ಮಂಡ್ಯ ಜಿಲ್ಲೆಗೆ ಕೈಗಾರಿಕೆಗಳು ಬರಬೇಕು, ಸ್ಥಳೀಯ ಯುವಕರಿಗೆ ಉದ್ಯೋಗ ದೊರೆತು ಆರ್ಥಿಕತೆ ಬೆಳೆಯಬೇಕು ಎಂಬುದು ಜನರ ಬಹುದಿನಗಳ ನಿರೀಕ್ಷೆ. ಆದರೆ, ಕೇಂದ್ರ ಸರ್ಕಾರದ ಮಹತ್ವದ ಯೋಜನೆಗೆ ಭೂಮಿ ಒದಗಿಸುವ ರಾಜ್ಯ ಸರ್ಕಾರ ವಿಳಂಬ ಮಾಡುತ್ತಿರುವುದು ವಿದ್ಯಾವಂತ ನಿರುದ್ಯೋಗಿಗಳ ಭವಿಷ್ಯಕ್ಕೆ ತೊಂದರೆ ಉಂಟುಮಾಡುತ್ತಿದೆ.
ಕನ್ನಡಪ್ರಭ ವಾರ್ತೆ ಮಂಡ್ಯ
ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕಾ ಸಚಿವಾಲಯದ ಅಡಿ ಕಾರ್ಯನಿರ್ವಹಿಸುವ ಪ್ರತಿಷ್ಠಿತ ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾ (ಎಆರ್ಎಐ) ಸಂಸ್ಥೆಯಿಂದ ಜಿಲ್ಲೆಯಲ್ಲಿ ನಿರ್ಮಾಣ ಮತ್ತು ಮೂಲಸೌಕರ್ಯ ಉಪಕರಣಗಳ ಪರೀಕ್ಷಾ ಕೇಂದ್ರ ಹಾಗೂ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ ಸ್ಥಾಪಿಸಲು ಅಗತ್ಯ ಭೂಮಿ ಮಂಜೂರು ಮಾಡಲು ರಾಜ್ಯ ಸರ್ಕಾರ ವಿಳಂಬ ಮಾಡುತ್ತಿರುವುದು ಅತ್ಯಂತ ಕಳವಳಕಾರಿ ಸಂಗತಿ ಎಂದು ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಕುರಿತು ಹೇಳಿಕೆ ನೀಡಿರುವ ಅವರು, ಮಂಡ್ಯ ಜಿಲ್ಲೆಗೆ ಕೈಗಾರಿಕೆಗಳು ಬರಬೇಕು, ಸ್ಥಳೀಯ ಯುವಕರಿಗೆ ಉದ್ಯೋಗ ದೊರೆತು ಆರ್ಥಿಕತೆ ಬೆಳೆಯಬೇಕು ಎಂಬುದು ಜನರ ಬಹುದಿನಗಳ ನಿರೀಕ್ಷೆ. ಆದರೆ, ಕೇಂದ್ರ ಸರ್ಕಾರದ ಮಹತ್ವದ ಯೋಜನೆಗೆ ಭೂಮಿ ಒದಗಿಸುವ ರಾಜ್ಯ ಸರ್ಕಾರ ವಿಳಂಬ ಮಾಡುತ್ತಿರುವುದು ವಿದ್ಯಾವಂತ ನಿರುದ್ಯೋಗಿಗಳ ಭವಿಷ್ಯಕ್ಕೆ ತೊಂದರೆ ಉಂಟುಮಾಡುತ್ತಿದೆ ಎಂದು ಟೀಕಿಸಿದ್ದಾರೆ.
ಎಆರ್ಎಐ ಕೇಂದ್ರ ಸ್ಥಾಪನೆಯಿಂದ ವಾಹನ ಮತ್ತು ಎಲೆಕ್ಟ್ರಿಕ್ ವಾಹನ ಕ್ಷೇತ್ರಕ್ಕೆ ಸಂಬಂಧಿಸಿದ ತಂತ್ರಜ್ಞಾನ ಅಭಿವೃದ್ಧಿ, ಸಂಶೋಧನೆ ಹಾಗೂ ಪರೀಕ್ಷಾ ಸೌಲಭ್ಯಗಳಿಗೆ ಉತ್ತೇಜನ ದೊರೆಯುವ ನಿರೀಕ್ಷೆಯಿದೆ. ಇದರೊಂದಿಗೆ ಸ್ಥಳೀಯವಾಗಿ ಉದ್ಯೋಗಾವಕಾಶಗಳು ಮತ್ತು ಪೂರಕ ಕೈಗಾರಿಕೆಗಳ ಬೆಳವಣಿಗೆಗೂ ಅವಕಾಶ ಸೃಷ್ಟಿಯಾಗಬಹುದು. ಈ ಯೋಜನೆಗೆ ಅಗತ್ಯ ಭೂಮಿ ಮಂಜೂರಾತಿ ಬಾಕಿ ಉಳಿದಿರುವುದಕ್ಕೆ ರಾಜ್ಯ ಸರ್ಕಾರವೇ ಉತ್ತರ ನೀಡಬೇಕು ಎಂದು ಆಗ್ರಹಿಸಿದ್ದಾರೆ.ರಾಜ್ಯ ಬಜೆಟ್ನಲ್ಲಿಯೇ ಮಂಡ್ಯದಲ್ಲಿ ಎಆರ್ಎಐ ಪರೀಕ್ಷಾ ಕೇಂದ್ರ ಸ್ಥಾಪನೆಗೆ ಭೂಮಿ ಒದಗಿಸುವುದಾಗಿ ಘೋಷಿಸಿದ ಬಳಿಕವೂ ವಿಳಂಬ ಏಕೆ? ಕೈಗಾರಿಕೆಗಳಿಗೆ ಸಾವಿರಾರು ಎಕರೆ ಭೂಮಿ ನೀಡಲು ಸಿದ್ಧ ಎಂದು ಹೇಳುವ ಸರ್ಕಾರ, ಈಗ ಭೂಮಿ ಮಂಜೂರು ಮಾಡಲು ಹಿಂದೇಟು ಹಾಕುತ್ತಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.
ಮಂಡ್ಯಕ್ಕೆ ಕೈಗಾರಿಕೆಗಳು ಬರಬೇಕೆಂದು ಯುವಕರು ಕಾಯುತ್ತಿದ್ದಾರೆ. ಆದರೆ, ಭೂಮಿ ಮಂಜೂರಾತಿ ವಿಳಂಬವಾದರೆ ಉದ್ಯೋಗ ಸೃಷ್ಟಿಯೂ ಮುಂದೂಡಲ್ಪಡುತ್ತದೆ. ಸರ್ಕಾರದ ಘೋಷಣೆಗಳು ಕಾಗದದ ಉಳಿಯಬಾರದು. ಜಿಲ್ಲೆಯ ವಿದ್ಯಾವಂತ ನಿರುದ್ಯೋಗಿಗಳ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ತಕ್ಷಣ ಭೂಮಿ ಮಂಜೂರು ಮಾಡಿ ಯೋಜನೆಗೆ ಚಾಲನೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.