ಆಧುನಿಕ ತಂತ್ರಜ್ಞಾನ ಬಳಕೆ ಮೂಲಕ ಮಕ್ಕಳ ಗುಣಮಟ್ಟದ ಶಿಕ್ಷಣಕ್ಕೆ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದ್ದರೂ ಮಕ್ಕಳಲ್ಲಿ ಮಾತ್ರ ಕಲಿಕೆಯ ಬಗ್ಗೆ ಆಸಕ್ತಿಯ ಕೊರತೆಯಾಗುತ್ತಿರುವುದು ಕಳವಳಕಾರಿ ಸಂಗತಿ ಎಂದು ಸಂಸದ ಬಿ.ವೈ. ರಾಘವೇಂದ್ರ ಆತಂಕ ವ್ಯಕ್ತಪಡಿಸಿದರು.
ಕನ್ನಡಪ್ರಭ ವಾರ್ತೆ ಶಿಕಾರಿಪುರ
ಆಧುನಿಕ ತಂತ್ರಜ್ಞಾನ ಬಳಕೆ ಮೂಲಕ ಮಕ್ಕಳ ಗುಣಮಟ್ಟದ ಶಿಕ್ಷಣಕ್ಕೆ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದ್ದರೂ ಮಕ್ಕಳಲ್ಲಿ ಮಾತ್ರ ಕಲಿಕೆಯ ಬಗ್ಗೆ ಆಸಕ್ತಿಯ ಕೊರತೆಯಾಗುತ್ತಿರುವುದು ಕಳವಳಕಾರಿ ಸಂಗತಿ ಎಂದು ಸಂಸದ ಬಿ.ವೈ. ರಾಘವೇಂದ್ರ ಆತಂಕ ವ್ಯಕ್ತಪಡಿಸಿದರು.ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ಶನಿವಾರ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಶಾಲಾ ಶಿಕ್ಷಣ ಇಲಾಖೆಗಳ ಸಹಯೋಗದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಮತ್ತು ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಸಾವಿತ್ರಿಬಾಯಿ ಫುಲೆ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
ಇಂದು ಶೇ. 60 ವಿದ್ಯಾರ್ಥಿಗಳು ಮೊಬೈಲ್ ಬಳಕೆ ಮಾಡುತ್ತಿದ್ದು, ಇದರಿಂದಾಗಿ ಹಲವರು ಸಮಯಕ್ಕೆ ಸರಿಯಾಗಿ ಊಟ ನಿದ್ರೆ ಇಲ್ಲದೆ ಅನಾರೋಗ್ಯ ಪೀಡಿತರಾಗುತ್ತಿದ್ದಾರೆ. ಆಧುನಿಕ ತಂತ್ರಜ್ಞಾನಗಳಾದ ಗೂಗಲ್ ಮುಖಾಂತರ ಎಐಗಳಂತಹ ಆ್ಯಪ್‌ಗಳನ್ನು ಮೊಬೈಲ್‌ಗಳಲ್ಲಿ ಡೌನ್ ಲೋಡ್ ಮಾಡಿಕೊಂಡು ಶಿಕ್ಷಕರ ಸರಿಸಮಾನವಾಗಿ ಕೆಲವು ಮಕ್ಕಳು ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಇದರೊಂದಿಗೆ ದುರ್ಬಳಕೆಯೂ ಹೆಚ್ಚಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.ವಿಜ್ಞಾನ ಎಷ್ಟೇ ಮುಂದುವರಿದರೂ ದೇಶದ ಜನತೆಗೆ ಅನ್ನ ನೀಡಬೇಕಾದರೆ ರೈತನ ಅವಶ್ಯಕತೆ ಹೆಚ್ಚಾಗಿದೆ. ಅದೇ ರೀತಿ ತಂತ್ರಜ್ಞಾನ ಎಷ್ಟೇ ಮುಂದುವರೆದರೂ ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಕರು ಇದ್ದಾಗ ಮಾತ್ರ ವಿದ್ಯಾರ್ಥಿಗಳು ಉನ್ನತ ಶ್ರೇಣಿಯ ಹುದ್ದೆಗಳನ್ನು ಅಲಂಕರಿಸಲು ಸಾಧ್ಯ. ದೇಶದ ಪ್ರಧಾನಿ 2047ರಲ್ಲಿ ವಿಕಸಿತ ಭಾರತದ ಕನಸು ಕಾಣುತ್ತಿರುವಾಗ ಈ ಕನಸನ್ನು ನನಸು ಮಾಡಲು ಶಿಕ್ಷಕರ ಅವಶ್ಯಕತೆ ಹೆಚ್ಚಾಗಿದೆ ಎಂದರು.
ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ನಾಗರಾಜ ಗೌಡ ಮಾತನಾಡಿ, ಮಾಜಿ ಸಿಎಂ ಯಡಿಯೂರಪ್ಪ ಅವರ ಸಹಿತ ಹಲವು ಮುಖ್ಯಮಂತ್ರಿ, ಮಂತ್ರಿಗಳು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿದ್ದಾರೆ. ಈಗಿನ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ರೂಪಿಸುವುದಕ್ಕಾಗಿ ಕಳೆದ ವರ್ಷ 13 ಸಾವಿರಕ್ಕೂ ಹೆಚ್ಚಿನ ಶಿಕ್ಷಕರನ್ನು ನಿಯೋಜಿಸಿಕೊಂಡಿದ್ದಾರೆ. ಶಿಕ್ಷಕರಾಗಿದ್ದ ರಾಧಾಕೃಷ್ಣನ್ ಅವರು ದೇಶದ ರಾಷ್ಟ್ರಪತಿ ಹುದ್ದೆ ಅಲಂಕರಿಸಿ ಸಮಸ್ತ ಶಿಕ್ಷಕರಿಗೆ ಮಾದರಿಯಾಗಿದ್ದಾರೆ ಎಂದರು.ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. ಆರಂಭದಲ್ಲಿ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರದ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಯಲ್ಲಿ ನಡೆಯಿತು. ತಹಸೀಲ್ದಾರ್ ವಾಣಿ ಯು, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ವರಪ್ಪ ಕೆ ಜಿ, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಮಧುಕೇಶವ, ಶಿಕ್ಷಕರ ಸಂಘದ ಪ್ರಮುಖರಾದ ಪ್ರಕಾಶ್ ಎಂ ಜಿ, ರಾಜೀವ್ ಬಿ, ಅಶೋಕ್ ಕುಮಾರ್ ಬಿ ವಿ, ಮಂಜಪ್ಪ ಬಿ ಆರ್. ಬಸವನಗೌಡ ಕೋಣ್ತಿ, ಹೂವ್ಯಾನಾಯ್ಕ್ ಟಿ, ರಾಜು ಟಿ, ನಾಗರಾಜ ನಾಯ್ಕ್, ಬೋರೇಗೌಡ ಜಿ. ಮೊಹಮ್ಮದ್ ರಫೀಕ್, ಬಸವರಾಜಪ್ಪ ಎಂ ಗಿರೀಶ್ ಸಹಿತ ಶಿಕ್ಷಕ ವೃಂದ ಉಪಸ್ಥಿತರಿದ್ದರು.