ವಿಳಂಬ ಧೋರಣೆ: ಅಸಂಘಟಿತ ಕಾರ್ಮಿಕರ ಪ್ರತಿಭಟನೆ

| Published : Dec 18 2024, 12:47 AM IST

ಸಾರಾಂಶ

ಮಾಗಡಿ: ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ಯೋಜನೆಗಳು ಜಾರಿಗೆ ತಂದಿದ್ದರೂ ತಾಲೂಕಿನಲ್ಲಿ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಒಕ್ಕೂಟದ ರಾಜ್ಯಾಧ್ಯಕ್ಷ ಪ್ರಸನ್ನಗೌಡ ಆರೋಪಿಸಿದರು.

ಮಾಗಡಿ: ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ಯೋಜನೆಗಳು ಜಾರಿಗೆ ತಂದಿದ್ದರೂ ತಾಲೂಕಿನಲ್ಲಿ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಒಕ್ಕೂಟದ ರಾಜ್ಯಾಧ್ಯಕ್ಷ ಪ್ರಸನ್ನಗೌಡ ಆರೋಪಿಸಿದರು.

ಪಟ್ಟಣದಲ್ಲಿ ಕಲ್ಯಾಗೇಟ್ ವೃತ್ತದಿಂದ ಕಾರ್ಮಿಕ ಇಲಾಖೆ ಕಚೇರಿಯಿಂದ ತಾಲೂಕು ಕಚೇರಿವರೆಗೆ ಹಮ್ಮಿಕೊಂಡಿದ್ದ ಪ್ರತಿಭಟನಾ ಜಾಥಾ ವೇಳೆ ಮಾತನಾಡಿದ ಅವರು, ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರ ಹಲವು ಯೋಜನೆ ಮತ್ತು ಸೌಲಭ್ಯಗಳನ್ನು ಜಾರಿಗೊಳಿಸಿದ್ದರೂ ಅರ್ಹರಿಗೆ ಸಮರ್ಪಕವಾಗಿ ತಲುಪುತ್ತಿಲ್ಲ. ಕಾರ್ಮಿಕ ಇಲಾಖೆ ಮತ್ತು ಕಾರ್ಮಿಕ ಕಲ್ಯಾಣ ಮಂಡಳಿಗಳ ಮೂಲಕ ಕಟ್ಟಡ ನಿರ್ಮಾಣ ಮತ್ತು ಇತರೆ ಕಾರ್ಮಿಕರಿಗೆ ಆರ್ಥಿಕ‌ ಹಾಗೂ ಸಾಮಾಜಿಕ ಭದ್ರತೆ, ಆರೋಗ್ಯ ರಕ್ಷಣೆ ನೀಡಬೇಕು. ಆದರೆ ತಾಲೂಕಿನ ಕಾರ್ಮಿಕ ಇಲಾಖೆ ಅಧಿಕಾರಿಗಳು ಅರ್ಹ ಕಟ್ಟಡ ಕಾರ್ಮಿಕರಿಗೆ ಸವಲತ್ತುಗಳನ್ನು ಕಲ್ಪಿಸದೆ ಅವರ ಕಾರ್ಡ್‌ಗಳನ್ನು ರದ್ದುಪಡಿಸುತ್ತಿದ್ದು, ಹೊಸ ನೋಂದಣಿ ಅರ್ಜಿ ಸಲ್ಲಿಸಿದರೆ ಆ ಅರ್ಜಿಗಳನ್ನೂ ವಜಗೊಳಿಸುತ್ತಿದ್ದಾರೆ. ಇಂತಹ ಅಧಿಕಾರಿಗಳ ವಿರುದ್ಧ ಉನ್ನತಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಚೇರಿ ಮುಂದೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಜಿಲ್ಲಾ ಕಾರ್ಮಿಕ ಇಲಾಖಾಧಿಕಾರಿ ನಾಗೇಶ್ ಅವರಿಗೆ ಮನವಿ ಸಲ್ಲಿಸಿ ಎಚ್ಚರಿಕೆ ನೀಡಿದರು.

