ಹೊಸಪೇಟೆ: ಮಾರ್ಚ್ 18ರಿಂದ ಏಪ್ರಿಲ್ 2ರ ವರೆಗೆ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ​ಗಳು ನಡೆಯುತ್ತಿದ್ದು, ಪರೀಕ್ಷೆ ವೇಳೆ ಯಾವುದೇ ಅಕ್ರಮಗಳಿಗೆ ಎಡಮಾಡಿಕೊಡದೇ, ಪಾರದರ್ಶಕವಾಗಿ ಮತ್ತು ಸುಗಮವಾಗಿ ನಡೆಸಲು ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಶನಿವಾರ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷಾ​ ಪೂರ್ವ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಾರ್ಚ್ 18ರಿಂದ ಏಪ್ರಿಲ್ 2ರ ವರೆಗೆ ಜಿಲ್ಲಾ ಕೇಂದ್ರದಲ್ಲಿ 16, ತಾಲೂಕು ಕೇಂದ್ರದಲ್ಲಿ 15, ಹೋಬಳಿ ಮಟ್ಟದಲ್ಲಿ 14 ಹಾಗೂ ಗ್ರಾಮೀಣ ಪ್ರದೇಶದಲ್ಲಿ 28 ಕೇಂದ್ರ ಸೇರಿ ಒಟ್ಟು 73 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಇದಕ್ಕಾಗಿ ಜಿಲ್ಲೆಯಲ್ಲಿ ಒಟ್ಟು 22,041 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಪರೀಕ್ಷಾ ಕೇಂದ್ರಗಳಿಗೆ ನಿಗದಿತ ಅವಧಿಯೊಳಗೆ ಪ್ರಶ್ನೆ ಪತ್ರಿಕೆ ರವಾನಿಸಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಪೂರಕ ವಾತಾವರಣ, ಕೊಠಡಿ, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ಮೂಲ ಸೌಕರ್ಯ ಒದಗಿಸಬೇಕು. ಆರೋಗ್ಯ ಇಲಾಖೆಯಿಂದ ಪ್ರಥಮ ಚಿಕಿತ್ಸಾ ಕಿಟ್‌ನೊಂದಿಗೆ ಸಿಬ್ಬಂದಿ ನಿಯೋಜಿಸಬೇಕು. ಪರೀಕ್ಷೆ ಸಂದರ್ಭದಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಜೆಸ್ಕಾಂ ಎಚ್ಚರ ವಹಿಸಬೇಕು. ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕೆಎಸ್‌ಆರ್‌ಟಿಸಿ ಹೆಚ್ಚುವರಿ ಬಸ್ ಸೇವೆ ಕಲ್ಪಿಸುವಂತೆ ತಿಳಿಸಿದರು.

ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿ ಟಿವಿ ಅಳವಡಿಸಬೇಕು. ಪರೀಕ್ಷಾ ಪ್ರಕ್ರಿಯೆಯನ್ನು ಜಿಲ್ಲಾ ಪಂಚಾಯತ್ ಕೆಸ್ವಾನ್ ನಲ್ಲಿ ತಂಡದೊಂದಿಗೆ ವೆಬ್ ಕಾಸ್ಟಿಂಗ್ ಮೂಲಕ ನಿರಂತರವಾಗಿ ಗಮನಿಸಲಾಗುವುದು ಎಂದು ತಿಳಿಸಿದರು.

ಪ್ರಶ್ನೆ ಪತ್ರಿಕೆಗಳನ್ನು ಜಿಲ್ಲಾ ಮತ್ತು ತಾಲೂಕು ಖಜಾನೆಗಳಲ್ಲಿ ಪೊಲೀಸ್ ಭದ್ರತೆಯಲ್ಲಿ ರವಾನಿಸಬೇಕು. ಪರೀಕ್ಷೆ ಮುಗಿದ ನಂತರ ಪ್ರತಿದಿನ ಉತ್ತರ ಪತ್ರಿಕೆಗಳನ್ನು ಜಿಲ್ಲಾ ಕೇಂದ್ರದ ಭದ್ರತಾ ಕೊಠಡಿಯಲ್ಲಿ ಸುರಕ್ಷಿತವಾಗಿ ಸಂಗ್ರಹಿಸಬೇಕು. ಅಧಿಕಾರಿಗಳಿಗೆ ಈಗಾಗಲೇ ಸಾಕಷ್ಟು ಪರೀಕ್ಷೆ ನಡೆಸಿದ ಅನುಭವಿದೆ. ಆದರೂ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಹೇಳಿದರು.


ಜಿಪಂ ಸಿಇಒ ನೋಂಗ್ಜಾಯ್ ಮಹ್ಮದ್ ಅಲಿ ಅಕ್ರಂ ಷಾ ಮಾತನಾಡಿ, ಕಲಿಕಾ ವಿಷಯದಲ್ಲಿ ತೀರಾ ಹಿಂದುಳಿದ ವಿದ್ಯಾರ್ಥಿಗಳಿಗೆ ಹೆಚ್ಚಿನ ಅಂಕ ಗಳಿಸಲು ಸೂಕ್ತ ನಿರ್ದೇಶನ ನೀಡಿ ಹುರಿದುಂಬಿಸಿ ಪ್ರೋತ್ಸಾಹಿಸಬೇಕು. ಈ ಮೂಲಕ ಫಲಿತಾಂಶ ವೃದ್ಧಿಗೆ ಅಧಿಕಾರಿಗಳು ಶ್ರಮಿಸಬೇಕು. ಪರೀಕ್ಷಾ ವೇಳೆ ಯಾವುದೇ ರೀತಿಯ ಸಮಸ್ಯೆ, ಗೊಂದಲಗಳು ಉಂಟಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಅಥವಾ ಮೇಲಧಿಕಾರಿಗಳನ್ನು ಸಂಪರ್ಕಿಸಿ ಪರಿಹಾರ ಕಂಡುಕೊಳ್ಳಬಹುದು ಎಂದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾಹ್ನವಿ, ಡಿಡಿಪಿಐ ವೆಂಕಟೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಶೇಖರಪ್ಪ ಹೊರಪೇಟೆ ಸೇರಿದಂತೆ ಇತರರು ಉಪಸ್ಥಿತರಿದ್ದರು.