ಸಾರಾಂಶ
ಸಾರ್ವಜನಿಕ ಸ್ಥಳಗಳಲ್ಲಿ ಪ್ಲೆಕ್ಸ್, ಬ್ಯಾನರ್ ಅಳವಡಿಸುವ, ಪ್ಲೆಕ್ಸ್ ಬ್ಯಾನರ್ ಮುದ್ರಣ ಮಾಡುವ ವೇಳೆ ಕಡ್ಡಾಯವಾಗಿ ಅನುಮತಿ ಪಡೆಯಬೇಕು; ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಕಾರವಾರ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳ ಖರ್ಚು-ವೆಚ್ಚಗಳ ದರಪಟ್ಟಿಯ ಬಗ್ಗೆ ಯಾವುದೇ ಆಕ್ಷೇಪಣೆಗಳಿದ್ದರೆ ಲಿಖಿತವಾಗಿ ಸಲ್ಲಿಸಿ ಎಂದು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದರು.ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಚುನಾವಣಾ ದರಪಟ್ಟಿ ಸಂಬಂಧ ಹಮ್ಮಿಕೊಂಡಿದ್ದ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಚುನಾವಣಾ ಆಯೋಗದ ನಿರ್ದೇಶನದಂತೆ ಚುನಾವಣೆಯಲ್ಲಿ ವಿವಿಧ ರಾಜಕೀಯ ಪಕ್ಷಗಳು ಹಾಗೂ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಮಾಡಬೇಕಾದ ಖರ್ಚು ವೆಚ್ಚಗಳ ಕುರಿತ ದರಪಟ್ಟಿಯನ್ನು ರಾಜಕೀಯ ಪಕ್ಷಗಳಿಗೆ ನೀಡಲಾಗಿದ್ದು, ಅವುಗಳಲ್ಲಿ ಯಾವುದೇ ಸಾಮಗ್ರಿಗಳ ದರ ವ್ಯತ್ಯಾಸ ಕಂಡುಬಂದರೆ ತಿಳಿಸಬಹುದಾಗಿದೆ ಎಂದರು.ಸಾರ್ವಜನಿಕ ಸ್ಥಳಗಳಲ್ಲಿ ಪ್ಲೆಕ್ಸ್, ಬ್ಯಾನರ್ ಅಳವಡಿಸುವ, ಪ್ಲೆಕ್ಸ್ ಬ್ಯಾನರ್ ಮುದ್ರಣ ಮಾಡುವ ವೇಳೆ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ನಿಯಮ ಉಲ್ಲಂಘನೆ ಮಾಡಿದರೆ ಕಾನೂನು ಪ್ರಕಾರ ಪ್ರಕರಣ ದಾಖಲಿಸಿ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ, ಅಧಿಕಾರಿಗಳು, ವಿವಿಧ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.