ಗದಗ: ಮಳೆಯಿಂದ ಉಂಟಾಗುವ ಹಾನಿಗೆ ತ್ವರಿತವಾಗಿ ಸ್ಪಂದಿಸಿ ಪರಿಹಾರ ಒದಗಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ, ನಿರ್ಲಕ್ಷ್ಯ ಅಥವಾ ನಿಷ್ಕಾಳಜಿಯನ್ನು ಜಿಲ್ಲಾಡಳಿತ ಸಹಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಎಚ್ಚರಿಕೆ ನೀಡಿದರು.

ನಗರದ ಜಿಲ್ಲಾಡಳಿತ ಭವನದ ಕೋರ್ಟ್ ಹಾಲ್‌ನಲ್ಲಿ ಬುಧವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಧಿಕಾರಿಗಳು ಸಭೆಗೆ ಸಂಪೂರ್ಣ ಹಾಗೂ ನಿಖರ ಮಾಹಿತಿಯೊಂದಿಗೆ ಹಾಜರಾಗಬೇಕು ಎಂದು ಸೂಚಿಸಿದರು.

ಸಣ್ಣ ನೀರಾವರಿ ಇಲಾಖೆಗೆ ಸಂಬಂಧಿಸಿದ 23 ಕೆರೆಗಳ ನಿರ್ವಹಣಾ ಕ್ರಮಗಳ ಕುರಿತು ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ಕೆರೆಗಳ ನಿರ್ವಹಣೆ ಹಾಗೂ ನೀರು ಸಂಗ್ರಹ ಸಾಮರ್ಥ್ಯ ವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಕೆರೆಗಳಿಗೆ ನೀರು ತುಂಬಿಸಲು ಹಾಗೂ ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳಲು ಬೇಕಾದ ಅನುದಾನದ ಪ್ರಸ್ತಾವನೆಗಳನ್ನು ಸರ್ಕಾರಕ್ಕೆ ಸಲ್ಲಿಸುವಂತೆ ತಿಳಿಸಿದರು.

ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ನೀಡಿದ ಮಾಹಿತಿಯ ಪ್ರಕಾರ, ಮೇ 18ರಂದು ಸುರಿದ ಭಾರಿ ಮಳೆ ಹಾಗೂ ಬಿರುಗಾಳಿಯಿಂದ ಗದಗ ಮತ್ತು ಲಕ್ಷ್ಮೇಶ್ವರ ತಾಲೂಕಿನಲ್ಲಿ ತಲಾ ಒಬ್ಬರಂತೆ ಒಟ್ಟು 2 ಜನರು ಮೃತಪಟ್ಟಿದ್ದು, ಮೃತರ ಕುಟುಂಬಗಳಿಗೆ ತಲಾ ₹5 ಲಕ್ಷದಂತೆ ಪರಿಹಾರ ವಿತರಿಸಲಾಗಿದೆ. ಮಳೆಯಿಂದ ಮೃತಪಟ್ಟ 31 ಸಣ್ಣ ಸಾಕು ಪ್ರಾಣಿಗಳ ಮಾಲೀಕರಿಗೆ ಒಟ್ಟು ₹1.52 ಲಕ್ಷ ಪರಿಹಾರ ನೀಡಲಾಗಿದೆ ಎಂದರು.

ಪ್ರಸಕ್ತ ಸಾಲಿನ ಪೂರ್ವ ಮುಂಗಾರು ಮಳೆಯಿಂದ ಜಿಲ್ಲೆಯಲ್ಲಿ ಇದುವರೆಗೆ 14 ಮನೆಗಳು ಭಾಗಶಃ ಹಾನಿಗೀಡಾಗಿದ್ದು, ಸಂಬಂಧಿಸಿದ ಕುಟುಂಬಗಳಿಗೆ ಒಟ್ಟು ₹91 ಸಾವಿರ ಪರಿಹಾರ ವಿತರಿಸಲಾಗಿದೆ. ಅಲ್ಲದೇ 96 ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿದ್ದು, ಆ ಕುಟುಂಬಗಳಿಗೆ ಒಟ್ಟು ₹4.80 ಲಕ್ಷ ಪರಿಹಾರವನ್ನು ನೀಡಲಾಗಿದೆ.


ಮಳೆಯಿಂದ ಜಿಲ್ಲೆಯ ವಿವಿಧ ಭಾಗಗಳಲ್ಲಿ 907 ವಿದ್ಯುತ್ ಕಂಬಗಳು ಹಾಗೂ 10 ಶಾಲಾ ಕೊಠಡಿಗಳು ಹಾನಿಗೀಡಾಗಿವೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ ಮಾನದಂಡಗಳ ಪ್ರಕಾರ ಈ ಹಾನಿಯ ಅಂದಾಜು ಮೊತ್ತ ₹69.35 ಲಕ್ಷ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಅದೇ ರೀತಿ ಜಿಲ್ಲೆಯ 92 ರೈತರಿಗೆ ಸೇರಿದ 34.58 ಎಕರೆ ತೋಟಗಾರಿಕೆ ಪ್ರದೇಶ ಮಳೆಯಿಂದ ಹಾನಿಗೀಡಾಗಿದ್ದು, ಇದರ ಹಾನಿಯ ಮೌಲ್ಯವನ್ನು ಎನ್‌ಡಿಆರ್‌ಎಫ್‌ ಮಾನದಂಡಗಳ ಪ್ರಕಾರ ₹6.70 ಲಕ್ಷ ಎಂದು ಅಂದಾಜಿಸಲಾಗಿದೆ.

ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇರುವ 63 ಗ್ರಾಮಗಳನ್ನು ಜಿಲ್ಲಾಡಳಿತ ಗುರುತಿಸಿದ್ದು, ಅಲ್ಲಿ ವಿಶೇಷ ನಿಗಾ ವಹಿಸಿ ನೀರು ಪೂರೈಕೆ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು. ನಗರ ಪ್ರದೇಶಗಳಲ್ಲಿ ಗದಗ- ಬೆಟಗೇರಿ ನಗರಸಭೆಯ 35 ವಾರ್ಡುಗಳು ಸೇರಿದಂತೆ ಜಿಲ್ಲೆಯ ಒಟ್ಟು 69 ವಾರ್ಡುಗಳನ್ನು ಸಮಸ್ಯಾತ್ಮಕ ಪ್ರದೇಶಗಳೆಂದು ಗುರುತಿಸಲಾಗಿದೆ. ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ 204 ವಾರ್ಡುಗಳಲ್ಲಿ ಒಟ್ಟು 1,196 ಬೋರ್‌ವೆಲ್‌ಗಳಿದ್ದು, ಅವುಗಳಲ್ಲಿ 923 ಬೋರ್‌ವೆಲ್‌ಗಳು ಕಾರ್ಯನಿರ್ವಹಿಸುತ್ತಿವೆ. ಜಿಲ್ಲೆಯ 51 ಆರ್‌ಒ ಕುಡಿಯುವ ನೀರಿನ ಶುದ್ಧೀಕರಣ ಘಟಕಗಳ ಪೈಕಿ 35 ಘಟಕಗಳು ಕಾರ್ಯನಿರ್ವಹಿಸುತ್ತಿವೆ ಎಂದು ಸಭೆಗೆ ಮಾಹಿತಿ ನೀಡಲಾಯಿತು.

ಮುಂಗಾರು ಹಂಗಾಮಿಗೆ ಜಿಲ್ಲೆಯಲ್ಲಿ ಯೂರಿಯಾ, ಡಿಎಪಿ ಸೇರಿದಂತೆ ಒಟ್ಟು 67,536 ಮೆಟ್ರಿಕ್ ಟನ್ ರಸಗೊಬ್ಬರಗಳ ಬೇಡಿಕೆಯಿದ್ದು, ಇದುವರೆಗೆ 18,963 ಮೆಟ್ರಿಕ್ ಟನ್ ರಸಗೊಬ್ಬರ ಮಾರಾಟವಾಗಿದೆ. ಪ್ರಸ್ತುತ 14,688 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಲಭ್ಯವಿದ್ದು, ರೈತರಿಗೆ ಅಗತ್ಯ ಪ್ರಮಾಣದಲ್ಲಿ ಗೊಬ್ಬರ ಪೂರೈಕೆಗೆ ಯಾವುದೇ ಸಮಸ್ಯೆ ಇಲ್ಲ ಎಂದು ಕೃಷಿ ಇಲಾಖೆ ಅಧಿಕಾರಿಗಳು ವಿವರಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಕೆ.ಆರ್. ದುರಗೇಶ್, ಜಿಪಂ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ, ಡಿವೈಎಸ್‌ಪಿ ಮುರ್ತುಜಾ ಖಾದ್ರಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟೂರ, ಡಿಡಿಪಿಐ ಆರ್.ಎಸ್. ಬುರಡಿ, ಪಶು ಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ. ಎಚ್.ಬಿ. ಹುಲಗಣ್ಣನವರ, ನಗರಸಭೆ ಪೌರಾಯುಕ್ತ ರಾಜಾರಾಮ್ ಪವಾರ, ಕಾರ್ಮಿಕ ಇಲಾಖೆ ಜಿಲ್ಲಾ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.ಶೋಕಾಸ್ ನೋಟಿಸ್...ಸಭೆಯಲ್ಲಿ ಅಂತರ್ಜಲ ಇಲಾಖೆಯ ಹಿರಿಯ ಭೂವಿಜ್ಞಾನಿಗಳು ಗೈರಾಗಿದ್ದಲ್ಲದೇ ಅಗತ್ಯ ಮಾಹಿತಿಯನ್ನು ಸಮರ್ಪಕವಾಗಿ ಒದಗಿಸದಿರುವುದನ್ನು ಜಿಲ್ಲಾಧಿಕಾರಿಗಳು ಗಂಭೀರವಾಗಿ ಪರಿಗಣಿಸಿದರು. ಈ ಹಿನ್ನೆಲೆಯಲ್ಲಿ ಅವರಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿ ಸಿ.ಎನ್‌. ಶ್ರೀಧರ್‌ ಸೂಚನೆ ನೀಡಿದರು.