ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಮುಂದಾಗಬೇಕು: ಡಿಸಿ ಮೀನಾ ನಾಗರಾಜ್‌ ಕರೆ

| Published : Dec 23 2023, 01:47 AM IST

ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಮುಂದಾಗಬೇಕು: ಡಿಸಿ ಮೀನಾ ನಾಗರಾಜ್‌ ಕರೆ
Share this Article
  • FB
  • TW
  • Linkdin
  • Email

ಸಾರಾಂಶ

ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಮುಂದಾಗಬೇಕು: ಡಿಸಿ ಮೀನಾ ನಾಗರಾಜ್‌ ಕರೆಜನರು ಇರುವಲ್ಲಿಗೆ ಬಂದು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಉದ್ದೇಶದಿಂದಲೇ ಜನತಾ ದರ್ಶನಜನರು ಅರ್ಜಿ ಸಲ್ಲಿಸುವಾಗ ಕಾನೂನಿನಡಿ ಬಗೆಹರಿಸಲು ಸಾಧ್ಯವೇ ಎಂದು ಅರ್ಥೈಸಿಕೊಂಡು ಅರ್ಜಿ ಸಲ್ಲಿಸಬೇಕು ಫ್ರೂಟ್ಸ್ ತಂತ್ರಾಂಶದಲ್ಲಿ ತಮ್ಮ ಜಮೀನಿನ ಮಾಹಿತಿ ನೋಂದಾಯಿಸದ ರೈತರು ಕೂಡಲೇ ನೋಂದಾಯಿಸಿ

- ಚಿಕ್ಕಮಗಳೂರು ತಾಲೂಕಿನ ಅಂಬಳೆ ಗ್ರಾಮದಲ್ಲಿ ನಡೆದ ಜನತಾದರ್ಶನ,

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಸಾರ್ವಜನಿಕರು ಜನತಾದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಿ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.

ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತದಿಂದ ಅಂಬಳೆಯ ಬೀರಲಿಂಗೇಶ್ವರ ಸಮುದಾಯ ಭವನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಚಿಕ್ಕಮಗಳೂರು ತಾಲೂಕಿನ ಜನತಾದರ್ಶನ ಉದ್ಘಾಟಿಸಿ ಮಾತನಾಡಿದರು.

ಜನರು ಇರುವಲ್ಲಿಗೆ ಬಂದು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಉದ್ದೇಶದಿಂದಲೇ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಜನರು ಸಲ್ಲಿಸಿದ ಅಹವಾಲುಗಳಿಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳ ಮಟ್ಟದಲ್ಲಿ ನಿಯಮಾನುಸಾರ ಬಗೆಹರಿಸುವಂತಹವುಗಳನ್ನು ಸ್ಥಳೀಯವಾಗಿ ಬಗೆಹರಿಸಲಾಗುತ್ತದೆ. ಒಂದೊಮ್ಮೆ ಅವು ಸರ್ಕಾರದ ಮಟ್ಟದಲ್ಲಿ ಬಗೆ ಹರಿಸುವಂತಾದಲ್ಲಿ ಸರ್ಕಾರದ ಗಮನಕ್ಕೆ ತಂದು ಬಗೆಹರಿಸಲು ಪ್ರಯತ್ನಿಸಲಾಗುವುದು. ಜನರು ಅರ್ಜಿ ಸಲ್ಲಿಸುವಾಗ ಕಾನೂನಿನಡಿ ಬಗೆಹರಿಸಲು ಸಾಧ್ಯವೇ ಎಂದು ಅರ್ಥೈಸಿಕೊಂಡು ಅರ್ಜಿ ಸಲ್ಲಿಸಬೇಕು ಎಂದ ಅವರು. ಜಿಲ್ಲಾಡಳಿತದಿಂದ ಸಾರ್ವಜನಿಕರ ಆಶಯಗಳಿಗೆ ತಕ್ಷಣ ಪ್ರತಿಕ್ರಿಯಿಸಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.

