ಸಾರಾಂಶ
ಮಂಗಳೂರು: ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳಿಗೆ ಸಂಬಂಧಿಸಿದಂತೆ ತ್ವರಿತವಾಗಿ ಪರಿಹಾರ ಮಂಜೂರು ಮಾಡಬೇಕೆಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸೂಚಿಸಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ಮತ್ತು ಅಲೆಮಾರಿ ಅಭಿವೃದ್ಧಿ ನಿಗಮದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ದೌರ್ಜನ್ಯ ತಡೆ ಕಾಯ್ದೆಯಡಿ ಜಿಲ್ಲೆಯಲ್ಲಿ ದಾಖಲಾದ ಎಲ್ಲ ಪ್ರಕರಣಗಳಿಗೆ ಪರಿಹಾರ ಧನ ಮಂಜೂರು ಮಾಡಲಾಗಿದೆ. ನ್ಯಾಯಾಲಯದ ಮುಂದೆ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ಅಭಿಯೋಜನೆಗೊಳಿಸಿ, ತಪ್ಪಿತಸ್ಥರಿಗೆ ನ್ಯಾಯಾಲಯದಲ್ಲಿ ಶಿಕ್ಷೆ ವಿಧಿಸುವ ಅವಶ್ಯಕತೆ ಇರುವ ಎಲ್ಲ ಕಾನೂನಾತ್ಮಕ ಕ್ರಮಗಳನ್ನು ಜರುಗಿಸಲು ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.42 ದೌರ್ಜನ್ಯ ಪ್ರಕರಣಗಳು: 2025ರ ಜನವರಿ 1ರಿಂದ ಸೆ.15ರವರೆಗೆ ಜಿಲ್ಲೆಯಲ್ಲಿ 42 ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, ಇದುವರೆಗೆ 34.10 ಲಕ್ಷ ರು. ಪರಿಹಾರ ನೀಡಲಾಗಿದೆ. 22 ಪ್ರಕರಣಗಳಲ್ಲಿ ಚಾರ್ಜ್‍ಶೀಟ್ ಸಲ್ಲಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಹೇಮಲತಾ ತಿಳಿಸಿದರು.ಅಲೆಮಾರಿ ಸಮುದಾಯದ ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಬೇಕು. ಸಾಲ ಸೌಲಭ್ಯ ಯೋಜನೆಗಳನ್ನು ಆದ್ಯತೆಯಲ್ಲಿ ಮಂಜೂರು ಮಾಡಬೇಕು ಎಂದು ಸೂಚಿಸಿದ ಜಿಲ್ಲಾಧಿಕಾರಿ, ಎಲ್ಲ ಇಲಾಖೆಗಳು ಎಸ್‍ಸಿಪಿ ಹಾಗೂ ಟಿಎಸ್‍ಪಿ ಕಾರ್ಯಕ್ರಮಗಳನ್ನು ನಿಗದಿತ ಕಾಲಮಿತಿಯಲ್ಲಿ ಅನುಷ್ಠಾನಗೊಳಿಸಬೇಕು. ಇದರ ವಿಳಂಬವನ್ನು ಒಪ್ಪಲಾಗದು. ಫಲಾನುಭವಿ ಆಧಾರಿತ ಯೋಜನೆಗಳ ಪ್ರಯೋಜನವನ್ನು ಅರ್ಹರಿಗೆ ತಲುಪಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು ಎಂದು ನಿರ್ದೇಶನ ನೀಡಿದರು.
ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ್ ಕಾರ್ಬಾರಿ, ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕೆ., ಉಪ ಪೊಲೀಸ್ ಆಯುಕ್ತ ಮಿಥುನ್, ಮಂಗಳೂರು ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ ಮತ್ತಿತರರು ಇದ್ದರು.