ಚುನಾವಣೆ ಕರ್ತವ್ಯ ಅಚ್ಚುಕಟ್ಟಾಗಿ ನಿರ್ವಹಿಸಲು ಅಧಿಕಾರಿಗಳಿಗೆ ಡಿಸಿ ಸೂಚನೆ

| Published : Mar 13 2024, 02:02 AM IST

ಚುನಾವಣೆ ಕರ್ತವ್ಯ ಅಚ್ಚುಕಟ್ಟಾಗಿ ನಿರ್ವಹಿಸಲು ಅಧಿಕಾರಿಗಳಿಗೆ ಡಿಸಿ ಸೂಚನೆ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಆನಂದ್ ಕೆ. ಅವರು ವಿಡಿಯೊ ಸಂವಾದದ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು

ಕನ್ನಡಪ್ರಭ ವಾರ್ತೆ ಮಂಗಳೂರು

ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡಿರುವ ಎಲ್ಲ ನೋಡಲ್ ಅಧಿಕಾರಿಗಳು ತಮ್ಮ ಕರ್ತವ್ಯ ಹಾಗೂ ಜವಾಬ್ದಾರಿಗಳನ್ನು ಅಚ್ಚಕಟ್ಟಾಗಿ ನಿರ್ವಹಿಸಬೇಕು. ಯಾವ ಕ್ಷಣದಲ್ಲೂ ಲೋಕಸಭೆಗೆ ಚುನಾವಣೆ ಘೋಷಣೆಯಾಗುವ ಸಾಧ್ಯತೆಗಳಿವೆ. ಚುನಾವಣಾ ಕರ್ತವ್ಯವನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕ ರೀತಿಯಲ್ಲಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಚುನಾವಣಾ ನೋಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮತದಾನಕ್ಕೆ ಜಿಲ್ಲೆಯಾದ್ಯಂತ 1,876 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದ್ದು, ಅಂದಾಜು 12 ಸಾವಿರ ಸಿಬ್ಬಂದಿ ಅಗತ್ಯವಿದೆ. ಆ ಸಂಖ್ಯೆಯಲ್ಲಿ ಕೊರತೆಯಾಗಿದ್ದರೆ ಎಚ್.ಆರ್.ಎಂ.ಎಸ್. ತಂತ್ರಾಂಶದಲ್ಲಿ ಲಭ್ಯವಿರುವ ಅಧಿಕಾರಿ, ಸಿಬ್ಬಂದಿಗಳನ್ನು ಈ ಕಾರ್ಯಕ್ಕೆ ಬಳಕೆ ಮಾಡಿಕೊಳ್ಳುವಂತೆ ಸೂಚಿಸಿದ ಅವರು, ಕೂಡಲೇ ಜಿಲ್ಲೆಯ ಎಲ್ಲ ಬಟವಾಡಿ ಅಧಿಕಾರಿಗಳ ಸಭೆ ನಡೆಸಿ ಆಯಾ ಇಲಾಖೆಗಳಲ್ಲಿ ಲಭ್ಯವಿರುವ ಅಧಿಕಾರಿ- ಸಿಬ್ಬಂದಿಗಳನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸುವಂತೆ ಮಾನವ ಸಂಪನ್ಮೂಲ ವಿಭಾಗದ ನೋಡಲ್ ಅಧಿಕಾರಿ ಹೇಮಲತಾ ಅವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಚುನಾವಣೆ ಕಾರ್ಯಕ್ಕೆ ಅಗತ್ಯವಿರುವ ವಾಹನಗಳನ್ನು ಜಿಲ್ಲೆಯ ಪ್ರಾದೇಶಿಕ ಸಾರಿಗೆ ವಿಭಾಗದ ಅಧಿಕಾರಿಗಳು ವ್ಯವಸ್ಥೆ ಮಾಡಿಕೊಡಬೇಕು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಇಲಾಖೆಗಳ ವಾಹನಗಳು, ವಿವಿಧ ನಿಗಮ ಹಾಗೂ ಮಂಡಳಿಗಳಲ್ಲಿರುವ ವಾಹನಗಳು, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ವಾಹನಗಳನ್ನು ಈ ಕಾರ್ಯಕ್ಕೆ ಬಳಸಿಕೊಳ್ಳುವಂತೆ ತಿಳಿಸಿದ ಜಿಲ್ಲಾಧಿಕಾರಿ, ಮಾದರಿ ನೀತಿ ಸಂಹಿತೆ ಜಾರಿಯಾದ ಕೂಡಲೆ ಚುನಾವಣಾ ಕರ್ತವ್ಯ ಆರಂಭವಾಗಲಿದ್ದು, ಸೆಕ್ಟರ್ ಅಧಿಕಾರಿಗಳಿಗೆ ವಾಹನಗಳನ್ನು ಆದ್ಯತೆ ಮೇರೆಗೆ ಒದಗಿಸಬೇಕು ಎಂದು ಹೇಳಿದರು.ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಆನಂದ್ ಕೆ. ಅವರು ವಿಡಿಯೊ ಸಂವಾದದ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು. ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಜಿ., ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲಾ ನೋಡಲ್ ಅಧಿಕಾರಿಗಳು ಇದ್ದರು.