ಕೇದಿಗೆಹಳ್ಳಿಯಲ್ಲಿ ಸ್ಥಳೀಯ ನಿವಾಸಿಗಳೊಂದಿಗೆ ಸಂವಾದ ನಡೆಸಿದ ಜಿಲ್ಲಾಧಿಕಾರಿ, ಕುಡಿಯುವ ನೀರಿನ ಸಮಸ್ಯೆ ಹಾಗೂ ಇತರೆ ಮೂಲಭೂತ ಸೌಕರ್ಯಗಳ ಕೊರತೆಯ ಮಾಹಿತಿ ಪಡೆದು ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ಸ್ಥಳೀಯರಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಲು ಅಗತ್ಯ ಕ್ರಮ ಕೈಗೊಂಡು, ಸಮಸ್ಯೆಯನ್ನು ಇಂದೇ ಪರಿಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ, ತುಮಕೂರು

ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಚಿಕ್ಕನಾಯಕನಹಳ್ಳಿ ತಾಲೂಕಿನ ಪುರಸಭೆ ವ್ಯಾಪ್ತಿಯ 6ನೇ ವಾರ್ಡಿನ ಕೇದಿಗೆಹಳ್ಳಿ ಹಾಗೂ ತುರುವೇಕೆರೆ ತಾಲೂಕಿನ ಲೋಕಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಳಪ್ಪನ ಪಾಳ್ಯ ಗ್ರಾಮಗಳಿಗೆ ಭೇಟಿ ನೀಡಿ, ಕುಡಿಯುವ ನೀರಿನ ಸಮಸ್ಯೆಯ ಪರಿಹಾರಕ್ಕೆ ತ್ವರಿತವಾಗಿ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೇದಿಗೆಹಳ್ಳಿಯಲ್ಲಿ ಸ್ಥಳೀಯ ನಿವಾಸಿಗಳೊಂದಿಗೆ ಸಂವಾದ ನಡೆಸಿದ ಜಿಲ್ಲಾಧಿಕಾರಿ, ಕುಡಿಯುವ ನೀರಿನ ಸಮಸ್ಯೆ ಹಾಗೂ ಇತರೆ ಮೂಲಭೂತ ಸೌಕರ್ಯಗಳ ಕೊರತೆಯ ಮಾಹಿತಿ ಪಡೆದು ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ಸ್ಥಳೀಯರಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಲು ಅಗತ್ಯ ಕ್ರಮ ಕೈಗೊಂಡು, ಸಮಸ್ಯೆಯನ್ನು ಇಂದೇ ಪರಿಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಂತರ ತುರುವೇಕೆರೆ ತಾಲೂಕು ಕಾಳಪ್ಪನ ಪಾಳ್ಯ ಗ್ರಾಮಕ್ಕೆ ಭೇಟಿ ನೀಡಿದ ಅವರು, ಕೊಳವೆ ಬಾವಿ ವಿಫಲವಾಗಿರುವ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಶೀಲಿಸಿದರು. ಪಕ್ಕದ ಗ್ರಾಮದಿಂದ ಪೈಪ್‌ಲೈನ್ ಮೂಲಕ ನೀರು ಪೂರೈಸುತ್ತಿರುವ ವ್ಯವಸ್ಥೆಯನ್ನು ವೀಕ್ಷಿಸಿ ಪರ್ಯಾಯ ನೀರು ಸರಬರಾಜಿನ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ವಿದ್ಯುದ್ದೀಕರಣಗೊಳಿಸಲು ಬಾಕಿ ಉಳಿದಿರುವ ಕೊಳವೆ ಬಾವಿಗಳಿಗೆ ವಿದ್ಯುದ್ದೀಕರಣ ಕಾರ್ಯವನ್ನು ಕೂಡಲೇ ಪೂರ್ಣಗೊಳಿಸಿ, ನೀರು ಸರಬರಾಜು ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ಗ್ರಾಮಸ್ಥರೊಂದಿಗೆ ಚರ್ಚಿಸಿದ ಜಿಲ್ಲಾಧಿಕಾರಿಗಳು, ಕುಡಿಯುವ ನೀರಿನ ಲಭ್ಯತೆ ಹಾಗೂ ಇತರೆ ಮೂಲಭೂತ ಸೌಕರ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಆಲಿಸಿದರು. ಸಾರ್ವಜನಿಕರಿಗೆ ನಿರಂತರವಾಗಿ ಕುಡಿಯುವ ನೀರು ಲಭ್ಯವಾಗುವಂತೆ ಪರ್ಯಾಯ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಹಾಗೂ ಜನರ ಸಮಸ್ಯೆಗಳಿಗೆ ಆದ್ಯತೆ ಮೇರೆಗೆ ಸ್ಪಂದಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕುಡಿಯುವ ನೀರಿನ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ಕಲ್ಪಿಸಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ತಿಪಟೂರು ಉಪವಿಭಾಗದ ಉಪವಿಭಾಗಾಧಿಕಾರಿ ಸಪ್ತಶ್ರೀ, ಕಾರ್ಯಪಾಲಕ ಇಂಜಿನಿಯರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ವಾಸುದೇವ್, ಚಿಕ್ಕನಾಯಕನಹಳ್ಳಿ ತಹಸೀಲ್ದಾರ್ ಮಮತ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.