ಅರ್ಥಪೂರ್ಣ ದೇವರಾಜ ಅರಸು ಜನ್ಮದಿನ ಆಚರಿಸಲು ತೀರ್ಮಾನ: ಜಿಲ್ಲಾಧಿಕಾರಿ ಶಿಲ್ಪಾನಾಗ್

| Published : Aug 15 2024, 01:55 AM IST

ಅರ್ಥಪೂರ್ಣ ದೇವರಾಜ ಅರಸು ಜನ್ಮದಿನ ಆಚರಿಸಲು ತೀರ್ಮಾನ: ಜಿಲ್ಲಾಧಿಕಾರಿ ಶಿಲ್ಪಾನಾಗ್
Share this Article
  • FB
  • TW
  • Linkdin
  • Email

ಸಾರಾಂಶ

ಹಿಂದುಳಿದ ವರ್ಗಗಳ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನ್ಮದಿನವನ್ನು ಆ.20ರಂದು ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನ ಕೈಗೊಳ್ಳಲಾಯಿತು. ಚಾಮರಾಜನಗರದಲ್ಲಿ ಡಿ.ದೇವರಾಜ ಅರಸು ಜನ್ಮ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಹಿಂದುಳಿದ ವರ್ಗಗಳ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನ್ಮದಿನವನ್ನು ಆ.20ರಂದು ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನ ಕೈಗೊಳ್ಳಲಾಯಿತು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರ ಅಧ್ಯಕ್ಷತೆಯಲ್ಲಿ ನಡೆದ ಡಿ.ದೇವರಾಜ ಅರಸು ಜನ್ಮ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯಲ್ಲಿ ದೇವರಾಜ ಅರಸು ಜನ್ಮದಿನ ಆಚರಣೆಯನ್ನು ಎಲ್ಲರ ಸಹಕಾರದೊಂದಿಗೆ ಅರ್ಥಪೂರ್ಣ ಹಾಗೂ ಯಶಸ್ವಿಯಾಗಿ ನಡೆಸಲು ನಿರ್ಧಾರ ಕೈಗೊಳ್ಳಲಾಯಿತು.

ಸಭೆಯ ಆರಂಭದಲ್ಲಿಯೇ ಹಾಜರಿದ್ದ ಮುಖಂಡರು ಮಾತನಾಡಿ, ಡಿ.ದೇವರಾಜ ಅರಸು ಅವರ ಜನ್ಮದಿನ ಆಚರಣೆ ಅಚ್ಚುಕಟ್ಟಾಗಿ ನಡೆಯಬೇಕು. ಅರಸು ಅವರ ಜೀವನ ಸಾಧನೆ, ಆಡಳಿತ ಸುಧಾರಣೆ ಕುರಿತು ತಿಳಿಸುವ ಕಿರು ಹೊತ್ತಿಗೆ, ಕರಪತ್ರಗಳನ್ನು ಮುದ್ರಿಸಿ ವಿತರಣೆ ಮಾಡಬೇಕು. ಕಾರ್ಯಕ್ರಮದಲ್ಲಿ ಅರಸು ಅವರ ಬಗ್ಗೆ ವಿಶೇಷ ಉಪನ್ಯಾಸ ನೀಡಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡುವ ಮಕ್ಕಳಿಗೆ ಪ್ರಶಂಸನಾ ಪತ್ರ ನೀಡಬೇಕು. ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗೌರವಿಸಬೇಕು ಎಂಬುದೂ ಸೇರಿದಂತೆ ಇನ್ನಿತರ ಸಲಹೆಗಳನ್ನು ನೀಡಿದರು.

ಜಿಲ್ಲಾಧಿಕಾರಿ ಶಿಲ್ಪಾನಾಗ್ ಮಾತನಾಡಿ, ಡಿ.ದೇವರಾಜ ಅರಸು ಅವರ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಎಲ್ಲ ವ್ಯವಸ್ಥೆಗಳೊಂದಿಗೆ ಮಾಡಲಾಗುವುದು. ಚಾಮರಾಜೇಶ್ವರ ದೇವಾಲಯದಿಂದ ಡಿ.ದೇವರಾಜ ಅರಸು ಅವರ ಭಾವಚಿತ್ರದ ಮೆರವಣಿಗೆಯನ್ನು ಕಲಾತಂಡಗಳೊಂದಿಗೆ ನಡೆಸಲಾಗುವುದು. ಬಳಿಕ ವರನಟ ಡಾ.ರಾಜ್ ಕುಮಾರ್ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಏರ್ಪಾಡು ಮಾಡಲಾಗುವುದು ಎಂದು ತಿಳಿಸಿದರು.

ಅರಸು ಅವರ ವ್ಯಕ್ತಿತ್ವ, ವಿಚಾರಧಾರೆಗಳು, ಆಡಳಿತದಲ್ಲಿ ತಂದ ಮಹತ್ತರ ಸುಧಾರಣೆ ಸೇರಿದಂತೆ ಅಮೂಲ್ಯ ವಿಷಯಗಳನ್ನು ತಿಳಿಸುವ ಭಾಷಣಕಾರರನ್ನು ಆಯ್ಕೆ ಮಾಡಬೇಕಿದೆ. ಈ ನಿಟ್ಟಿನಲ್ಲಿ ಸಂಘಟನೆಗಳ ಮುಖಂಡರು ನೀಡುವ ಸಲಹೆಗಳನ್ನು ಪರಿಗಣಿಸಲಾಗುತ್ತದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದರು.

ಹೆಚ್ಚು ಅಂಕಗಳನ್ನು ಪಡೆದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸಲಾಗುತ್ತದೆ. ವಿದ್ಯಾರ್ಥಿಗಳ ಪೋಷಕರನ್ನು ಆಹ್ವಾನಿಸಿ ಗೌರವಿಸಲಾಗುತ್ತದೆ. ಕಾರ್ಯಕ್ರಮವು ಯಾವುದೇ ಲೋಪವಿಲ್ಲದಂತೆ ಅರ್ಥಪೂರ್ಣವಾಗಿ ಆಯೋಜಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು. ಕಾರ್ಯಕ್ರಮದ ಸಿದ್ಧತೆಗೆ ಅಗತ್ಯ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಲಾಗುವುದು ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಭಾರ ಅಧಿಕಾರಿ ಕುಮಾರ್, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಮುಖಂಡರಾದ ಚಾ.ರಂ.ಶ್ರೀನಿವಾಸಗೌಡ, ಕೆ.ಎಂ.ನಾಗರಾಜು, ಸಿ.ಎಂ.ಕೃಷ್ಣಮೂರ್ತಿ, ಬಸವನಪುರ ರಾಜಶೇಖರ್, ನಿಜಧ್ವನಿ ಗೋವಿಂದರಾಜು, ಪಿ.ಸಂಘಸೇನಾ, ಪರ್ವತರಾಜು, ಜಿ.ಬಂಗಾರು, ಕಂದಹಳ್ಳಿ ನಾರಾಯಣ, ನಟರಾಜು, ನಾಗೇಶ್, ಆಲೂರು ನಾಗೇಂದ್ರ, ಪಣ್ಯದಹುಂಡಿ ರಾಜು, ನಂಜುಂಡಸ್ವಾಮಿ ಸೇರಿದಂತೆ ಮತ್ತಿತರರಿದ್ದರು.