ಸಾರಾಂಶ
ಕನ್ನಡಪ್ರಭ ವಾರ್ತೆ ಹಾಸನ
ಪೌತಿ ಖಾತೆ ಆಂದೋಲನದ ಜೊತೆಗೆ ಪಿಂಚಣಿ ಆಂದೋಲನ ಕೂಡಾ ನಡೆಸಿ ಕೈಬಿಟ್ಟು ಹೋಗಿರುವವರನ್ನು ಗುರುತಿಸಿ ಅರ್ಹರಿಗೆ ಸರ್ಕಾರಿ ಯೋಜನೆಗಳ ಸೌಲಭ್ಯವನ್ನು ಒದಗಿಸಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಿ ಮಾತನಾಡಿದ ಅವರು, ಕೆರೆ, ಗೋಮಾಳ ಮತ್ತು ಸ್ಮಶಾನ ಒತ್ತುವರಿಯನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಲು ಕ್ರಮವಹಿಸುವಂತೆ ಉಪ ವಿಭಾಗಾಧಿಕಾರಿಗೆ ಸೂಚಿಸಿದರು. ದುರಸ್ತಿಗಾಗಿ ಸ್ವೀಕೃತವಾದ ಅರ್ಜಿಗಳಲ್ಲಿ ಅಗತ್ಯ ದಾಖಲೆಗಳು ಇಲ್ಲದಿದ್ದಲ್ಲಿ ಅಂತಹವುಗಳನ್ನು ಮಿಸ್ಸಿಂಗ್ ಕಮಿಟಿಯಲ್ಲಿಡಲು ತಿಳಿಸಿದರಲ್ಲದೆ, ಆಲೂರು ತಾಲೂಕಿನ ಬಂಡಿ ತಿಮ್ಮನಹಳ್ಳಿಗೆ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕೊಳವೆ ಬಾವಿ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನಿಸಿದಾಗ ಅರ್ಜಿ ಸಲ್ಲಿಸಲು ತಿಳಿಸಿದರು.
ಶನಿವಾರ ಸ್ವೀಕೃತವಾಗಿರುವ ಒಟ್ಟು ೧೪೦ ಅರ್ಜಿಗಳನ್ನು ಆದಷ್ಟೂ ಶೀಘ್ರವಾಗಿ ವಿಲೇವಾರಿ ಮಾಡಲು ಅಧಿಕಾರಿಗಳು ಕ್ರಮವಹಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಪ್ರತಿ ಮಾಹೆಯ ಮೊದಲ ಶನಿವಾರ ಕಡ್ಡಾಯವಾಗಿ ತಾಲೂಕು ಮಟ್ಟದಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ನಿಗದಿತ ಅವಧಿಯೊಳಗೆ ವಿಲೇವಾರಿಗೆ ಕ್ರಮಕೈಗೊಳ್ಳುವಂತೆ ನಿರ್ದೇಶನ ನೀಡಿದರು.ಪ್ರತಿನಿತ್ಯ ದಿನಪತ್ರಿಕೆಗಳಲ್ಲಿ ಸಾರ್ವಜನಿಕ ಕುಂದುಕೊರತೆ ಕುರಿತು ಪ್ರಕಟವಾಗುವ ಸುದ್ದಿಗಳಿಗೆ ಸಂಬಂಧಿಸಿದಂತೆ ಸಂಬಂದಪಟ್ಟ ಇಲಾಖೆಯ ಅಧಿಕಾರಿಗಳು ಗಮನಹರಿಸಿ ಸಮಸ್ಯೆ ಪರಿಹಾರಕ್ಕೆ ಕ್ರಮವಹಿಸುವಂತೆ ಸೂಚಿಸಿದರಲ್ಲದೆ, ಯಾವುದೇ ದೂರುಗಳು ಬಂದಂತಹ ಸಂದರ್ಭದಲ್ಲಿ ಅಧಿಕಾರಿಗಳು ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಸಮಸ್ಯೆ ಬಗೆಹರಿಸುವಂತೆ ತಿಳಿಸಿದರು. ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡುವ ಮೂಲಕ ಎಲ್ಲಾ ಸರ್ಕಾರಿ ಕಟ್ಟಡಗಳನ್ನು ಸುರಕ್ಷಿತವಾಗಿರುವಂತೆ ನೋಡಿಕೊಳ್ಳಿ, ಮಕ್ಕಳ ಸುರಕ್ಷತೆ ದೃಷ್ಠಿಯಿಂದ ಶಾಲಾ ಕಟ್ಟಡಗಳ ದುರಸ್ಥಿಗೆ ಹೆಚ್ಚು ಒತ್ತು ನೀಡಿ, ಸರ್ಕಾರಿ ಆಸ್ತಿಗಳನ್ನು ಸಂರಕ್ಷಣೆಗೆ ನಿಗಾವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಪಡಿತರ ಪದಾರ್ಥಗಳ ವಿತರಣೆಯಲ್ಲಿ ಮಾಹೆಗೆ ಪ್ರತಿ ವ್ಯಕ್ತಿಗೆ ೧೦ ಕೆ.