ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಪಟ್ಟಣದ ತಾಲೂಕು ಕಚೇರಿ, ರೈತ ಸಂಪರ್ಕ ಕೇಂದ್ರ, ನೀರು ಶುದ್ಧೀಕರಣ ಘಟಕ ಸೇರಿದಂತೆ ಇತರೆ ಇಲಾಖೆಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ್ ಅವರು ಶನಿವಾರ ದಿಢೀರ್ ಭೇಟಿ ನೀಡಿ, ಇಲಾಖೆಗಳ ಕಾರ್ಯನಿರ್ವಹಣೆ, ಕಡತಗಳ ವಿಲೇವಾರಿ, ಸಿಬ್ಬಂದಿ ಹಾಜರಾತಿ ಹಾಗೂ ಸಾರ್ವಜನಿಕ ಸೇವೆಗಳ ಅನುಷ್ಠಾನ ಕುರಿತು ಪರಿಶೀಲಿಸಿದರು.ಪರಿಶೀಲನೆ ವೇಳೆ ಸರ್ಕಾರದ ಕರ್ತವ್ಯ ಆಪ್ ಅನ್ನು ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಡೌನ್‌ಲೋಡ್ ಮಾಡಿಕೊಂಡು, ಇ-ಹಾಜರಾತಿ ನಿಯಮಿತವಾಗಿ ದಾಖಲಿಸಬೇಕು. ಸರ್ಕಾರದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಕಚೇರಿ ಶಿಸ್ತು ಕಾಪಾಸಬೇಕು ಎಂದು ಸೂಚನೆ ನೀಡಿದರು.
ನಂತರ ಕಚೇರಿಗೆ ಆಗಮಿಸಿದ್ದ ಸಾರ್ವಜನಿಕರಿಂದ ಅಹವಾಲುಗಳನ್ನು ಆಲಿಸಿದ ಜಿಲ್ಲಾಧಿಕಾರಿಗಳು, ಅವುಗಳನ್ನು ನಿಗದಿತ ಅವಧಿಯೊಳಗೆ ಇತ್ಯರ್ಥ ಪಡಿಸುವಂತೆ ತಹಸೀಲ್ದಾರ್ ಅವರಿಗೆ ನಿರ್ದೇಶನ ನೀಡಿದರು.ಇ-ಆಫೀಸ್‌ನಲ್ಲಿ ಬಾಕಿ ಉಳಿದಿರುವ ಕಡತಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಬೇಕು. ಆದಾಯ, ಜಾತಿ, ನಿವಾಸ, ವಂಶವೃಕ್ಷ, ಭೂಹಿಡುವಳಿ ಸೇರಿದಂತೆ ಎಲ್ಲಾ ಪ್ರಮಾಣಪತ್ರಗಳನ್ನು ಸಕಾಲ ಯೋಜನೆಯಡಿ ನಿಗದಿತ ಅವಧಿಯಲ್ಲಿಯೇ ಸಾರ್ವಜನಿಕರಿಗೆ ಒದಗಿಸಬೇಕು. ಸೇವೆಗಳಲ್ಲಿ ಅನಗತ್ಯ ವಿಳಂಬ ಕಂಡುಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಬಳಿಕ ಜಿಲ್ಲಾಧಿಕಾರಿಗಳು ಕಸಬಾ ಹೋಬಳಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ರೈತರಿಗೆ ಸರ್ಕಾರದ ಸವಲತ್ತುಗಳನ್ನು ತಲುಪಿಸಲು ಅತ್ಯಂತ ಪ್ರಮುಖವಾಗಿರುವ ಫ್ರೂಟ್ಸ್ ಐಡಿ ನೋಂದಣಿ ಮತ್ತು ಅದರ ಪ್ರಗತಿಯ ಕುರಿತು ಪರಿಶೀಲಿಸಿ, ಅಧಿಕಾರಿಗಳಿಗೆ ಅಗತ್ಯ ನಿರ್ದೇಶನ ನೀಡಿದರು.
ಬಿತ್ತನೆ ಬೀಜ ವಿತರಣೆ ಮುಂಗಾರು ಹಂಗಾಮು ಆರಂಭವಾಗಿರುವುದರಿಂದ ರೈತರಿಗೆ ಸಕಾಲದಲ್ಲಿ ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೃಷಿ ಪರಿಕರಗಳನ್ನು ವಿತರಿಸಲು ಮತ್ತು ಕೇಂದ್ರದಲ್ಲಿ ಸೂಚಿಸಿದರು.
ನೀರು ಶುದ್ಧೀಕರಣ ಘಟಕಕ್ಕೆ ಡೀಸಿ ಭೇಟಿ:ಬಳಿಕ ಪಟ್ಟಣದ ನೀರು ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿ ಘಟಕದ ಓವರ್‌ಹೆಡ್ ಟ್ಯಾಂಕ್ ವೀಕ್ಷಿಸಿದರು. ಶುದ್ಧ ಕುಡಿಯುವ ನೀರಿನ ಪೂರೈಕೆ ವ್ಯವಸ್ಥೆ ಸಮರ್ಪಕವಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಲೋಕಾಯುಕ್ತದಲ್ಲಿ ದಾಖಲಾಗಿರುವ ಸ್ವಯಂ ಪ್ರೇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ, ನದಿಗೆ ಕೊಳಚೆ ನೀರು ಹರಿಯದಂತೆ ಅಳವಡಿಸಲಾಗಿರುವ ಪೈಪ್‌ಲೈನ್ ವ್ಯವಸ್ಥೆ ಪರಿಶೀಲಿಸಿದರು. ಸಂಸ್ಕರಿಸದ ಕೊಳಚೆ ನೀರು ನದಿಗೆ ಸೇರ್ಪಡೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ನಂತರ ಕೊಳಚೆ ನೀರು ಶುದ್ಧೀಕರಣ ಘಟಕನ್ನು ಪರಿಶೀಲಿಸಿ, ಘಟಕವು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದೆಯೇ ಎಂಬುದನ್ನು ಪರಿಶೀಲಿಸಿದರು. ಕೊಳಚೆ ನೀರಿನ ಸಂಸ್ಕರಣೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾನದಂಡಗಳಿಗೆ ಅನುಗುಣವಾಗಿ ನಡೆಯಬೇಕು ಹಾಗೂ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕು ಎಂದು ಸೂಚಿಸಿದರು.
ಈ ವೇಳೆ ಉಪವಿಭಾಗಾಧಿಕಾರಿ ಶ್ರೀನಿವಾಸ್, ತಹಸೀಲ್ದಾರ್ ಚೇತನ ಯಾದವ್, ಮುಖ್ಯಾಧಿಕಾರಿ ಎಂ.ರಾಜಣ್ಣ, ಪಾಂಡವಪುರ ಎಡಿಎಲ್‌ಆರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.