ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಗಾಗಿ ಜಿಲ್ಲೆಯಾದ್ಯಂತ ಸ್ಥಾಪಿಸಲಾದ ಒಟ್ಟು 54 ಪರೀಕ್ಷಾ ಕೇಂದ್ರಗಳಲ್ಲಿ ಭಾನುವಾರ ಪರೀಕ್ಷೆ ನಡೆಯಿತು. ನಗರದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಸಂಗಪ್ಪ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಗಾಗಿ ಜಿಲ್ಲೆಯಾದ್ಯಂತ ಸ್ಥಾಪಿಸಲಾದ ಒಟ್ಟು 54 ಪರೀಕ್ಷಾ ಕೇಂದ್ರಗಳಲ್ಲಿ ಭಾನುವಾರ ಪರೀಕ್ಷೆ ನಡೆಯಿತು. ನಗರದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಸಂಗಪ್ಪ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಜಿಲ್ಲಾಧಿಕಾರಿಗಳು ವಿದ್ಯಾಗಿರಿಯ ಬಸವೇಶ್ವರ ಸ್ವತಂತ್ರ ಪದವಿ ಪೂರ್ವ ಕಾಲೇಜು ಹಾಗೂ ನವನಗರದ ಕಾಳಿದಾಸ ಕಾಲೇಜು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರೀಕ್ಷಾ ವ್ಯವಸ್ಥೆ ಪರಿಶೀಲಿಸಿದರು. ಪರೀಕ್ಷಾ ಕೊಠಡಿಗಳಲ್ಲಿ ಅಭ್ಯರ್ಥಿಗಳಿಗೆ ಕಲ್ಪಿಸಲಾಗಿರುವ ವ್ಯವಸ್ಥೆ, ಪರೀಕ್ಷಾ ನಿಯಮಗಳ ಪಾಲನೆ ಹಾಗೂ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿಯ ಕಾರ್ಯವೈಖರಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸುವಂತೆ ಹಾಗೂ ಪರೀಕ್ಷಾ ಪ್ರಕ್ರಿಯೆ ನಿಯಮಾನುಸಾರ ನಡೆಯುವಂತೆ ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆಯೂ ಪರಿಶೀಲನೆ ನಡೆಸಿದರು.ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾರ್ಥಿಗಳ ಪ್ರವೇಶ, ಆಸನ ವ್ಯವಸ್ಥೆ ಹಾಗೂ ಪರೀಕ್ಷಾ ನಿಯಮಗಳ ಪಾಲನೆ ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಪರೀಕ್ಷೆಯು ಜಿಲ್ಲಾದ್ಯಂತ ಸುಸೂತ್ರವಾಗಿ ನಡೆಯುವಂತೆ ಜಿಲ್ಲಾಡಳಿತದಿಂದ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು.