ಕೃಷ್ಣಾ ಮೇಲ್ದಂಡೆ ರಾಷ್ಟ್ರೀಯ ಯೋಜನೆಯಾಗಿ ಘೋಷಿಸಿ: ಆನಂದ ನ್ಯಾಮಗೌಡ

| Published : Dec 07 2024, 12:33 AM IST

ಸಾರಾಂಶ

ಕೃಷ್ಣಾಮೇಲ್ಡಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಬೇಕು. ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ಈಭಾಗದ ರೈತರಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಬೇಕು

ಜಮಖಂಡಿ: ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತವನ್ನು ಅನುಷ್ಠಾನಗೊಳಿಸುವಲ್ಲಿ ಸರ್ಕಾರಗಳು ವಿಫಲವಾಗಿವೆ. ಯಾವುದೇ ಸರ್ಕಾರ ಯೋಜನೆ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಂಡಂತೆ ಕಾಣುತ್ತಿಲ್ಲ ಎಂದು ಮಾಜಿ ಶಾಸಕ ಆನಂದ ನ್ಯಾಮಗೌಡ ತಿಳಿಸಿದ್ದಾರೆ.

ಶುಕ್ರವಾರ ಪತ್ರಿಕೆಗೆ ತಿಳಿಸಿದ ಅವರು, ಕೃಷ್ಣಾಮೇಲ್ಡಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಬೇಕು. ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ಈಭಾಗದ ರೈತರಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಬೇಕು ಎಂದರು. ರೈತರ ಸಮಸ್ಯೆಗೆ ಪರಿಹಾರ ಕೊಡುವಲ್ಲಿ ಎಲ್ಲ ಸರ್ಕಾರಗಳು ವಿಫಲವಾಗಿವೆ. ಬಾಗಲಕೋಟೆ, ವಿಜಯಪುರ, ಬೆಳಗಾವಿ ಜಿಲ್ಲೆಗಳ ರೈತರ ಸಮಸ್ಯೆಗೆ ತಾತ್ವಿಕ ಪರಿಹಾರ ಒದಗಿಸಬೇಕಾದ ಅನಿವಾರ್ಯತೆ ಇದೆ. ನ್ಯಾಯಮೂರ್ತಿ ಬಚಾವತ್‌ ಆಯೋಗದ ವರದಿ ಅನುಷ್ಠಾನಗೊಳಿಸಬೇಕು. ಉತ್ತರ ಕರ್ನಾಟಕದ ಜೀವ ನದಿಯಾಗಿರುವ ಕೃಷ್ಣೆ ಯೋಜನೆ ಜಾರಿಗೊಳಿಸುವ ಮೂಲಕ ಈ ಭಾಗದ ರೈತರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.

ಬಾಗಲಕೋಟೆಯಲ್ಲಿ ರೈತರು ಕಳೆದ 3 ದಿನಗಳಿಂದ ಯೋಜನೆಯ ಮೂರನೇ ಹಂತದ ಅನುಷ್ಠಾನಕ್ಕೆ ಆಗ್ರಹಿಸಿ ಹೋರಾಟ ನಡೆಸುತ್ತಿದ್ದಾರೆ. ಅವರ ಹೋರಾಟಕ್ಕೆ ಬೆಂಬಲಿಸಿ ನಾಡಿದ್ದು ಭಾಗವಹಿಸುವುದಾಗಿ ತಿಳಿಸಿದರು. ರೈತರ ಹಿತ ಕಾಯುವ ಕೆಲಸವಾಗಬೇಕು. ಕೇವಲ ರೈತ ದೇಶದ ಬೆನ್ನೆಲುಬು ಎಂದು ಹೇಳುವುದು ಕೇವಲ ಭಾಷಣಕ್ಕೆ ಸೀಮಿತವಾಗಬಾರದು. ರೈತರ ಅನುಕೂಲ ಮಾಡಿಕೊಡುವ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕ್ರಮ ಜರುಗಿಸಬೇಕು ಎಂದು ಹೇಳಿದರು.