ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್‌ಗೆ ನಿರ್ಧಾರ

| Published : Nov 19 2025, 12:45 AM IST

ಸಾರಾಂಶ

ಮೇಕೆದಾಟು ಯೋಜನೆ ಕುರಿತು ಹೊಸದಾಗಿ ವಿಸ್ತೃತ ಯೋಜನಾ ವರದಿ (ಡಿಪಿಆರ್‌) ಸಿದ್ಧಪಡಿಸಿ ಕೇಂದ್ರದ ಸಂಬಂಧಪಟ್ಟ ಇಲಾಖೆಗಳಿಗೆ ಸಲ್ಲಿಸಲು ಕಾವೇರಿ ನೀರಾವರಿ ನಿಗಮದ ನಿರ್ದೇಶಕರ ಮಂಡಳಿ ಸಭೆಯಲ್ಲಿ ನಿರ್ಧರಿಸಲಾಯಿತು.

ಕನ್ನಡಪ್ರಭ ವಾರ್ತೆ ಬೆಂಗಳೂರು

ಮೇಕೆದಾಟು ಯೋಜನೆ ಕುರಿತು ಹೊಸದಾಗಿ ವಿಸ್ತೃತ ಯೋಜನಾ ವರದಿ (ಡಿಪಿಆರ್‌) ಸಿದ್ಧಪಡಿಸಿ ಕೇಂದ್ರದ ಸಂಬಂಧಪಟ್ಟ ಇಲಾಖೆಗಳಿಗೆ ಸಲ್ಲಿಸಲು ಕಾವೇರಿ ನೀರಾವರಿ ನಿಗಮದ ನಿರ್ದೇಶಕರ ಮಂಡಳಿ ಸಭೆಯಲ್ಲಿ ನಿರ್ಧರಿಸಲಾಯಿತು.

ವಿಧಾನಸೌಧದಲ್ಲಿ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಾವೇರಿ ನೀರಾವರಿ ನಿಗಮದ ನಿರ್ದೇಶಕರ ಮಂಡಳಿ ಸಭೆಯಲ್ಲಿ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿ ಚರ್ಚೆಗಳನ್ನು ನಡೆಸಲಾಯಿತು.

ಮೊದಲಿಗೆ ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ಅದರಿಂದ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಇದ್ದ ಅಡೆತಡೆ ನಿವಾರಣೆಯಾಗಿದೆ ಎಂಬ ಬಗ್ಗೆ ಅಧಿಕಾರಿಗಳು ಸಭೆಗೆ ವಿವರಿಸಿದರು. ಅದರ ಆಧಾರದಲ್ಲಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲಾಯಿತು.

