ಸಾರಾಂಶ
ಕನ್ನಡಪ್ರಭ ವಾರ್ತೆ ಉಡುಪಿ
ಜಿಲ್ಲೆಯಲ್ಲಿ ಕೈಗಾರಿಕಾ ಪ್ರದೇಶಗಳ ವಿಸ್ತರಣೆಗೆ ಗುರುತಿಸಲಾಗಿರುವ ಜಮೀನಿನ ಭೂ ಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಂಡು, ಹೊಸ ಕೈಗಾರಿಕೆಗಳ ಸ್ಥಾಪನೆಗೆ ಅನುವು ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾ ಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.ಅವರು ಬುಧವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೈಗಾರಿಕಾ ಸ್ಪಂದನ ಸಮಿತಿ ಸಭೆ, ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ ಹಾಗೂ ರಫ್ತು ಉತ್ತೇಜನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕೆ ಈಗಾಗಲೇ ಹೆಬ್ರಿ ತಾಲೂಕಿನ ಕೆರೆಬೆಟ್ಟು ಗ್ರಾಮದಲ್ಲಿ 31.28 ಎಕ್ರೆ ಹಾಗೂ ಶಿವಪುರ ಗ್ರಾಮದಲ್ಲಿ 45.75 ಎಕ್ರೆ ಜಮೀನು ಸೇರಿದಂತೆ ಒಟ್ಟು 77.03 ಎಕ್ರೆ ಖಾಸಗಿ ಜಮೀನ ಭೂ ಮಾಲೀಕರಿಗೆ ಪೂರ್ಣ ಪರಿಹಾರಧನವನ್ನು ಪಾವತಿಸಿ, ನಿಯಮಾನುಸಾರ ಸ್ವಾಧೀನಪಡಿಸಿಕೊಳ್ಳಲಾಗಿದೆ. ಆದರೆ 36.56 ಎಕ್ರೆ ಸರ್ಕಾರಿ ಜಮೀನು ಮಂಜೂರಾತಿ ಪ್ರಕ್ರಿಯೆಯು ಬಾಕಿ ಇದೆ. ಈ ಭೂಮಿಯು ಇಕೋ ಸೆನ್ಸಿಟೀವ್ ಝೋನ್‌ನಲ್ಲಿ ಬರುವ ಬಗ್ಗೆ ಪರಿಶೀಲನೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಮಾಡಬೇಕು ಎಂದರು.ಜಿಲ್ಲೆಯ ಶಿವಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಅನುಮತಿ ಪಡೆಯದೇ ಹಾಗೂ ಜಾಗಕ್ಕೆ ಸಂಬಂಧಿಸಿದಂತೆ ಅಗತ್ಯ ದಾಖಲಾತಿ ನೀಡದೇ ಆರ್.ಎಂ.ಸಿ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಈ ಬಗ್ಗೆ ಸಂಬಂಧ ಪಟ್ಟ ಮಾಲೀಕರುಗಳಿಗೆ ನೋಟಿಸ್ ನೀಡುವಂತೆ ಸೂಚನೆ ನೀಡಿದ ಅವರು, ಡಾ.ಸರೋಜಿನಿ ಮಹಿಷಿ ವರದಿಯಂತೆ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು ಎಂದು ಹೇಳಿದರು.ಜಿಲ್ಲೆಯಲ್ಲಿ ಒಟ್ಟು 22 ರಫ್ತು ಆಧಾರಿತ ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ವಿದೇಶಿ ರಫ್ತನ್ನು ಉತ್ತೇಜಿಸುವುದರೊಂದಿಗೆ, ರಫ್ತು ವ್ಯವಹಾರವನ್ನು ಇನ್ನಷ್ಟು ಹೆಚ್ಚಿಸಬೇಕೆಂದರು.ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ವಿ. ನಾಯಕ್, ಕೆ.ಐ.ಎ.ಡಿ.ಬಿ. ಅಭಿವೃದ್ಧಿ ಅಧಿಕಾರಿ ಶ್ರೀನಿವಾಸಮೂರ್ತಿ, ಸಣ್ಣ ಕೈಗಾರಿಕಾ ಸಂಘದ ಜಿಲ್ಲಾ ಅಧ್ಯಕ್ಷ ಹರೀಶ್ ಕುಂದರ್, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಸೀತಾರಾಮ ಶೆಟ್ಟಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಅರುಣ್ ಬಿ., ಶಿವಮೊಗ್ಗ ಕೆ.ಎಸ್.ಎಸ್.ಐ.ಡಿ.ಸಿ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ನಾಗಾಭರಣ ಕೆ.ಪಿ, ಜಿಲ್ಲೆಯ ಸಣ್ಣ ಕೈಗಾರಿಕಾ ಉದ್ದಿಮೆದಾರರು ಹಾಗೂ ಮತ್ತಿತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.