ತಾಲೂಕಿನಲ್ಲಿ 20 ಸಾವಿರಕ್ಕೂ ಹೆಚ್ಚು ಕಾರ್ಮಿಕರಿದ್ದು 10 ಸಾವಿರ ಕಾರ್ಮಿಕರ ಕಾರ್ಡ್‌ಗಳನ್ನು ವಿತರಿಸಲಾಗಿದೆ.

ಉಳಿದ ಹತ್ತು ಸಾವಿರ ಕಾರ್ಮಿಕರಿಗೆ ಉಚಿತ ನೋಂದಣಿ ಕಾರ್ಯ ನಡೆಯುತ್ತಿದ್ದು ಈ ವೇಳೆ ಹೊಸದಾಗಿ ನೀಡಿರುವ ಕಾರ್ಮಿಕರ ಕಾರ್ಡ್‌ಗಳನ್ನು ರದ್ದುಪಡಿಸಲಾಗಿದೆ. ಇದರಿಂದ ಸರ್ಕಾರಿ ಸವಲತ್ತುಗಳಿಂದ ಕಾರ್ಮಿಕರ ಕುಟುಂಬದವರು ವಂಚಿತರಾಗಿದ್ದಾರೆಂದು ಆರೋಪಿಸಿದರು.

ನವ ನಿರ್ಮಾಣ ವೇದಿಕೆ ರಾಜ್ಯಾಧ್ಯಕ್ಷ ಶ್ರೀಪತಿಹಳ್ಳಿ ರಾಜಣ್ಣ ಮಾತನಾಡಿ, ತಾಲೂಕಿನಲ್ಲಿರುವ ಸರ್ಕಾರಿ ಬಸ್ ನಿಲ್ದಾಣಕ್ಕೆ ನಾಡಪ್ರಭು ಕೆಂಪೇಗೌಡ ಅವರ ಹೆಸರನ್ನು ನಾಮಕರಣ ಮಾಡಬೇಕೆಂದು ಹಲವಾರು ಬಾರಿ ನಿಮ್ಮಲ್ಲಿ ಮನವಿ ಸಲ್ಲಿಸಿದರೂ ಸಹ ಸ್ಪಂದಿಸದೆ ಕೆಂಪೇಗೌಡರಿಗೆ ಅವಮಾನವಾಗುವ ರೀತಿ ಅಧಿಕಾರಿಗಳು ಮಾಡುತ್ತಿದ್ದು ಕೆಎಸ್ಆರ್‌ಸಿ ಕೂಡಲೇ ಈ ಬಗ್ಗೆ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಒಕ್ಕೂಟದ ಜಿಲ್ಲಾಧ್ಯಕ್ಷ ಆನಂದ, ಜಿಲ್ಲಾ ಗೌರವಾಧ್ಯಕ್ಷ ಮಂಜುನಾಥ್, ಉಪಾಧ್ಯಕ್ಷ ಶಾಂತರಾಜು, ದೊಡ್ಡಿ ಗೋಪಿ, ಮಹಂತೇಶ್, ತಾಲೂಕು ಅಧ್ಯಕ್ಷ ವೆಂಕಟೇಶ್, ಕಾರ್ಮಿಕ ಸಂಘಟನೆ ಮುಖಂಡರನ್ನು ನರಸಿಂಹರಾಜು, ಕಲ್ಯಾ ರಂಗನಾಥ್, ಶಿವು, ಮಂಜುನಾಥ್, ಸುರೇಶ್, ಜಿಲ್ಲಾ ಹಾಗೂ ತಾಲೂಕು ಮಹಿಳಾ ಅಧ್ಯಕ್ಷರು ಭಾಗವಹಿಸಿದ್ದರು.