ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಆಚರಣೆಗೆ ನಿರ್ಧಾರ

| Published : Oct 17 2024, 12:11 AM IST

ಸಾರಾಂಶ

ಹಾವೇರಿ ಜಿಲ್ಲಾಡಳಿತದಿಂದ ನ. ೧ರಂದು ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರು ಸೂಚನೆ ನೀಡಿದರು.

ಹಾವೇರಿ: ಜಿಲ್ಲಾಡಳಿತದಿಂದ ನ. ೧ರಂದು ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರು ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಕನ್ನಡ ರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂದು ಬೆಳಗ್ಗೆ ನಗರದ ಮೈಲಾರ ಮಹದೇವಪ್ಪ ವೃತ್ತದಿಂದ ಹೊರಡುವ ಭುವನೇಶ್ವರಿ ಭಾವಚಿತ್ರ ಮೆರವಣಿಗೆ ಅಗತ್ಯ ಜನಪದ ಕಲಾ ತಂಡಗಳನ್ನು ಒದಗಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಕ್ರೀಡಾಂಗಣ ಸ್ವಚ್ಛತೆ, ವೇದಿಕೆ ಅಲಂಕಾರ, ಆಸನ ವ್ಯವಸ್ಥೆ, ಪಥಸಂಚಲನ, ಆ್ಯಂಬುಲೆನ್ಸ್, ಕುಡಿಯುವ ನೀರು, ಧ್ವನಿವರ್ಧಕ ಸೇರಿದಂತೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ವಿವಿಧ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕಾರ್ಯಕ್ರಮದಲ್ಲಿ ಕನ್ನಡ ನಾಡು-ನುಡಿ ಹಾಗೂ ಸಂಸ್ಕೃತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಎಲ್ಲ ಸರ್ಕಾರಿ ಕಟ್ಟಡಗಳಿಗೆ ದೀಪಾಲಂಕಾರ ಮಾಡಬೇಕು ಹಾಗೂ ನಗರದ ಎಲ್ಲ ವೃತ್ತಗಳಿಗೆ ದೀಪಾಲಂಕಾರ ಮಾಡುವಂತೆ ನಗರಸಭೆ ಪೌರಾಯುಕ್ತರಿಗೆ ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಕಾರ್ಯಕ್ರಮದ ರೂಪುರೇಷೆ ಮಾಹಿತಿ ನೀಡಿದರು. ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ. ರಂಗಸ್ವಾಮಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಮಮತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸುರೇಶ ಹುಗ್ಗಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಉಮೇಶಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಆರ್.ವಿ. ಚಿನ್ನಿಕಟ್ಟಿ, ತಹಸೀಲ್ದಾರ್ ಶರಣಮ್ಮ ಉಪಸ್ಥಿತರಿದ್ದರು.