ಜನ-ಜಾನುವಾರು ಹಾನಿ ತಪ್ಪಿಸಲು ಡೀಸಿ ಸೂಚನೆ

| Published : May 24 2024, 12:47 AM IST

ಸಾರಾಂಶ

ಜಿಲ್ಲೆಯಾದ್ಯಂತ ಪೂರ್ವ ಮುಂಗಾರು ಮಳೆ ಆರಂಭಗೊಂಡಿದ್ದು, ಜಿಲ್ಲೆಯಲ್ಲಿ ಮಳೆಯಿಂದ ಸಂಭವಿಸಬಹುದಾದ ಯಾವುದೇ ಜನ-ಜಾನುವಾರು ಹಾನಿಯನ್ನು ತಪ್ಪಿಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಜಿಲ್ಲೆಯಾದ್ಯಂತ ಪೂರ್ವ ಮುಂಗಾರು ಮಳೆ ಆರಂಭಗೊಂಡಿದ್ದು, ಜಿಲ್ಲೆಯಲ್ಲಿ ಮಳೆಯಿಂದ ಸಂಭವಿಸಬಹುದಾದ ಯಾವುದೇ ಜನ-ಜಾನುವಾರು ಹಾನಿಯನ್ನು ತಪ್ಪಿಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಜಿಲ್ಲೆಯ ಬರ ಪರಿಸ್ಥಿತಿ ಮತ್ತು ಮಾನ್ಸೂನ್ ನಿರ್ವಹಣೆ ಸಂಬಂಧ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸತತವಾಗಿ ಮಳೆಯಾಗುತ್ತಿದ್ದು, ಈ ಬಾರಿ ವಾಡಿಕೆಗಿಂತ ಅಧಿಕ ಮಳೆಯಾಗಿದೆ. ತೀವ್ರ ಮಳೆಯಿಂದ ಆಗಬಹುದಾದ ಅನಾಹುತಗಳನ್ನು ತಡೆಗಟ್ಟಲು ಜಿಲ್ಲಾಮಟ್ಟದ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು. ಜಿಲ್ಲೆಯ ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳು ಈ ನಿಟ್ಟಿನಲ್ಲಿ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮಳೆಯಿಂದ ಉಂಟಾಗುವ ಜೀವಹಾನಿ ತಡೆಯಲು ಯಾವುದೇ ಕ್ಷಣದಲ್ಲಿ ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಎಲ್ಲಾ ಅಧಿಕಾರಿಗಳು ಕ್ಷೇತ್ರಪ್ರವಾಸ ಮಾಡಬೇಕು. ಜಿಲ್ಲೆಯ ಯಾವುದೇ ಭಾಗದಲ್ಲಿ ಪ್ರಕೃತಿ ವಿಕೋಪ ಉಂಟಾದರೂ ಅದನ್ನು ತ್ವರಿತವಾಗಿ ನಿಭಾಯಿಸಲು ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಪ್ರಾಣಹಾನಿ ಸಂಭವಿಸಿದರೆ ಪರಿಹಾರ ವಿತರಣೆಯಲ್ಲಿ ವಿಳಂಬವಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು. ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಸಮರ್ಪಕವಾಗಿ ಸರಬರಾಜು ಮಾಡಬೇಕು. ಈ ಬಾರಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇದೆ. ಮಳೆನೀರು ಕಲುಷಿತಗೊಳ್ಳದಂತೆ ಗಮನ ಹರಿಸಬೇಕು. ಕುಡಿಯುವ ನೀರಿನ ಪೈಪ್‌ಲೈನ್‌ಗೆ ಮಣ್ಣು ಹಾಗೂ ಯುಜಿಡಿ ನೀರು ಸೇರಿ ಆರೋಗ್ಯ ಸಮಸ್ಯೆಗಳಾಗದಂತೆ ಎಚ್ಚರ ವಹಿಸಬೇಕು. ಕುಡಿಯುವ ನೀರು ಪರಿಶುದ್ಧವಾಗಿಬೇಕು. ಈ ಸಂಬಂಧ ಎಲ್ಲಾ ತಾಲೂಕುಗಳ ತಹಶೀಲ್ದಾರರು, ತಾಪಂ ಇಒ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ತಪ್ಪಿದ್ದಲ್ಲಿ ಗಂಭೀರವಾಗಿ ಪರಿಗಣಿಸಲಾಗುವುದು ಎಂದರು. ತೀವ್ರಗೊಂಡಿರುವ ಮಳೆ-ಗಾಳಿಯಿಂದ ಸಾಕಷ್ಟು ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಅದರಲ್ಲೂ 980 ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಬಾಳೆ ಬೆಳೆಹಾನಿ ಕಂಡುಬಂದಿದ್ದು, ಅಧಿಕಾರಿಗಳು ತಕ್ಷಣವೇ ಕ್ಷೇತ್ರಪ್ರವಾಸ ಕೈಗೊಂಡು ಸ್ಥಳ ಮಹಜರು ಮಾಡಿ ರೈತರಿಗೆ ಪರಿಹಾರ ವಿತರಣೆ ಮಾಡಬೇಕು. ರೈತರಿಂದ ಯಾವುದೇ ದೂರುಗಳು ಬರದಂತೆ ಅಧಿಕಾರಿಗಳು ಕ್ರೀಯಾಶೀಲರಾಗಬೇಕು. ಜನರ ನಂಬಿಕೆ, ವಿಶ್ವಾಸ ಗಳಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲೆಯ ವಿವಿಧ ಭಾಗಗಳಲ್ಲಿ ಅತಿಹೆಚ್ಚು ಮಳೆಯಾಗುತ್ತಿರುವುದು ವರದಿಯಾಗುತ್ತಿದ್ದು, ವಿದ್ಯುತ್ ಅವಘಡ ಉಂಟಾಗದಂತೆ ನಿಗಾವಹಿಸಬೇಕು. ಸಾರ್ವಜನಿಕರು ವಿದ್ಯುತ್‌ಗೆ ಸಂಬಂಧಿಸಿದಂತೆ ದೂರುಗಳಿಗೆ ಕರೆ ಮಾಡಿದಲ್ಲಿ ತಕ್ಷಣವೇ ಸ್ಪಂದಿಸಬೇಕು. ಅಧಿಕ ಮಳೆಗಾಳಿಯಿಂದ ರಸ್ತೆಗಳಲ್ಲಿ ವಿದ್ಯುತ್ ತಂತಿ ಬಿದ್ದ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆಗಳಾಗದಂತೆ ಅಧಿಕಾರಿಗಳು ಸ್ಥಳದಲ್ಲಿದ್ದು, ಸಮಸ್ಯೆ ಬಗೆಹರಿಸಬೇಕು ಎಂದು ಜಿಲ್ಲಾಧಿಕಾರಿಯವರು ಚೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು. ಹೆಚ್ಚಿನ ಮಳೆಯಿಂದ ರಸ್ತೆಯಲ್ಲಿ ಉಂಟಾಗುವ ಗುಂಡಿಗಳನ್ನು ಶೀಘ್ರವಾಗಿ ಮುಚ್ಚುವ ಕೆಲಸ ಆಗಬೇಕು. ಇದರಿಂದ ಅಪಘಾತಗಳು ಕಡಿಮೆಯಾಗಿ ವಾಹನ ಸವಾರರಿಗೆ ಅನುಕೂಲವಾಗವಾಲಿದೆ. ನಗರದಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲು ರಾಜಕಾಲುವೆ ಹಾಗೂ ಇತರೆ ಚರಂಡಿ ಮಾರ್ಗಗಳನ್ನು ಸ್ವಚ್ಛಗೊಳಿಸಲು ಕೂಡಲೆ ಕ್ರಮವಹಿಸಬೇಕು. ಕಟ್ಟಿಕೊಂಡಿರುವ ಚರಂಡಿಗಳಲ್ಲಿ ಹೂಳೆತ್ತಿಸಿ ಸ್ವಚ್ಚಗೊಳಿಸಬೇಕು. ಮಳೆ ವೇಳೆ ಕೆರೆಗಳಲ್ಲಿನ ನೀರು ರಸ್ತೆಗೆ ಬರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕೆರೆಗಳಲ್ಲಿ ಹೂಳೆತ್ತುವ ಕಾರ್ಯ ಶೀಘ್ರವಾಗಿ ಆಗಬೇಕು ಎಂದರು.

