ಸಾರಾಂಶ
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಹಲವು ವರ್ಷಗಳಿಂದ ಸ್ಥಗಿತಗೊಂಡಿದ್ದ ಮುಧೋಳ ರನ್ನವೈಭವ-2025ನ್ನು ಇದೇ ಫೆ.22, 23 ಹಾಗೂ 24ರಂದು ಮೂರು ದಿನಗಳ ಕಾಲ ಹಮ್ಮಿಕೊಳ್ಳಲು ಜಿಲ್ಲಾಡಳಿತ ನಿರ್ದರಿಸಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ತಿಳಿಸಿದರು.ಜಿಲ್ಲಾಧಿಕಾರಿ ಸಭಾಂಗಣದಲ್ಲಿ ರನ್ನ ವೈಭವ ಆಚರಣೆ ಕುರಿತಂತೆ ಪೂರ್ವಭಾವಿಯಾಗಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲಾಡಳಿತ, ಜಿಪಂ, ರನ್ನ ಪ್ರತಿಷ್ಠಾನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿಯಾಗಿ ರನ್ನ ವೈಭವ-2025ನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ. ಕಾರ್ಯಕ್ರಮ ರೂಪು-ರೇಷೆ ತಯಾರಿಸಲು ವಿವಿಧ ರೀತಿಯ ಸಮಿತಿ ರಚಿಸಲಾಗುತ್ತಿದೆ. ಪ್ರತಿಯೊಂದು ಸಮಿತಿಯವರು ಅಚ್ಚಕಟ್ಟಾಗಿ ಕೆಲಸ ನಿರ್ವಹಿಸಲು ತಿಳಿಸಿದರು.
ರನ್ನ ವೈಭವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಜೊತೆಗೆ ಕ್ರೀಡೆಗಳನ್ನು ಸಹ ಆಯೋಜನೆ ಮಾಡಲಾಗುತ್ತಿದೆ. ಅಧಿಕಾರಿಗಳು ತಮಗೆ ಯಾವುದರ ಮೇಲೆ ಆಸಕ್ತಿ ಇರುವುದು ಅಂತಹ ಸಮಿತಿಗಳಲ್ಲಿ ತೊಡಗಿಸಿಕೊಂಡು ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಸಲು ಸನ್ನದ್ಧರಾಗಬೇಕು. ಆಚರಣೆ ಸಂಬಂಧಿಸಿದಂತೆ ಸಾಂಸ್ಕೃತಿಕ ಕಾರ್ಯಕ್ರಮ, ಕವಿಗೋಷ್ಠಿ, ವಿಚಾರಗೋಷ್ಠಿ ಸೇರಿದಂತೆ ಇತರೆ ವಿಷಯಗಳ ಕುರಿತು ಸಾರ್ವಜನಿಕರು, ಕಲಾ ಆಸಕ್ತರು, ತಮ್ಮ ಅಭಿಪ್ರಾಯಗಳನ್ನು ತಿಳಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ, ಶ್ವೇತಾ ಬೀಡಿಕರ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ವಿವೇಕಾನಂದ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಜಶೇಖರ ಪಟ್ಟಣಶೆಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕರ್ಣಕುಮಾರ ಜೈನಾಪೂರ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಆಯಾ ತಾಲೂಕಿನ ತಹಶೀಲ್ದಾರರು ಉಪಸ್ಥಿತರಿದ್ದರು.