ಕನ್ನಡಪ್ರಭ ವಾರ್ತೆ ಬೆಂಗಳೂರು
ಜ್ಞಾನಭಾರತಿ ಆವರಣದಲ್ಲಿ ಕಳೆದ ಗುರುವಾರ ಅಪಘಾತಕ್ಕೀಡಾಗಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಬುಧವಾರ ಮೃತಪಟ್ಟಿದ್ದು, ಆಕ್ರೋಶಗೊಂಡ ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.ಜು.30 ರಂದು ಆಟೋ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ದೃಶ್ಯಕಲಾ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿನಿ ಮಾನಸ (23) ಚಿಕಿತ್ಸೆ ಫಲಿಸದೆ ಬುಧವಾರ ಮಧ್ಯಾಹ್ನ ಮೈಸೂರಿನ ಆಸ್ಪತ್ರೆಯಲ್ಲಿ ಮೃತಪಟ್ಟರು.
ವಿದ್ಯಾರ್ಥಿಗಳ ಪ್ರತಿಭಟನೆ:ವಿದ್ಯಾರ್ಥಿನಿಯ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಜ್ಞಾನಭಾರತಿ ಆವರಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಜ್ಞಾನಭಾರತಿ ಆವರಣದೊಳಗೆ ಸಾರ್ವಜನಿಕ ವಾಹನಗಳ ಮುಕ್ತ ಸಂಚಾರವೇ ಈ ದುರಂತಕ್ಕೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ ನೂರಾರು ವಿದ್ಯಾರ್ಥಿಗಳು, ಮಧ್ಯಾಹ್ನ 3 ಗಂಟೆಯ ಸುಮಾರಿಗೆ ರಸ್ತೆ ತಡೆದು ಪ್ರತಿಭಟನಾ ರ್‍ಯಾಲಿ ನಡೆಸಿದರು.
ಆವರಣದೊಳಗೆ ಸಾರ್ವಜನಿಕ ವಾಹನಗಳ ಸಂಚಾರವನ್ನು ತಕ್ಷಣವೇ ಬಂದ್ ಮಾಡಬೇಕು ಮತ್ತು ವಿದ್ಯಾರ್ಥಿಗಳ ಸುರಕ್ಷತೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಬೆಂಗಳೂರು ವಿವಿ ಕುಲಪತಿಗಳು ಸ್ಥಳಕ್ಕೆ ಆಗಮಿಸುವವರೆಗೆ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದರು. ವಿದ್ಯಾರ್ಥಿಗಳ ಪ್ರತಿಭಟನೆಯ ವಿಚಾರ ತಿಳಿಯುತ್ತಿದಂತೆ ಸ್ಥಳಕ್ಕೆ ಕೆಂಗೇರಿ ಎಸಿಪಿ ಮತ್ತು ಜ್ಞಾನಭಾರತಿ ಠಾಣೆ ಪೊಲೀಸರು ಆಗಮಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು. ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆಯಿಂದ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿತ್ತು.
ನಂಜನಗೂಡು ಮೂಲದ ಮಾನಸ ಅವರು ಜು.30ರ ಮಧ್ಯಾಹ್ನ 2 ಗಂಟೆಯ ಸುಮಾರಿಗೆ ವಿಶ್ವವಿದ್ಯಾಲಯದ ಆಡಳಿತ ಕಚೇರಿ ಕಡೆಯಿಂದ ನಾಗರಬಾವಿ ವೃತ್ತದ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ಬಂದ ಆಟೋ ಅವರಿಗೆ ಡಿಕ್ಕಿ ಹೊಡೆದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಪೋಷಕರು ಅವರನ್ನು ಮೈಸೂರಿನ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಈ ಸಂಬಂಧ ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.