ಜಿ.ಅಕ್ಕಿ ನೀಡಲಾಗುತ್ತದೆ. ಅದರ ಬದಲಾಗಿ ೫ ಕೆ.ಜಿ.ಅಕ್ಕಿ ಹಾಗೂ ಇತರೆ ಆಹಾರ ಪದಾರ್ಥಗಳನ್ನು ನೀಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಒಂದು ತಂಡ ರಚನೆ ಮಾಡಿ ಪ್ರತಿ ತಾಲೂಕಿನ ಒಂದೊಂದು ಗ್ರಾಮ ಪಂಚಾಯಿತಿ ಆಯ್ಕೆ ಮಾಡಿಕೊಂಡು ಖುದ್ದು ಭೇಟಿ ನೀಡಿ ಸಾರ್ವಜನಿಕರ ಅಭಿಪ್ರಾಯ ಪಡೆದುಕೊಂಡು ಸಮಗ್ರ ವರದಿ ತಯಾರಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.ಅರ್ಹ ಬಡ ಕುಟುಂಬಗಳಿಗೆ ಪಡಿತರ ಪದಾರ್ಥಗಳು ದೊರಕಬೇಕು. ಈ ನಿಟ್ಟಿನಲ್ಲಿ ತಹಸೀಲ್ದಾರ್ ಖುದ್ದು ಭೇಟಿ ನೀಡಿ ಪರಿಶೀಲನೆ ಮಾಡಿ ಸವಲತ್ತುಗಳನ್ನು ಕಲ್ಪಿಸುವಂತೆ ಸೂಚಿಸಿದರು. ಸಾರ್ವಜನಿಕರನ್ನು ಕಚೇರಿಗೆ ಅಲೆದಾಡಿಸದಂತೆ ನಿಗದಿತ ಅವಧಿಯೊಳಗೆ ಸವಲತ್ತುಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮಳೆಗಾಲದಲ್ಲಿ ವಿದ್ಯುತ್ ತಂತಿಗಳ ಮೇಲೆ ಮರದ ಕೊಂಬೆ ರೆಂಬೆಗಳು ಬಿದ್ದು, ಅವಘಡಗಳು ಸಂಭವಿಸದಂತೆ ಎಚ್ಚರವಹಿಸಿ, ಅಂತಹವುಗಳನ್ನು ಕಡಿಯಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಒಂದು ತಂಡವಾಗಿ ಕೆಲಸ ಮಾಡಿದರೆ ಯಶಸ್ವಿಯಾಗಲು ಸಾಧ್ಯ ಎಂದು ತಿಳಿಸಿದರು.
ವಿದ್ಯುತ್ ಸಮಸ್ಯೆಗೆ ಸಂಬಂಧಿಸಿದಂತೆ ದೂರುಗಳಿದ್ದಲ್ಲಿ ಸಾರ್ವಜನಿಕರು ೯೪೪೮೯೯೪೯೨೨ ಕರೆ ಮಾಡಬಹುದಾಗಿದೆ ತಮ್ಮ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಿರುವ ಕಂಬದಲ್ಲಿ ನಮೂದಿಸಿರುವ ಸಂಖ್ಯೆಯನ್ನು ದೂರು ನೀಡುವ ಸಂದರ್ಭದಲ್ಲಿ ತಿಳಿಸಿದರೆ ತಕ್ಷಣ ಬಂದು ಚೆಸ್ಕಾಂ ಸಿಬ್ಬಂದಿ ಸಮಸ್ಯೆ ಬಗೆಹರಿಸಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.ದುರಸ್ತಿ, ಹಕ್ಕುಪತ್ರ, ಸಾಗುವಳಿ ಚೀಟಿ, ಆರ್.ಟಿ.ಸಿ.ತಿದ್ದುಪಡಿ, ಜಮೀನಿಗೆ ಓಡಾಡಲು ರಸ್ತೆ, ರೈಲ್ವೆ ಯೋಜನೆಗೆ ಭೂಸ್ವಾಧೀನಕ್ಕೆ ಹೆಚ್ಚಿನ ಪರಿಹಾರ ನೀಡಲು ಮನವಿ ಅರ್ಜಿಗಳನ್ನು ಸ್ವೀಕರಿಸಿದ ಜಿಲ್ಲಾಧಿಕಾರಿ ಅವರು ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಸಂಬಂದಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್ ಪೂರ್ಣಿಮಾ ಮಾತನಾಡಿ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ, ಉಪ ವಿಭಾಗಾಧಿಕಾರಿಗಳಾದ ಶೃತಿ, ಮಾರುತಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.