ಸಾರಾಂಶ
ರಾಷ್ಟ್ರೀಯ ಹೆದ್ದಾರಿ ೭೫ ರಲ್ಲಿ ಮಳೆಗಾಲದ ಸಮಯದಲ್ಲಿ ಯಾವುದೇ ಸಮಸ್ಯೆ ಉಂಟಾಗದಂತೆ ಸರ್ಕಾರದ ಮಾರ್ಗಸೂಚಿಯಂತೆ ಕಾಮಗಾರಿಯನ್ನು ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸತ್ಯಭಾಮ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ವಿಪತ್ತು ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಭೂ ಕುಸಿತ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಿ ಕಾಮಗಾರಿ ಪೂರ್ಣಗೊಳಿಸಲು ತಿಳಿಸಿದರು.
ಕನ್ನಡಪ್ರಭ ವಾರ್ತೆ ಹಾಸನ
ರಾಷ್ಟ್ರೀಯ ಹೆದ್ದಾರಿ ೭೫ ರಲ್ಲಿ ಮಳೆಗಾಲದ ಸಮಯದಲ್ಲಿ ಯಾವುದೇ ಸಮಸ್ಯೆ ಉಂಟಾಗದಂತೆ ಸರ್ಕಾರದ ಮಾರ್ಗಸೂಚಿಯಂತೆ ಕಾಮಗಾರಿಯನ್ನು ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸತ್ಯಭಾಮ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ವಿಪತ್ತು ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಭೂ ಕುಸಿತ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಿ ಕಾಮಗಾರಿ ಪೂರ್ಣಗೊಳಿಸಲು ತಿಳಿಸಿದರು. ಕಾಫಿ ಹೊರತುಪಡಿಸಿ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ನಷ್ಟ ಕುರಿತು ಸರ್ಕಾರಕ್ಕೆ ಈಗಾಗಲೇ ವರದಿ ಸಲ್ಲಿಸಲಾಗಿದೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ ಮಳೆಯಿಂದ ಹಾನಿಯಾಗಿರುವ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ನಷ್ಟ ಕುರಿತು ಪರಿಹಾರ ಪೋರ್ಟಲ್‌ನಲ್ಲಿ ಈಗಾಗಲೇ ದಾಖಲಿಸಲಾಗಿದೆ.
ಮುಂಗಾರಿನ ಬೆಳೆ ಹಾನಿಗೆ ಮೊದಲ ಹಂತದ ಪರಿಹಾರ ಹಣ ಬಂದಿದೆ. ಎರಡನೇ ಹಂತದ ಹಣ ಹಾಗೂ ಹಿಂಗಾರಿನಲ್ಲಿ ಹಾನಿಯಾಗಿರುವ ಬೆಳೆ ಪರಿಹಾರ ಬಿಡುಗಡೆಗಾಗಿ ಸರ್ಕಾರಕ್ಕೆ ಮನವಿ ಮಾಡಲು ಪತ್ರ ಸಿದ್ದಪಡಿಸಲು ಅಧಿಕಾರಿಗಳಿಗೆ ಸೂಚಿಸಿದರು.ರೈತರ ಆತ್ಮಹತ್ಯೆ, ಆಕಸ್ಮಿಕ ಸಾವು, ಬಣವೆ ನಷ್ಟಕ್ಕೆ ಸಂಬಂಧಿಸಿದಂತೆ ಬಾಕಿ ಇರುವ ಹಣವನ್ನು ಬಿಡುಗಡೆ ಮಾಡುವಂತೆ ಕೋರಿ ಪ್ರಧಾನ ಕಾರ್ಯದರ್ಶಿ ಅವರಿಗೆ ಪತ್ರ ಬರೆಯಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಲೋಕೋಪಯೋಗಿ ಮತ್ತು ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗಕ್ಕೆ ರಸ್ತೆ ದುರಸ್ತಿಗೆ ಹಣ ನೀಡಲಾಗಿದ್ದು, ಕಾಮಗಾರಿಗಳನ್ನು ಚುರುಕಾಗಿ ಗೊಳಿಸಲು ತಿಳಿಸಿದರು. ಕುಡಿಯುವ ನೀರಿಗೆ ಯಾವುದೇ ತೊಂದರೆ ಇಲ್ಲ ಎಂದು ಸಭೆಯಲ್ಲಿ ಮಾಹಿತಿ ಪಡೆದರು. ಹೋಂ ಗಾರ್ಡ್‌ಗಳ ಬಾಕಿ ಇರುವ ಗೌರವಧನ ನೀಡಲು ಕ್ರಮವಹಿಸುವಂತೆ ಹೇಮಾವತಿ ಜಲಾಶಯದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಚಂದ್ರಶೇಖರ್, ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.