ಯೋಜನೆ ಸಂಬಂಧ ಎಲ್ಲ ತೀರ್ಮಾನಗಳನ್ನು ಕೇಂದ್ರ ಜಲ ಆಯೋಗ (ಸಿಡಬ್ಲ್ಯುಸಿ) ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ) ಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್‌ ಸೂಚಿಸಿದೆ. ಅಲ್ಲದೆ, ಮೇಕೆದಾಟು ಯೋಜನೆ ಕುರಿತು ಈ ಹಿಂದೆ ಸಿದ್ಧಪಡಿಸಿ, ಸಲ್ಲಿಸಲಾಗಿದ್ದ ಡಿಪಿಆರ್‌ನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಹೀಗಾಗಿ ಹೊಸದಾಗಿ ಡಿಪಿಆರ್‌ ಸಿದ್ಧಪಡಿಸಿ ಸಲ್ಲಿಸಬೇಕಿದೆ. ಹೀಗಾಗಿ ಹೊಸದಾಗಿ, ಯಾವುದೇ ಸಮಸ್ಯೆ ಇಲ್ಲದಂತೆ ಡಿಪಿಆರ್‌ ಸಿದ್ಧಪಡಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್‌, ಕಾವೇರಿ ನೀರಾವರಿ ನಿಗಮದ ನಿರ್ದೇಶಕರ ಮಂಡಳಿ ಸಭೆಯಲ್ಲಿ ಮೇಕೆದಾಟು ಯೋಜನೆ ಅನುಷ್ಠಾನ ಸಂಬಂಧ ಚರ್ಚಿಸಲಾಗಿದೆ. ತಮಿಳುನಾಡು ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದ ಹಿನ್ನೆಲೆಯಲ್ಲಿ ಯೋಜನೆ ಜಾರಿಗೆ ಸಿದ್ಧತೆ ಮಾಡಿಕೊಳ್ಳಬೇಕಿದೆ. ಈ ಹಿಂದೆ ಮೇಕೆದಾಟು ಯೋಜನೆಯ ಡಿಪಿಆರ್‌ನ್ನು ಕೇಂದ್ರ ಸರ್ಕಾರ ತಿರಸ್ಕರಿಸಿತ್ತು. ಹೀಗಾಗಿ ಹೊಸದಾಗಿ ಡಿಪಿಆರ್‌ ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕಿದೆ. ಡಿಪಿಆರ್‌ನಲ್ಲಿ ಅರಣ್ಯ ಪ್ರದೇಶ ಬಳಕೆ, ಪರ್ಯಾಯ ಭೂಮಿ ನೀಡುವುದು ಸೇರಿ ಇನ್ನಿತರ ಅಂಶಗಳು ಇರಲಿವೆ. ಯೋಜನೆಗೆ ಅನುಮತಿ ಕೋರಿ ಕೇಂದ್ರ ಸರ್ಕಾರಕ್ಕೆ ಹೊಸದಾಗಿ ಅರ್ಜಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಮೇಕೆದಾಟು ಯೋಜನೆಗೆ ಈಗಾಗಲೇ ಹಾರೋಬೆಲೆ ಬಳಿ ಪ್ರತ್ಯೇಕ ಕಚೇರಿ ಸ್ಥಾಪಿಸಲಾಗಿದೆ. ಅದನ್ನು ಹೊರತುಪಡಿಸಿ ರಾಮನಗರದಲ್ಲಿ ಮುಖ್ಯ ಎಂಜಿನಿಯರ್‌ ಮಟ್ಟದ ಅಧಿಕಾರಿಗಳನ್ನೊಳಗೊಂಡ ಕಚೇರಿ ತೆರೆಯಲಾಗುವುದು. ಅದರಲ್ಲಿ ಅರಣ್ಯ ಇಲಾಖೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸೇರಿ ಮತ್ತಿತರ ಹಿರಿಯ ಅಧಿಕಾರಿಗಳು ಕಾರ್ಯನಿರ್ವಹಿಸಲಿದ್ದಾರೆ. ಜತೆಗೆ ಅಲ್ಲಿಗೆ ಬೇಕಾಗುವ ಅಧಿಕಾರಿ ಮತ್ತು ಸಿಬ್ಬಂದಿ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ವಿವರಿಸಿದರು.

ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್‌, ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತ, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್‌, ಉಪಮುಖ್ಯಮಂತ್ರಿ ಅವರ ಕಾರ್ಯದರ್ಶಿ ರಾಜೇಂದ್ರ ಚೋಳನ್‌, ತಾಂತ್ರಿಕ ಸಲಹೆಗಾರ ಜೈಪ್ರಕಾಶ್‌ ಇತರರಿದ್ದರು.

-ಬಾಕ್ಸ್‌-

ಸಿಎಂ ಸಭೆಗೂ ಮುನ್ನ ಡಿಸಿಎಂ ಸಭೆ

ಸಿಎಂ ಸಿದ್ದರಾಮಯ್ಯ ಕಾವೇರಿ ನೀರಾವರಿ ನಿಗಮದ ನಿರ್ದೇಶಕರ ಮಂಡಳಿ ಸಭೆಗೂ ಮುನ್ನ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲಾಯಿತು.