯ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರು ಹಾಗೂ ಮೇವಿನ ಬಗ್ಗೆ ಹೆಚ್ಚಿನ ನಿಗಾವಹಿಸುವ ಅನಿವಾರ್ಯತೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಹೋಬಳಿ ಹಾಗೂ ತಾಲೂಕು ಮಟ್ಟದಲ್ಲಿ ಇಲಾಖೆಯ ಸಹಾಯಕ ನಿರ್ದೇಶಕರು ಮೇವಿನ ಲಭ್ಯತೆ ಕುರಿತು ಮಾಹಿತಿ ಸಂಗ್ರಹಿಸಿ ತಕ್ಷಣ ವರದಿ ಸಲ್ಲಿಸುವಂತೆ ಅವರು ಸಭೆಯಲ್ಲಿ ಸೂಚಿಸಿದರು. ಎಲ್ಲಾ ತಾಲೂಕು ಸಹಾಯಕ ನಿರ್ದೇಶಕರು ಪ್ರತಿದಿನ ಕನಿಷ್ಠ 10 ಬ್ಲಾಕ್‌ಗಳಿಗೆ ಭೇಟಿ ನೀಡಿ, ಜಿಪಿಎಸ್ ಫೋಟೋಗಳೊಂದಿಗೆ ದೈನಂದಿನ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲು ಸೂಚಿಸಿದರು.
ಎಲ್ಲಾ ತಾಲೂಕುಗಳಲ್ಲಿ ಎಲ್ಲಾ ಜಾನುವಾರುಗಳಿಗೆ ಲಸಿಕೆ ಕಾರ್ಯಕ್ರಮವನ್ನು ಶೀಘ್ರದಲ್ಲಿ ಪೂರ್ಣಗೊಳಿಸಲು ತಿಳಿಸಿದ ಅವರು, ರೈತರಿಗೆ ಮೇವು ಕಿಟ್‌ಗಳನ್ನು ವಿತರಣೆ ಮಾಡುವ ಕ್ರಮ ಕೈಗೊಳ್ಳಬೇಕು. ಮೇವು ಕಿಟ್‌ಗಳು ಮೇ ೫ರೊಳಗಾಗಿ ಲಭ್ಯವಾಗಲಿದ್ದು, ವಿತರಣೆಗೆ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಲು ತಿಳಿಸಿದರು.ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಮೇವಿನ ಪರಿಸ್ಥಿತಿ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ, ಈ ಬಾರಿ ಮುಂಗಾರಿನಲ್ಲಿ ಮಳೆಯ ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಮೇವಿನ ಅಭಾವ ಉಂಟಾಗುವ ಸಾಧ್ಯತೆ ಇರುವುದಾಗಿ ತಿಳಿಸಲಾಯಿತು. ಈ ಹಿನ್ನೆಲೆಯಲ್ಲಿ ರೈತರಿಗೆ ಮೇವಿನ ಬೀಜದ ಕಿರುಪೊಟ್ಟಣಗಳನ್ನು ವಿತರಣೆ ಮಾಡಲು ಸೂಚನೆ ನೀಡಲಾಗಿದೆ ಎಂದರು. ಪ್ರತಿಯೊಂದು ತಾಲೂಕಿನಲ್ಲಿಯೂ ರೈತರಿಗೆ ವಿತರಣೆ ಮಾಡಲು ಅಗತ್ಯವಿರುವ ಮೇವಿನ ಬೀಜದ ಕಿರುಪೊಟ್ಟಣಗಳ ಬೇಡಿಕೆ ಪಟ್ಟಿಯನ್ನು ತಕ್ಷಣ ಸಲ್ಲಿಸಬೇಕು. ತಾಲೂಕು ಮಟ್ಟದ ಅಧಿಕಾರಿಗಳು ಹಳ್ಳಿಗಳಿಗೆ ಖುದ್ದಾಗಿ ಭೇಟಿ ನೀಡಿ, ಪ್ರಸ್ತುತ ಮೇವಿನ ಲಭ್ಯತೆ ಕುರಿತು ಸಮಗ್ರ ಮಾಹಿತಿ ಸಂಗ್ರಹಿಸಿ, ವರದಿಯನ್ನು ಸಲ್ಲಿಸುವಂತೆ ಎಲ್ಲಾ ತಾಲೂಕು ಮುಖ್ಯ ಪಶುವೈದ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದರು.ಆಫ್ರಿಕನ್ ಟಾಲ್ ಮೇಜ್ ಸೋರ್ಗಂ ಮಲ್ಟಿಕಟ್ ಮೇವಿನ ಬೀಜದ ಕಿರುಪೊಟ್ಟಣಗಳನ್ನು ನಿಯಮಾನುಸಾರ ಖರೀದಿ ಮಾಡಿ, ಮೇ 2026ರ ಮೊದಲ ವಾರದೊಳಗೆ ಸರಬರಾಜು ಮಾಡುವಂತೆ ಮಲ್ಲಸಂದ್ರದ ತುಮಕೂರು ಹಾಲು ಒಕ್ಕೂಟ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿದರು. ಕಾಲುಬಾಯಿ ರೋಗದ ವಿರುದ್ಧ ಎಲ್ಲಾ ದನ, ಎಮ್ಮೆ ಮತ್ತು ಹಂದಿಗಳಿಗೆ ಉಚಿತವಾಗಿ ಲಸಿಕಾ ಕಾರ್ಯಕ್ರಮವನ್ನು ನಿಗದಿತ ದಿನಾಂಕಗಳಲ್ಲಿ ಹಮ್ಮಿ ಕೊಳ್ಳಬೇಕು. ರೈತರು ತಮ್ಮ ಜಾನುವಾರುಗಳಿಗೆ ತಪ್ಪದೇ ಕಾಲುಬಾಯಿ ರೋಗದ ಲಸಿಕೆಯನ್ನು ಹಾಕಿಸಿ, ರೋಗದಿಂದ ರಕ್ಷಿಸಿಕೊಳ್ಳಬೇಕು ಎಂದು ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕ ಲಕ್ಷ್ಮಣ್ ಎಸ್. ತೋಟಗಾರಿಕೆ ಉಪನಿರ್ದೇಶಕಿ ಶಾರದಮ್ಮ, ಪಶುಪಾಲನೆ ಉಪನಿರ್ದೇಶಕ ಶಿವಪ್ರಸಾದ ಸೇರಿದಂತೆ ಗೊಬ್ಬರ ವಿತರಕರು. ಬೆಳೆ ವಿಮೆದಾರರು ಹಾಗೂ ತಾಲೂಕು ಮಟ್ಟದ ಸಹಾಯಕ ನಿರ್ದೇಶಕರುಗಳು ಭಾಗವಹಿಸಿದ್ದರು.