ಸಾರಾಂಶ
ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾ.2 ರಂದು ಸಂಜೆ 4 ಗಂಟೆಗೆ ಕಾರ್ಕಳ ಗಾಂಧಿ ಮೈದಾನದಲ್ಲಿ ನಡೆಯುವ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಭಾಗವಹಿಸುವರು.
ಕನ್ನಡಪ್ರಭ ವಾರ್ತೆ ಉಡುಪಿ
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾ.2 ರಂದು ಸಂಜೆ 4 ಗಂಟೆಗೆ ಕಾರ್ಕಳ ಗಾಂಧಿ ಮೈದಾನದಲ್ಲಿ ನಡೆಯುವ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಭಾಗವಹಿಸುವರು ಎಂದು ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 11ಕ್ಕೆ ಕಾಪುವಿನ ನವೀಕೃತ ಮಾರಿಗುಡಿಯ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ 12.30 ಕ್ಕೆ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡುವರು. ನಂತರ 2.30 ಕ್ಕೆ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ವಾಹನ ಜಾಥಾದ ಮೂಲಕ ಅವರನ್ನು ಕಾರ್ಕಳಕ್ಕೆ ಕರೆದೊಯ್ಯಲಾಗುವುದು ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 209 ಬೂತ್ ಗಳ, 34 ಗ್ರಾಮೀಣ ಕಾಂಗ್ರೆಸ್ ಹಾಗೂ 2 ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಇದೇ ವೇದಿಕೆಯಲ್ಲಿ ನಡೆಯಲಿದೆ ಎಂದರು.ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರು ಶಾಸಕರಾಗಿ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಅವರಿಗೆ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಅಭಿನಂದನೆ ಹಮ್ಮಿಕೊಳ್ಳಲಾಗಿದೆ ಎಂದರು.
ಪಕ್ಷದ ಮುಖಂಡರಾದ ರಮೇಶ್ ಕಾಂಚನ್, ಕೆ. ಕೃಷ್ಣಮೂರ್ತಿ ಆಚಾರ್ಯ ಇದ್ದರು....................
‘ಸಮಸ್ಯೆಗಳನ್ನು ಡಿಸಿಎಂ ಗಮನಕ್ಕೆ ತಂದು ಪರಿಹಾರ’ಉಪಮುಖ್ಯಮಂತ್ರಿ ಶಿವಕುಮಾರ್ ಈ ಸಂದರ್ಭದಲ್ಲಿ ಆಗಮಿಸುವುದರಿಂದ ಜಿಲ್ಲೆಯಲ್ಲಿ ತಾ.ಪಂ. - ಜಿ.ಪಂ. ಚುನಾವಣೆಗೆ ಪಕ್ಷವನ್ನು ಸಂಘಟನೆಗೆ ಸಹಕಾರಿಯಾಗುತ್ತದೆ ಎಂದು ಉದಯಕುಮಾರ್ ಶೆಟ್ಟಿ ಹೇಳಿದರು.
ಕೃಷಿ, ಕೂಲಿ ಜನರೇ ಹೆಚ್ಚಿರುವ ಕಾರ್ಕದಲ್ಲಿ ನೀರಾವರಿ ವ್ಯವಸ್ಥೆಯ ಕೊರತೆ ಇದೆ. ಕ್ಷೇತ್ರದಲ್ಲಿ 20 ವರ್ಷಗಳಿಂದ ಅಭಿವೃದ್ಧಿಯೇ ಕುಂಠಿತವಾಗಿದೆ, 3 ದಶಕಗಳಿಂದ ಆಗುಂಬೆ ರಸ್ತೆ ಅಗಲೀಕರಣ ನೆನಗುದಿಗೆ ಬಿದ್ದಿದೆ, ಪರಶುರಾಮ್ ಥೀಮ್ ಪಾರ್ಕ್‌ನಲ್ಲಿ ನಡೆದಿರುವ ಅವ್ಯವಹಾರ ಇತ್ಯರ್ಥವಾಗಬೇಕಾಗಿದೆ, ಈ ಎಲ್ಲಾ ವಿಷಯಗಳನ್ನು ಅಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಗಮನಕ್ಕೆ ತಂದು ಪರಿಹಾರಕ್ಕೆ ಪ್ರಯತ್ನಿಸಲಾಗುತ್ತದೆ ಎಂದವರು ಹೇಳಿದರು.