ಸಾರಾಂಶ
ಬಳ್ಳಾರಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಜಿಲ್ಲಾದ್ಯಂತ ಆಚರಿಸಲಾಯಿತು.
ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಾಂಕೇತಿಕವಾಗಿ ಜಯಂತಿ ಆಚರಣೆ ನಡೆಸಿದರೆ, ವಿವಿಧ ರಾಜಕೀಯ ಪಕ್ಷಗಳು, ವಿವಿಧ ಸಂಘಟನೆಗಳು ಜಯಂತಿ ಆಚರಣೆಯಲ್ಲಿ ಪಾಲ್ಗೊಂಡಿದ್ದವು.ಜಿಲ್ಲಾಡಳಿತ, ಜಿಪಂ, ಸಮಾಜ ಕಲ್ಯಾಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಗರದ ಮೊದಲನೇ ಗೇಟ್ ಬಳಿಯ ಡಾ.ಅಂಬೇಡ್ಕರ್ ಭವನದಲ್ಲಿ ಅಂಬೇಡ್ಕರ್ ಜಯಂತಿ ಜರುಗಿತು.
ಅಂಬೇಡ್ಕರ್ ಪುತ್ಥಳಿಗೆ ಜಿಲ್ಲಾಧಿಕಾರಿ ಪ್ರಶಾಂತಕುಮಾರ್ ಮಿಶ್ರಾ ಮಾಲಾರ್ಪಣೆ ಮಾಡುವುದರ ಮೂಲಕ ಸಂವಿಧಾನ ಶಿಲ್ಪಿಯ ಸಾಧನೆ, ಸೇವೆ ಸ್ಮರಿಸಿದರು.ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ, ಎಸ್ಪಿ ರಂಜಿತಕುಮಾರ್ ಬಂಡಾರು, ಸಹಾಯಕ ಆಯುಕ್ತ ಹೇಮಂತಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಖಲೀಲಸಾಬ್, ಎಎಸ್ಪಿ ರವಿಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸತೀಶ್, ಆಹಾರ ಇಲಾಖೆಯ ಜಂಟಿ ನಿರ್ದೇಶಕರಾದ ಸಕೀನಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ ಸೇರಿದಂತೆ ಸಮಾಜದ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.
ಬಳ್ಳಾರಿ ವಿವಿಯಲ್ಲಿ ಆಚರಣೆ:ನಗರದ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಅಂಬೇಡ್ಕರ್ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿಶೇಷ ಘಟಕ ಇವರ ಆಶ್ರಯದಲ್ಲಿ ಸಂವಿಧಾನದ ಹರಿಕಾರ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಜನ್ಮ ದಿನಾಚರಣೆ ಭಾನುವಾರ ಆಚರಿಸಲಾಯಿತು.
ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ.ವಿಜಯಕುಮಾರ್ ಮಲಶೆಟ್ಟಿ, ಕುಲಸಚಿವ ಎಸ್.ಎನ್. ರುದ್ರೇಶ್, ಕುಲಸಚಿವ (ಮೌಲ್ಯಮಾಪನ) ಪ್ರೊ.ರಮೇಶ್ ಓಲೇಕಾರ ಡಾ.ಬಾಬಾಸಾಹೇಬ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.ಅಂಬೇಡ್ಕರ್ ಅವರ ತತ್ವ, ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಜೀವನ ನಡೆಸಬೇಕು ಎಂದು ಪ್ರಭಾರ ಕುಲಪತಿ ಪ್ರೊ.ವಿಜಯಕುಮಾರ್ ಮಲಶೆಟ್ಟಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಸಂವಿಧಾನದ ಆಶಯದಂತೆ ಎಲ್ಲರೂ ತಮ್ಮ ಹಕ್ಕುಗಳನ್ನು ಅರಿತುಕೊಳ್ಳಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮಾಡಲು ಅವಕಾಶ ಕಲ್ಪಿಸಿದ್ದ ಕೀರ್ತಿ ಬಾಬಾಸಾಹೇಬರಿಗೆ ಸಲ್ಲುತ್ತದೆ ಎಂದು ಕುಲಸಚಿವ ಎಸ್.ಎನ್. ರುದ್ರೇಶ್ ಹೇಳಿದರು.ಕಾರ್ಯಕ್ರಮದಲ್ಲಿ ವಿಭಾಗದ ಮುಖ್ಯಸ್ಥರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಇದ್ದರು.
ಕಾಂಗ್ರೆಸ್ ಕಚೇರಿಯಲ್ಲಿ ಜಯಂತಿ:ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಡಾ.ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ನಗರದ ಅಂಬೇಡ್ಕರ್ ಅವರ ಪುತ್ಥಳಿಗೆ ಪಕ್ಷದ ಮುಖಂಡರು ಪುಷ್ಪಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಪಕ್ಷದ ಜಿಲ್ಲಾಧ್ಯಕ್ಷ ಅಲ್ಲಂಪ್ರಶಾಂತ್, ಲಿಡ್ಕರ್ ಮಂಡಳಿ ಅಧ್ಯಕ್ಷ ಮುಂಡ್ರಗಿ ನಾಗರಾಜ್, ಜಿಪಂ ಮಾಜಿ ಸದಸ್ಯ ಎ.ಮಾನಯ್ಯ, ಕೆಪಿಸಿಸಿ ಸದಸ್ಯ ಎಲ್.ಮಾರೆಣ್ಣ, ಯರಕುಲಸ್ವಾಮಿ, ಗೋವರ್ಧನ, ಗೋನಾಳ್ ನಾಗಭೂಷಣಗೌಡ, ವೀರಸೇನರೆಡ್ಡಿ ಮತ್ತಿತರರು ಭಾಗವಹಿಸಿದ್ದರು.