ಹಾವೇರಿ: ದ್ವಿತೀಯ ಪಿಯುಸಿ ಪರೀಕ್ಷೆ ಫೆ. 28ರಿಂದ ಮಾ. 17ರ ವರೆಗೆ ಜಿಲ್ಲೆಯ 25 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು, ಹಾಗಾಗಿ ಯಾವುದೇ ಲೋಪವಾಗದಂತೆ ತಮ್ಮ ಕರ್ತವ್ಯಗಳನ್ನು ಜವಾಬ್ದಾರಿ ಹಾಗೂ ಪಾರದರ್ಶಕವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಅಧಿಕಾರಿಗಳಿಗೆ ಸೂಚಿಸಿದರು.ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಲ್ಲರೂ ಪರೀಕ್ಷಾ ಪಾವಿತ್ರ್ಯತೆ ಕಾಪಾಡಿಕೊಳ್ಳಬೇಕು ಹಾಗೂ ಪರೀಕ್ಷಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲಾದ ವಿವಿಧ ಇಲಾಖೆ ಅಧಿಕಾರಿಗಳು, ಮಾರ್ಗಾಧಿಕಾರಿಗಳು, ವೀಕ್ಷಕರು, ಕೊಠಡಿ ಮೇಲ್ವಿಚಾರಕರು ತಮ್ಮ ಕರ್ತವ್ಯಗಳಲ್ಲಿ ಯಾವುದೇ ಲೋಪವಾಗದಂತೆ ಜವಾಬ್ದಾರಿಯಿಂದ ಹಾಗೂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.ತ್ರಿಸದಸ್ಯ ಕಮಿಟಿ: ಪ್ರಶ್ನೆ ಪತ್ರಿಕೆ ಬಂಡಲ್ ತೆಗೆದುಕೊಂಡು ಹೋಗಲು ಪ್ರತಿ ತಾಲೂಕಿಗೂ ತಹಸೀಲ್ದಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಪ್ರಿನ್ಸಿಪಾಲ್ ಒಳಗೊಂಡ ತ್ರಿ ಸದಸ್ಯ ಸಮಿತಿ ರಚಿಸಲಾಗಿದೆ. ಪ್ರಶ್ನೆ ಪತ್ರಿಕೆ ತೆಗೆದುಕೊಂಡು ಹೋಗುವ ವಾಹನಕ್ಕೆ ಜಿಪಿಎಸ್ ಕಡ್ಡಾಯಗೊಳಿಸಲಾಗಿದೆ. ಪೊಲೀಸ್ ಬಂದೋಬಸ್ತ್‌ನಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಆಯಾ ತಾಲೂಕಿಗೆ ನಿಗದಿಪಡಿಸಿದ ಸಮಯಕ್ಕೆ ಅನುಗುಣವಾಗಿ ತೆಗೆದುಕೊಂಡು ಹೋಗಬೇಕು ಎಂದು ಸೂಚನೆ ನೀಡಿದರು.ಸ್ವಚ್ಛತೆಗೆ ಆದ್ಯತೆ: ಪರೀಕ್ಷಾ ಕೊಠಡಿಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು, ವ್ಯವಸ್ಥಿತವಾಗಿ ಪಿಠೋಪಕರಣ, ಗಾಳಿ ಮತ್ತು ಬೆಳಕಿನ ವ್ಯವಸ್ಥೆ ಇರಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು ಹಾಗೂ ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯ ಹೊಂದಿರಬೇಕು. ಕೊಠಡಿ ಮೇಲ್ವಿಚಾಕರನ್ನು ನೇಮಕ ಮಾಡುವಾಗ ವಿಜ್ಞಾನ ಉಪನ್ಯಾಸಕರನ್ನು ಕಲಾ-ವಾಣಿಜ್ಯ ವಿಷಯಗಳಿಗೆ ಹಾಗೂ ಕಲಾ - ವಾಣಿಜ್ಯ ವಿಭಾಗದ ಉಪನ್ಯಾಸಕರನ್ನು