ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಕಾರ್ಯಕ್ರಮಗಳ ಸಭೆ

ಮಡಿಕೇರಿ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಕಾರ್ಯಕ್ರಮಗಳನ್ನು ಫೆಬ್ರವರಿ ಅಂತ್ಯದೊಳಗೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಕಾರ್ಯಕ್ರಮಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಕಾರ್ಯಕ್ರಮ ಗಂಭೀರವಾಗಿ ಪರಿಗಣಿಸಬೇಕು. ಕಾರ್ಯಕ್ರಮ ಅನುಷ್ಠಾನದಲ್ಲಿ ವಿಳಂಬ ಮಾಡಿದ್ದಲ್ಲಿ ಗಂಭೀರವಾಗಿ ಪರಿಗಣಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಎಚ್ಚರಿಸಿದರು. ವಿವಿಧ ಇಲಾಖೆಗಳ ಕಾಮಗಾರಿ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಸೋಮಶೇಖರ್ ಹೇಳಿದರು.

ಪೌರಕಾರ್ಮಿಕರಿಗೆ ಖಾಸಗಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಸಂಬಂಧಿಸಿದಂತೆ ಮಾಹಿತಿ ಪಡೆದ ಜಿಲ್ಲಾಧಿಕಾರಿ ಅವರು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಜೊತೆಗೆ ಖಾಸಗಿ ಆಸ್ಪತ್ರೆಗೆ ಮನವಿ ಮಾಡಿದ್ದಲ್ಲಿ ಉಚಿತವಾಗಿ ಆರೋಗ್ಯ ತಪಾಸಣೆ ನಡೆಸಲಿದ್ದಾರೆ. ಆ ನಿಟ್ಟಿನಲ್ಲಿ ಮನವಿ ಮಾಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ಸಲಹೆ ಮಾಡಿದರು. ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ ಅವರು ಪೌರಕಾರ್ಮಿಕರಿಗೆ ಉಪಾಹಾರ ಯೋಜನೆ, ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆ ಮತ್ತಿತರ ಬಗ್ಗೆ ಮಾಹಿತಿ ನೀಡಿದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್, ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ, ಪೌರಾಯುಕ್ತರಾದ ಎಚ್.ಆರ್.ರಮೇಶ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಚಂದ್ರಶೇಖರ್, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.