ರೈತರು ತಮ್ಮ ಜಮೀನುಗಳ ಮಾಹಿತಿಯನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ಅಳವಡಿಸಿಕೊಳ್ಳುವ ಮೂಲಕ ಬರ ಹಾಗೂ ವಿಮಾ ಪರಿಹಾರಗಳಂತಹ ಸೌಲಭ್ಯ ಪಡೆಯಬೇಕು. ಸರ್ಕಾರದ ಪರಿಹಾರದ ಮೊತ್ತವನ್ನು ರೈತರಿಗೆ ನೇರವಾಗಿ ಖಾತೆಗೆ ಜಮೆ ಮಾಡಲು ಫ್ರೂಟ್ಸ್ ತಂತ್ರಾಂಶ ಬಳಸಲಾಗುತ್ತಿದೆ. ಫ್ರೂಟ್ಸ್ ತಂತ್ರಾಂಶದಲ್ಲಿ ತಮ್ಮ ಜಮೀನಿನ ಮಾಹಿತಿ ನೋಂದಾಯಿಸದ ರೈತರು ಕೂಡಲೇ ನೋಂದಾಯಿಸುವಂತೆ ತಿಳಿಸಿದರು.

ಅಂಬಳೆ ಕೈಗಾರಿಕಾ ಪ್ರದೇಶದ ಕಲುಷಿತ ನೀರನ್ನು ಕೆರೆಗೆ ಬಿಡಲಾಗುತ್ತಿದ್ದು, ಇದರಿಂದ ದನಕರುಗಳ ಕುಡಿಯುವ ನೀರಿಗೆ ಸಮಸ್ಯೆಯಾಗಿದೆ ಎಂದು ಜಿಲ್ಲಾಧಿಕಾರಿಗೆ ಗ್ರಾಮಸ್ಥರು ಅಹವಾಲು ಸಲ್ಲಿಸಿದರು. ಕಲುಷಿತ ನೀರು ಕುಡಿದು ಎರಡು ಹಸು ಗಳು ಮೃತ ಪಟ್ಟಿವೆ ಎಂದು ತಮ್ಮ ಅಳಲು ತೋಡಿಕೊಂಡರು. ಇದಕ್ಕೆ ಸ್ಪಂಧಿಸಿದ ಜಿಲ್ಲಾಧಿಕಾರಿ ಕೈಗಾರಿಕೆಗಳ ತ್ಯಾಜ್ಯ ಮತ್ತು ಕಲುಷಿತ ನೀರನ್ನು ಕೆರೆಗೆ ಬಿಡದಂತೆ ಇಲಾಖಾ ಅಧಿಕಾರಿಗಳು ಕೈಗಾರಿಕೆಗಳ ಮಾಲೀಕರಿಗೆ ನಿರ್ದೇಶನ ನೀಡ ಬೇಕೆಂದು ಸೂಚಿಸಿದ ಅವರು, ಗೌಡನಹಳ್ಳಿ ಗ್ರಾಮಸ್ಥರು ಹಕ್ಕು ಪತ್ರ ವಿತರಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಿದರು.

ಸಭೆಯಲ್ಲಿ ಅಂಬಳೆ ಗ್ರಾಪಂ ಅಧ್ಯಕ್ಷ ಪುಟ್ಟೇಗೌಡ, ಚಿಕ್ಕಮಗಳೂರು ಉಪ ವಿಭಾಗದ ಉಪ ವಿಭಾಗಾಧಿಕಾರಿ ರಾಜೇಶ್, ಚಿಕ್ಕಮಗಳೂರು ತಹಸೀಲ್ದಾರ್ ಡಾ. ಸುಮಂತ್, ಚಿಕ್ಕಮಗಳೂರು ತಾಲೂಕು ಪಂಚಾಯಿತಿ ಕಾರ್ಯನಿರ್ವಹಕ ಅಧಿಕಾರಿ ತಾರಾನಾಥ್ ಹಾಗೂ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. 22 ಕೆಸಿಕೆಎಂ 1

ಚಿಕ್ಕಮಗಳೂರು ತಾಲೂಕಿನ ಅಂಬಳೆ ಗ್ರಾಮದಲ್ಲಿ ಶುಕ್ರವಾರ ನಡೆದ ಜನತಾದರ್ಶನ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಉದ್ಘಾಟಿಸಿದರು.