ವಿಜ್ಞಾನ ವಿಷಯದ ಪರೀಕ್ಷೆಗೆ ನಿಯೋಜಿಸಬೇಕು. ಕೊಠಡಿ ಮೇಲ್ವಿಚಾರಕರ ಮಕ್ಕಳು ಪರೀಕ್ಷೆ ಬರೆಯುತ್ತಿಲ್ಲ ಎಂಬುದನ್ನು ಖಾತ್ರಿಪಡಿಸಿಕೊಂಡು ನಿಯೋಜಿಸಬೇಕು ಎಂದು ತಿಳಿಸಿದರು. ಪರೀಕ್ಷಾ ಕೇಂದ್ರಗಳಿಗೆ ಬಂದೋಬಸ್ತ್: ಪರೀಕ್ಷೆ ನಡೆಯುವ ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಬಂದೋಬಸ್ತ್ ಒದಗಿಸಲು ಹಾಗೂ ಆರೋಗ್ಯ ಶುಶ್ರೂಷಕಿಯರನ್ನು ನಿಯೋಜನೆ ಮಾಡಬೇಕು ಎಂದು ಪೊಲೀಸ್ ಇಲಾಖೆ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಸಿಸಿ ಟಿವಿ ಕಡ್ಡಾಯ: ಪ್ರಶ್ನೆ ಪತ್ರಿಕೆ ಬಂಡಲ್ ತೆರೆಯುವಾಗ ಮತ್ತು ಉತ್ತರ ಪತ್ರಿಕೆ ಬಂಡಲ್‌ಗಳನ್ನು ಕಡ್ಡಾಯವಾಗಿ ಸಿಸಿಟಿವಿ ಕಣ್ಗಾವಲಿನಲ್ಲಿ ಸೀಲ್ ಮಾಡಬೇಕು. ಪರೀಕ್ಷೆ ಮುಗಿದ ನಂತರ ಉತ್ತರ ಪತ್ರಿಕೆ ಬಂಡಲ್‌ಗಳನ್ನು ಸೂಕ್ತ ಪೊಲೀಸ್ ಬಂದೋಬಸ್ತ್‌ನಲ್ಲಿ ಅಂಚೆ ಕಚೇರಿಗೆ ಸಲ್ಲಿಸಬೇಕು ಎಂದು ತಿಳಿಸಿದರು.ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ: ಆಕಸ್ಮಿಕವಾಗಿ ಬೇರೆ ಕೇಂದ್ರದ ವಿದ್ಯಾರ್ಥಿಗಳು ನಿಮ್ಮ ಕೇಂದ್ರಕ್ಕೆ ಬಂದರೆ, ಅವರಿಗೆ ಸರಿಯಾದ ಮಾರ್ಗದರ್ಶನ ನೀಡಿ, ಅವರನ್ನು ಆಯಾ ಪರೀಕ್ಷಾ ಕೇಂದ್ರಗಳಿಗೆ ಕಳುಹಿಸಲು ಸಹಕರಿಸಬೇಕು. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಭಯದ ವಾತಾವರಣ ಉಂಟಾಗಬಾರದು ಎಂದು ಸಲಹೆ ನೀಡಿದರು. ವಿಶೇಷ ಸಾರಿಗೆ: ಪರೀಕ್ಷಾ ಕೇಂದ್ರಗಳಲ್ಲಿ ಹೆಚ್ಚಾಗಿ ನಗರ ಪ್ರದೇಶದಲ್ಲಿ ಇರುವುದರಿಂದ ಗ್ರಾಮೀಣ ಪ್ರದೇಶದಿಂದ ಬರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿಶೇಷ ಸಾರಿಗೆ ಸೌಲಭ್ಯ ಒದಗಿಸುವಂತೆ ಎನ್.ಡಬ್ಲ್ಯೂ ಕೆ.ಎಸ್ ಆರ್‌ಟಿಸಿ ಹಾವೇರಿ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಸೂಚನೆ ನೀಡಿದರು. ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಮುಂಜಾಗ್ರತೆ ವಹಿಸುವಂತೆ ಹೆಸ್ಕಾಂ ಅಧಿಕಾರಿಗಳಿಗೆ ತಿಳಿಸಿದರು.ಇಲೆಕ್ಟ್ರಾನಿಕ್ ಉಪಕರಣಗಳ ನಿಷೇಧ..