ಅ.೨೬ರಂದು ಶ್ರೀ ಮಹರ್ಷಿ ವಾಲ್ಮೀಕಿ ಅವರ ಜಯಂತಿ ಕಾರ್ಯಕ್ರಮವನ್ನು ನಗರದಲ್ಲಿ ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಯಿತು.
ಕನ್ನಡಪ್ರಭ ವಾರ್ತೆ ಚಾಮರಾಜನಗರ
ಅ.೨೬ರಂದು ಶ್ರೀ ಮಹರ್ಷಿ ವಾಲ್ಮೀಕಿ ಅವರ ಜಯಂತಿ ಕಾರ್ಯಕ್ರಮವನ್ನು ನಗರದಲ್ಲಿ ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಯಿತು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಸಂಬಂಧ ಜಿಲ್ಲಾಧಿಕಾರಿ ಶ್ರೀರೂಪ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು.
ಆರಂಭದಲ್ಲಿ ಜಿಲ್ಲಾಧಿಕಾರಿ ಶ್ರೀರೂಪ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಬಗ್ಗೆ ಸಭೆಯಲ್ಲಿ ಹಾಜರಿದ್ದ ಪರಿಶಿಷ್ಟ ವರ್ಗದ, ಇತರೆ ಜನಾಂಗದ ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖಂಡರ ಸಲಹೆ, ಅಭಿಪ್ರಾಯ ಅನಿಸಿಕೆಗಳನ್ನು ಆಲಿಸಿದರು.ಮಹರ್ಷಿ ವಾಲ್ಮೀಕಿಯವರು ರಾಮಾಯಣ ದರ್ಶನಂ ಮಹಾಗ್ರಂಥ ರಚನೆ ಮೂಲಕ ಸಮಾಜದ ಎಲ್ಲಾ ವರ್ಗಗಳಿಗೂ ಉತ್ತಮ ಸಂದೇಶ ನೀಡಿದ್ದು, ಜಯಂತಿಯನ್ನು ಜಿಲ್ಲೆಯಾದ್ಯಂತ ಹಬ್ಬದ ಮಾದರಿಯಲ್ಲಿ ಆಚರಿಸಬೇಕು. ಎಲ್ಲಾ ತಾಲೂಕುಗಳಲ್ಲಿ ಹಾಗೂ ಶಾಲಾ-ಕಾಲೇಜುಗಳಲ್ಲಿಯೂ ಜಯಂತಿ ಆಚರಣೆಯಾಗಬೇಕು. ಮೆರವಣಿಗೆಯನ್ನು ಹೆಚ್ಚಿನ ಸಾಂಸ್ಕೃತಿಕ ಕಲಾತಂಡಗಳೊಡನೆ ವ್ಯವಸ್ಥಿತವಾಗಿ ಆಯೋಜಿಸಬೇಕು. ಸಮಾಜದ ಸಾಧಕರು ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಬೇಕು. ಮುಖ್ಯ ಭಾಷಣಕಾರರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು ಎಂದು ಮುಖಂಡರು ಸಲಹೆ ನೀಡಿದರು.
ಅಲ್ಲದೆ ಜಿಲ್ಲಾಡಳಿತ ಭವನದ ಅವರಣದಲ್ಲಿ ಮಹರ್ಷಿ ವಾಲ್ಮೀಕಿಯವರ ಪ್ರತಿಮೆ ನಿರ್ಮಾಣ ಮಾಡಿ ಮುಂದಿನ ವರ್ಷದ ಜಯಂತಿ ಕಾರ್ಯಕ್ರಮದ ಸಂದರ್ಭದಲ್ಲಿ ಉದ್ಘಾಟಿಸಲಾಗುವುದೆಂದು ಭರವಸೆ ನೀಡಿದ್ದರೂ ಪ್ರತಿಮೆ ಇನ್ನೂ ನಿರ್ಮಾಣದ ಹಂತದಲ್ಲಿಯೇ ಇದೆ. ಇದು ವಿಳಂಬ ಧೋರಣೆಯಾಗಿದೆ ಎಂದು ಮುಖಂಡರು ಬೇಸರ ವ್ಯಕ್ತಪಡಿಸಿದರು. ಈ ಸಂಬಂಧ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಶ್ರೀರೂಪ ಪ್ರತಿಮೆ ನಿರ್ಮಾಣದಲ್ಲಿನ ತಾಂತ್ರಿಕ ಸಮಸ್ಯೆ ಪರಿಹರಿಸಿ ಶೀಘ್ರವಾಗಿ ಕ್ರಮ ವಹಿಸಲಾಗುವುದೆಂದು ತಿಳಿಸಿದರು.ಬಳಿಕ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕುರಿತು ಮಾತನಾಡಿದ ಜಿಲ್ಲಾಧಿಕಾರಿ ಶ್ರೀರೂಪ, ಅ. ೨೬ರಂದು ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ ಶಿಷ್ಟಾಚಾರ ಪ್ರಕಾರವೇ ಆಚರಿಸಲಾಗುವುದು. ಅಂದು ಬೆಳಿಗ್ಗೆ ನಗರದ ಪ್ರವಾಸಿ ಮಂದಿರದಿಂದ ಬೆಳ್ಳಿರಥದಲ್ಲಿ ಅಲಂಕೃತ ವಾಲ್ಮೀಕಿಯವರ ಭಾವಚಿತ್ರ ಮೆರವಣಿಗೆ ವಿವಿಧ ಸಾಂಸ್ಕೃತಿಕ ಕಲಾತಂಡಗಳೊಂದಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿ ಮಾರಿಗುಡಿ ಮುಂಭಾಗ ತಲುಪಲಿದೆ. ಅಲ್ಲಿಯೇ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದರು.
ಮೆರವಣಿಗೆ ಹೊರಡುವ ನಗರದ ರಸ್ತೆಗಳನ್ನು ತಳಿರು-ತೋರಣಗಳಿಂದ ಅಲಂಕರಿಸಬೇಕು. ಸ್ವಚ್ಚತೆ ಸೇರಿದಂತೆ ಅಗತ್ಯ ಸಿದ್ದತಾ ಕಾರ್ಯಗಳನ್ನು ಪೂರ್ಣಗೊಳಿಸಬೇಕು ಎಂದರು.ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಚ್.ವಿ. ಚಂದ್ರು, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಿಯದರ್ಶಿನಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್, ಡಿ.ವೈ.ಎಸ್.ಪಿ ಸ್ನೇಹರಾಜ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಚ್.ಎಸ್. ಬಿಂದ್ಯಾ, ಜಿಲ್ಲಾಮಟ್ಟದ ಅಧಿಕಾರಿಗಳು, ಮುಖಂಡರಾದ ಎಂ. ರಾಮಚಂದ್ರ, ಶ್ರೀನಿವಾಸನಾಯಕ, ಕೃಷ್ಣನಾಯಕ, ಚಾ.ಸಿ. ಸೋಮನಾಯಕ, ಬದನಗುಪ್ಪೆ ನಾರಾಯಣ, ಬದನಗುಪ್ಪೆ ಶಿವರಾಮು, ಚಂಗುಮಣಿ, ಜಿ. ಬಂಗಾರು, ಅಮಚವಾಡಿ ಮಹೇಂದ್ರ, ಕುಮಾರ್, ನಟರಾಜು, ಶಿವು ವಿರಾಟ್, ಬಿಸಿಲವಾಡಿ ನಾರಾಯಣನಾಯಕ, ಬಸವಾಪುರ ರಮೇಶ ಇತರರು ಹಾಜರಿದ್ದರು.