ಮಂಗಳೂರು: ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಪ್ರಧಾನಮಂತ್ರಿಯವರ ಹೊಸ 15 ಅಂಶಗಳ ಕಾರ್ಯಕ್ರಮದಡಿ ಕಲ್ಯಾಣ ಯೋಜನೆಗಳು, ಶಿಕ್ಷಣ, ವಸತಿ, ಮತ್ತು ಉದ್ಯೋಗವಕಾಶ ಹಾಗೂ ವಿವಿಧ ಸೌಲಭ್ಯಗಳು ಅರ್ಹ ಅಲ್ಪಸಂಖ್ಯಾತ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ಮಾಡಲು ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಕೆ. ಸೂಚಿಸಿದರು. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಪ್ರಧಾನ ಮಂತ್ರಿಯವರ ಹೊಸ 15 ಅಂಶ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಮಾಡಲು ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಶಾಲಾ ಶಿಕ್ಷಣದಿಂದ ಯಾವುದೇ ಅರ್ಹ ಮಗು ವಂಚಿತವಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಮರಳಿ ಶಿಕ್ಷಣದ ಮುಖ್ಯವಾಹಿನಿಗೆ ತರಲು ಕ್ರಮವಹಿಸಬೇಕು ಎಂದು ಅವರು ನಿರ್ದೇಶನ ನೀಡಿದರು.ಕಾರ್ಯಕ್ರಮದಡಿ ಜಾರಿಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳ ಕುರಿತು ಗ್ರಾಮೀಣ ಪ್ರದೇಶದ ಜನರಿಗೆ ಸಮರ್ಪಕ ಮಾಹಿತಿ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಯಿತು.ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಸೌಲಭ್ಯ ತಲುಪಿಸುವಲ್ಲಿ ಯಾವುದೇ ಲೋಪವಾಗದಂತೆ ಕ್ರಮವಹಿಸಬೇಕು. ಮದರಸಾ ಶಿಕ್ಷಣದ ಆಧುನೀಕರಣಕ್ಕೆ ಸಂಬಂಧಿಸಿದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು.
ಉದ್ಯೋಗಾವಕಾಶ ಕಲ್ಪಿಸುವುದು, ವಸತಿ ಯೋಜನೆಗಳಲ್ಲಿ ಅರ್ಹರಿಗೆ ಸಮಾನ ಅವಕಾಶ ಒದಗಿಸುವುದು, ಅಲ್ಪಸಂಖ್ಯಾತರ ನಿರ್ದೇಶನಾಲಯದ ವಿವಿಧ ಯೋಜನೆಗಳು ಹಾಗೂ ವಿದ್ಯಾಸಿರಿ ಯೋಜನೆಗಳನ್ನು ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಪಶುಪಾಲನೆ ಮತ್ತು ತೋಟಗಾರಿಕೆ ಇಲಾಖೆಗಳ ಮೂಲಕ ಲಭ್ಯವಿರುವ ಯೋಜನೆಗಳ ಮಾಹಿತಿಯನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಾರ್ವಜನಿಕರಿಗೆ ತಲುಪಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ, ಸಾರ್ವಜನಿಕರಿಗೆ ಮಾಹಿತಿ ತಲುಪಿಸುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಅವರು ಸೂಚಿಸಿದರು.ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ ಜಿನೇಂದ್ರ, ವಿಸ್ತರಣಾಧಿಕಾರಿ ಮುಹಮ್ಮದ್ ಫಾರೂಕ್, ಸಮಿತಿ ಸದಸ್ಯರು, ವಿವಿಧ ಇಲಾಖಾಧಿಕಾರಿಗಳು ಇದ್ದರು.