ಸಾರಾಂಶ
ಕನ್ನಡಪ್ರಭ ವಾರ್ತೆ ತುಮಕೂರುಜಿಲ್ಲೆಯ 18 ಕೇಂದ್ರಗಳಲ್ಲಿ ಫೆಬ್ರವರಿ 15 ರಂದು ವಿವಿಧ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿಗೆ ನಡೆಯಲಿರುವ ಪ್ರವೇಶ ಪರೀಕ್ಷೆಯನ್ನು ಯಾವುದೇ ಲೋಪದೋ಼ಷವಿಲ್ಲದಂತೆ ಪಾರದರ್ಶಕವಾಗಿ ನಡೆಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ಗುರುವಾರ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಾದ್ಯಂತ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿ ಪರೀಕ್ಷೆಯನ್ನು ಯಾವುದೇ ಲೋಪವಿಲ್ಲದಂತೆ ಹಾಗೂ ಅಹಿತಕರ ಘಟನೆ ಸಂಭವಿಸದಂತೆ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ. ವ್ಯಾಪ್ತಿಯೊಳಗಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗುವುದು ಎಂದು ತಿಳಿಸಿದರು. ಪರೀಕ್ಷೆಯು ಫೆಬ್ರವರಿ 15ರಂದು ಮಧ್ಯಾಹ್ನ 2.30 ರಿಂದ 4.30ರವರೆಗೆ ನಡೆಯಲಿದ್ದು, ವಿದ್ಯಾರ್ಥಿಗಳು ಪರೀಕ್ಷಾ ಸಮಯಕ್ಕೆ ಅರ್ಧ ಗಂಟೆ ಮುಂಚಿತವಾಗಿ ಕೇಂದ್ರದಲ್ಲಿ ಹಾಜರಿರಬೇಕು. ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯೊಳಗೆ ಯಾವುದೇ ಆಧುನಿಕ ಎಲೆಕ್ಟ್ರಾನಿಕ್ ಉಪಕರಣ, ಕ್ಯಾಲ್ಕುಲೇಟರ್, ಮೊಬೈಲ್ ಫೋನ್, ಬ್ಲೂಟೂತ್, ವೈರ್‌ಲೆಸ್ ಸೆಟ್, ಮತ್ತಿತರ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವಂತಿಲ್ಲ ಎಂದು ತಿಳಿಸಿದರು. ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅನುವಾಗುವಂತೆ ಕೊಠಡಿಗೆ ಉತ್ತಮ ಬೆಳಕಿನ ವ್ಯವಸ್ಥೆ ಕಲ್ಪಿಸಬೇಕು ಎಂದು ತಿಳಿಸಿದರಲ್ಲದೆ, ಪರೀಕ್ಷಾ ಕೇಂದ್ರಗಳ ಬಳಿ 2 ಮಹಿಳಾ ಹಾಗೂ ಪುರುಷ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಬೇಕೆಂದು ಪೊಲೀಸ್ ಇಲಾಖೆಗೆ ಸೂಚನೆ ನೀಡಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಾಲಗುರುಮೂರ್ತಿ, ಜಿಲ್ಲಾ ಖಜಾನೆ ಉಪನಿರ್ದೇಶಕ ಉಮಾ, ವಿವಿಧ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿವಿಧ ಕಾಲೇಜುಗಳ ಪ್ರಾಂಶುಪಾಲರು ಸೇರಿದಂತೆ ಮತ್ತಿತರರು ಹಾಜರಿದ್ದರು.