ಸಾರಾಂಶ
ಕನ್ನಡಪ್ರಭ ವಾರ್ತೆ ಚಾಮರಾಜನಗರ
ಜಿಲ್ಲಾಡಳಿತದ ವತಿಯಿಂದ 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಹಾಗೂ ಹರ್ ಘರ್ ತಿರಂಗ ಅಭಿಯಾನವನ್ನು ಅರ್ಥಪೂರ್ಣ ಹಾಗೂ ಯಶಸ್ವಿಯಾಗಿ ಕೈಗೊಳ್ಳಲು ಎಲ್ಲಾ ಸಿದ್ಧತೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂಬಂಧ ಕೈಗೊಳ್ಳಲಾಗಿರುವ ಸಿದ್ಧತಾ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲಾ ಮಟ್ಟದಲ್ಲಿ ಆ.15ರ ಸ್ವಾತಂತ್ರ್ಯ ದಿನಾಚರಣೆಯಂದು ಪಥಸಂಚಲನ, ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಸ್ವಾತಂತ್ರ್ಯದ ಹೋರಾಟದ ಮಹತ್ವ, ದೇಶಭಕ್ತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ಉತ್ತಮವಾಗಿ ಮೂಡಿ ಬರಬೇಕಿದೆ. ಈ ನಿಟ್ಟಿನಲ್ಲಿ ಅಂತಿಮ ತಾಲೀಮನ್ನು ನಡೆಸಲು ಮಾರ್ಗದರ್ಶನ ಮಾಡಿ ಸಿದ್ಧಗೊಳಿಸಬೇಕು ಎಂದು ತಿಳಿಸಿದರು.ಹರ್ ಘರ್ ತಿರಂಗ ಅಭಿಯಾನವನ್ನು ವ್ಯಾಪಕವಾಗಿ ಜಿಲ್ಲಾದ್ಯಂತ ಹಮ್ಮಿಕೊಳ್ಳಲಾಗಿದೆ. ಪ್ರತಿ ಮನೆ ಮನೆಗಳಲ್ಲೂ, ಕಚೇರಿ ಸೇರಿದಂತೆ ವಿವಿಧೆಡೆ ಆ.15ರವರೆಗೂ ರಾಷ್ಟ್ರಧ್ವಜಾರೋಹಣ ಮಾಡಬೇಕು. ಪ್ರತಿ ಮನೆ ಮನೆಗಳಲ್ಲೂ ರಾಷ್ಟ್ರಧ್ವಜ ಹಾರಿಸಲು ವ್ಯಾಪಕವಾಗಿ ಜಾಗೃತಿ ಮೂಡಿಸಬೇಕು. ಹರ್ ಘರ್ ತಿರಂಗ ಆಶಯದ ಬಗ್ಗೆ ಹೆಚ್ಚು ಕಾರ್ಯಕ್ರಮಗಳನ್ನು ಆಯೋಜನೆ ಮಾಡಬೇಕು ಎಂದರು.
ಹರ್ ಘರ್ ತಿರಂಗ ಅಭಿಯಾನದ ಅಂಗವಾಗಿ ಸೈಕಲ್, ಬೈಕ್ ರ‍್ಯಾಲಿ, ಜಾಥಾದಂತಹ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಸಾರ್ವಜನಿಕ ಕ್ಷೇತ್ರದ ಉದ್ದಿಮೆಗಳು, ಸಂಸ್ಥೆಗಳು, ಸ್ವ ಸಹಾಯ ಸಂಘಗಳ ನೆರವಿನೊಂದಿಗೆ ಕಾರ್ಯಕ್ರಮಗಳನ್ನು ಏರ್ಪಾಡು ಮಾಡಬೇಕು. ಇದರ ದಾಖಲೀಕರಣವು ಆಗಬೇಕು ಎಂದು ತಿಳಿಸಿದರು.ಎಲ್ಲ ಶಾಲಾ ಕಾಲೇಜು, ಕಚೇರಿ, ಬ್ಯಾಂಕು, ಅಂಚೆ ಕಚೇರಿ, ಗ್ರಾಪಂ ಸೇರಿದಂತೆ ಎಲ್ಲೆಡೆ ಸ್ವಾತಂತ್ರೋತ್ಸವ ದಿನ ಆಚರಣೆ ಮಾಡಬೇಕು. ಮಹಾತ್ಮ ಗಾಂಧೀಜಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಗಳನ್ನು ಇಡಬೇಕು. ಯಾವುದೇ ಲೋಪಗಳಿಗೆ ಅವಕಾಶವಾಗದಂತೆ ಧ್ವಜಾರೋಹಣ ನೆರವೇರಿಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಲಕ್ಷ್ಮೀ, ಡಿವೈಎಸ್‌ಪಿ ಲಕ್ಷ್ಮಯ್ಯ, ಅಬಕಾರಿ ಉಪ ಆಯುಕ್ತರಾದ ನಾಗಶಯನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಿದಂಬರ, ತಹಸೀಲ್ದಾರ್ ಗಿರಿಜಾ, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ಸುಧಾ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಚಂದ್ರರಾಜೇ ಅರಸ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಂಜುನಾಥ ಪ್ರಸನ್ನ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಜು, ನಗರಸಭೆ ಆಯುಕ್ತ ಎಸ್.ವಿ.ರಾಮದಾಸ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.