ಸಾರಾಂಶ
ಜಿಲ್ಲೆಯ ಕೊರಟಗೆರೆ ತಾಲೂಕು ವಜ್ಜನಕುರಿಕೆ ಗ್ರಾಮ ಪಂಚಾಯತಿ ಮೋರಗಾನಹಳ್ಳಿ ಗ್ರಾಮದಲ್ಲಿ ತಲೆದೊರಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಬಳಿ ಗ್ರಾಮಸ್ಥರು ಅಳಲು ತೋಡಿಕೊಂಡರು.
ಕನ್ನಡಪ್ರಭ ವಾರ್ತೆ, ತುಮಕೂರು
ಜಿಲ್ಲೆಯ ಕೊರಟಗೆರೆ ತಾಲೂಕು ವಜ್ಜನಕುರಿಕೆ ಗ್ರಾಮ ಪಂಚಾಯತಿ ಮೋರಗಾನಹಳ್ಳಿ ಗ್ರಾಮದಲ್ಲಿ ತಲೆದೊರಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಬಳಿ ಗ್ರಾಮಸ್ಥರು ಅಳಲು ತೋಡಿಕೊಂಡರು.ಮೋರಗಾನಹಳ್ಳಿ ಗ್ರಾಮದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ಗ್ರಾಮಸ್ಥರು ಅಹವಾಲು ನೀಡಿದ್ದರು. ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಭಾನುವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮಸ್ಥರ ಅಹವಾಲಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ ಕುಡಿಯುವ ನೀರಿನ ಸಮಸ್ಯೆಗೆ ತುರ್ತಾಗಿ ಪರಿಹಾರ ಒದಗಿಸಬೇಕೆಂದು ತಹಶೀಲ್ದಾರ್ ಮಂಜುನಾಥ್ ಹಾಗೂ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಾಂತರಾಜು ಅವರಿಗೆ ಸೂಚನೆ ನೀಡಿದರು.
ನಂತರ ಜಾನುವಾರುಗಳ ಮೇವಿನ ಬಗ್ಗೆ ಆಲಿಸಿದ ಅವರು ಬೇಸಿಗೆಯಲ್ಲಿ ಜಾನುವಾರುಗಳಿಗೆ ಮೇವಿನ ಸಮಸ್ಯೆ ಉಂಟಾಗದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದರಲ್ಲದೆ ಜನರು ವಾಸಿಸುವ ಸ್ಥಳದ ಸುತ್ತಮುತ್ತ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ಹೋಗಿಬರಲು ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ಗ್ರಾಮಸ್ಥರು ಮನವಿ ಮಾಡಿದಾಗ ಜಿಲ್ಲಾಧಿಕಾರಿಗಳು ಸ್ಥಳದಲ್ಲಿಯೇ ದೂರವಾಣಿ ಮೂಲಕ ಕೆಎಸ್‌ಆರ್‌ಟಿಸಿ ನಿಯಂತ್ರಣಾಧಿಕಾರಿಗಳನ್ನು ಸಂಪರ್ಕಿಸಿ ಬಸ್ ವ್ಯವಸ್ಥೆ ಮಾಡಬೇಕೆಂದು ಸೂಚನೆ ನೀಡಿದರು.