ಪರೀಕ್ಷಾರ್ಥಿಗಳು ಅಥವಾ ಕೊಠಡಿಯ ಮೇಲ್ವಿಚಾರಕರಾಗಲಿ ಪರೀಕ್ಷಾ ಕೇಂದ್ರದೊಳಗೆ ಅತ್ಯಾಧುನಿಕ ಇಲೆಕ್ಟ್ರಾನಿಕ್ ಉಪಕರಣಗಳಾದ ಮೊಬೈಲ್, ಬ್ಲೂಟೂತ್, ಪೇಜರ್, ವೈರಲೆಸ್ ಸೆಟ್ ಹಾಗೂ ರಿಸ್ಟ್ ವಾಚ್‌ಗಳನ್ನು ನಿಷೇಧಿಸಿದೆ. ಈ ಕುರಿತಂತೆ ಅಧಿಕಾರಿಗಳು ಎಚ್ಚರವಹಿಸಬೇಕು ಎಂದು ಸೂಚಿಸಿದರು.200 ಮೀಟರ್ ಪ್ರದೇಶ ನಿಷೇಧ: ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್‌ವರೆಗೆ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ನಿಷೇಧಿತ ವಲಯದಲ್ಲಿ ಝರಾಕ್ಸ್ ಹಾಗೂ ಸೈಬರ್ ಕೆಫೆಗಳನ್ನು ಮುಚ್ಚಲು ಆದೇಶಿಸಲಾಗಿದೆ ಎಂದು ತಿಳಿಸಿದರು.14,264 ವಿದ್ಯಾರ್ಥಿಗಳ ನೋಂದಣಿ: ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಶೋಕ ಶಾಸ್ತ್ರಿ ಅವರು ಮಾತನಾಡಿ, ಜಿಲ್ಲೆಯಲ್ಲಿ 13,077 ಹೊಸ, 856 ಪುನರಾವರ್ತಿತ, 327 ಖಾಸಗಿ ಹಾಗೂ ಫಲಿತಾಂಶ ಸುಧಾರಣೆ ಬಯಸಿ 04 ವಿದ್ಯಾರ್ಥಿಗಳು ಸೇರಿ 14,264 ವಿದ್ಯಾರ್ಥಿಗಳು ಪರೀಕ್ಷೆ ನೋಂದಾಯಿಸಿಕೊಂಡಿದ್ದಾರೆ ಎಂದು ಸಭೆಗೆ ಮಾಹಿತಿ ನೀಡಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಎಲ್, ಜಿ.ಪಂ. ಮುಖ್ಯ ಯೋಜನಾಧಿಕಾರಿ ಎಚ್.ವೈ.ಮೀಶೆ, ಜಂಟಿ ಕೃಷಿ ನಿರ್ದೇಶಕ ಮಲ್ಲಿಕಾರ್ಜುನ, ತಹಸೀಲ್ದಾರ್ ಶರಣಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ಪಾಟೀಲ, ಎಂ.ಬಿ.ಅಂಬಿಗೇರ, ಶ್ರೀಧರ, ಶ್ಯಾಮಸುಂದರ ಅಡಿಗ, ಆರ.ವಿ. ಚಿನ್ನಿಕಟ್ಟಿ, ಕೋಟಿ, ಹಾವೇರಿ ಶಹರ ಠಾಣೆ ಪೊಲೀಸ್ ಇನ್ಸಪೆಕ್ಟರ್ ಮೋತಿಲಾಲ್ ಪವಾರ್, ವಿವಿಧ ತಾಲೂಕುಗಳ ತಹಸೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಇದ್ದರು.
ಪಿಯು ಪರೀಕ್ಷೆ ಪಾರದರ್ಶಕ ರೀತಿಯಲ್ಲಿ ನಡೆಸುವಂತೆ ಡಿಸಿ ಸೂಚನೆ
ದ್ವಿತೀಯ ಪಿಯುಸಿ ಪರೀಕ್ಷೆ ಫೆ. 28ರಿಂದ ಮಾ. 17ರ ವರೆಗೆ ಜಿಲ್ಲೆಯ 25 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು, ಹಾಗಾಗಿ ಯಾವುದೇ ಲೋಪವಾಗದಂತೆ ತಮ್ಮ ಕರ್ತವ್ಯಗಳನ್ನು ಜವಾಬ್ದಾರಿ ಹಾಗೂ ಪಾರದರ್ಶಕವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಅಧಿಕಾರಿಗಳಿಗೆ ಸೂಚಿಸಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.