ಅಧಿಕ ಮಳೆಯಿಂದ ಜಿಲ್ಲೆಯಲ್ಲಿರುವ ಕ್ವಾರಿಗಳಲ್ಲಿ ನೀರು ನಿಲ್ಲುವುದರಿಂದ ಯಾವುದೇ ಅವಘಡಗಳು ಜರುಗದಂತೆ ನೋಡಿಕೊಳ್ಳಬೇಕು. ಈ ವೇಳೆ ಜನರು ಕ್ವಾರಿಯ ಸುತ್ತ ಒಡಾಡದಂತೆ ಫೆನ್ಸಿಂಗ್ ಮಾಡುವ ಕಾರ್ಯ ತ್ವರಿತಗತಿಯಲ್ಲಿ ಆಗಬೇಕು. ಈ ಸಂಬಂಧ ಸಂಬಂಧಪಟ್ಟ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಕ್ವಾರಿಗಳ ಉಸ್ತುವಾರಿಗೆ ತಾಲೂಕು ಮಟ್ಟದ ನೋಡಲ್ ಅಧಿಕಾರಿಗಳನ್ನು ನೇಮಿಸಬೇಕು ಎಂದು ತಿಳಿಸಿದರು.

ಮಳೆಯಿಂದ ಉಂಟಾಗುವ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ಮುತುವರ್ಜಿ ವಹಿಬೇಕು. ಪ್ರವಾಹ ಉಂಟಾದರೆ ಕಾಳಜಿ ಕೇಂದ್ರಗಳನ್ನು ತೆರೆದು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ ಜಿಲ್ಲೆಯಲ್ಲಿರುವ ಎಲ್ಲಾ ಕೆರೆಗಳ ಹೂಳು ತೆಗೆಸಲು ಸಂಬಂಧಪಟ್ಟ ಅಧಿಕಾರಿಗಳು ಮುಂದಾಗಬೇಕು ಎಂದು ಡಿಸಿ ಶಿಲ್ಪಾನಾಗ್ ಸಭೆಯಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಹಲವು ಸಮನ್ವಯ ವಿಷಯಗಳ ಕುರಿತು ಚರ್ಚೆ ನಡೆಸಿದರು. ಜಿಲ್ಲಾ ಸಿಇಒ ಆನಂದ್ ಪ್ರಕಾಶ್ ಮೀನಾ, ಎಡಿಸಿ ಗೀತಾ ಹುಡೇದ, ಎಲ್ಲಾ ತಾಲೂಕು ತಹಸೀಲ್ದಾರರು, ತಾಪಂ ಇಒಗಳು, ಜಿಲ್ಲಾಮಟ್ಟದ ಅಧಿಕಾರಿಗಳು, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.