ರಾಮನಗರ: ಸರ್ಕಾರ ಪೌರಕಾರ್ಮಿಕರು ಹಾಗೂ ಅವರ ಕುಟುಂಬದವರ ಅನುಕೂಲಕ್ಕಾಗಿ ಆರೋಗ್ಯ, ಶಿಕ್ಷಣ ಸೇರಿದಂತೆ ಹಲವು ಮೂಲ ಸೌಲಭ್ಯಗಳನ್ನು ಕಲ್ಪಿಸಿಕೊಟ್ಟಿದೆ. ಅವುಗಳನ್ನು ಆದ್ಯತೆಯ ಮೇರೆಗೆ, ಲೋಪದೋಷಗಳಿಲ್ಲದಂತೆ ತಲುಪಿಸಬೇಕೆಂದು ಅಪರ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ ಸೂಚನೆ ನೀಡಿದರು

ರಾಮನಗರ: ಸರ್ಕಾರ ಪೌರಕಾರ್ಮಿಕರು ಹಾಗೂ ಅವರ ಕುಟುಂಬದವರ ಅನುಕೂಲಕ್ಕಾಗಿ ಆರೋಗ್ಯ, ಶಿಕ್ಷಣ ಸೇರಿದಂತೆ ಹಲವು ಮೂಲ ಸೌಲಭ್ಯಗಳನ್ನು ಕಲ್ಪಿಸಿಕೊಟ್ಟಿದೆ. ಅವುಗಳನ್ನು ಆದ್ಯತೆಯ ಮೇರೆಗೆ, ಲೋಪದೋಷಗಳಿಲ್ಲದಂತೆ ತಲುಪಿಸಬೇಕೆಂದು ಅಪರ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮ 2013ರ ಅನುಷ್ಠಾನ ಸಂಬಂಧ ಆಯೋಜಿಸಿದ್ದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪೌರ ಕಾರ್ಮಿಕರಿಗೆ ಸುರಕ್ಷತಾ ಪರಿಕರಗಳ ವಿತರಣೆ, ಅವರಿಗೆ ವಿಶ್ರಾಂತಿ ಕೊಠಡಿ, ಬೆಳಗಿನ ಉಪಾಹಾರ ವಿತರಣೆ ಸೇರಿದಂತೆ ವೇತನ, ಆರೋಗ್ಯ ವಿಮೆ (ಇಎಸ್‌ಐ), ಭವಿಷ್ಯ ನಿಧಿ (ಪಿಎಫ್), ಜೀವ ವಿಮೆಯಂತಹ ಎಲ್ಲಾ ಸೌಲಭ್ಯಗಳನ್ನು ನಗರ ಸ್ಥಳೀಯ ಸಂಸ್ಥೆಗಳಾದ ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಹಾಗೂ ಗ್ರಾಮೀಣ ಭಾಗದಲ್ಲಿ ಗ್ರಾಪಂ ಹಾಗೂ ತಾಪಂ ಅಧಿಕಾರಿಗಳು ಸಮಪರ್ಕವಾಗಿ ಒದಗಿಸಿಕೊಡಬೇಕು, ಅದಕ್ಕಾಗಿ ಸಂಬಂಧಿಸಿದ ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ಹಾಗೂ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಕನಕಪುರ ನಗರಸಭೆ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕರಿಗೆ ಬೆಳಗಿನ ಉಪಾಹಾರ ನೀಡುತ್ತಿಲ್ಲ. ಸರಿಯಾದ ಸಮಯಕ್ಕೆ ವೇತನ ಪಾವತಿಸುತ್ತಿಲ್ಲ. ಇಎಸ್‌ಐ, ಪಿಎಫ್ ಕಟಾವಣೆಯಾಗುತ್ತಿಲ್ಲ. ವಿಶ್ರಾಂತಿ ಕೊಠಡಿ ವ್ಯವಸ್ಥೆ ನೀಡಿಲ್ಲ, ಮಾಸ್ಕ್, ಗ್ಲೌಸ್, ಇತರೆ ಸಲಕರಣೆ- ಸಾಮಗ್ರಿಗಳನ್ನು ವಿತರಿಸಿರುವುದಿಲ್ಲ ಎಂದು ಸಮಿತಿ ಸದಸ್ಯರು ಸಭೆಯ ಗಮನಕ್ಕೆ ತಂದರು.

ಇದಕ್ಕೆ ಪ್ರತಿಕ್ರಿಯಿಸಿದ ಅಪರ ಜಿಲ್ಲಾಧಿಕಾರಿಗಳು, ನಗರ, ಗ್ರಾಮೀಣ ಸ್ಥಳೀಯ ಸಂಸ್ಥೆಗಳು, ಆರೋಗ್ಯ ಇಲಾಖೆ, ಕೆಎಸ್ಆರ್‌ಟಿಸಿ ಸೇರಿದಂತೆ ಸಂಬಂಧಿಸಿದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಪೌರ ಕಾರ್ಮಿಕರಿಗೆ ಸೌಲಭ್ಯಗಳನ್ನು ತಲುಪಿಸುವಂತೆ ತಾಕೀತು ಮಾಡಿದರು.

ಜಿಲ್ಲೆಯ ಪೌರ ಕಾರ್ಮಿಕರಿಗೆ ಆಶ್ರಯ ಯೋಜನೆಯಡಿ ನಿವೇಶನ ಹಾಗೂ ವಸತಿ ಕಲ್ಪಿಸಬೇಕು. ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಪೌರ ಕಾರ್ಮಿಕರು/ ಸ್ಪಚ್ಛತಾ ಕಾರ್ಮಿಕರಿಗೆ ನಿವೇಶನ, ವಸತಿ ಕಲ್ಪಿಸಲು ಸ್ಥಳ ಪರಿಶೀಲನೆ ನಡೆಸಿ ವರದಿ ನೀಡುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಪೌರಕಾರ್ಮಿಕರುಗಳಿಗೆ ವಿಶ್ರಾಂತಿ ಕೊಠಡಿ, ಬೆಳಗಿನ ಉಪಾಹಾರ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಈಗಾಗಲೇ ರಾಮನಗರ ನಗರಸಭೆ ವ್ಯಾಪ್ತಿಯಲ್ಲಿ ವಿಶ್ರಾಂತಿ ಗೃಹ ನಿರ್ಮಿಸಲಾಗಿರುತ್ತದೆ. ಕನಕಪುರ, ಚನ್ನಪಟ್ಟಣ, ಮಾಗಡಿ ಹಾಗೂ ಹಾರೋಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಶ್ರಾಂತಿ ಗೃಹಗಳನ್ನು ಶೀಘ್ರವಾಗಿ ನಿರ್ಮಿಸಲು ಕ್ರಮವಹಿಸಬೇಕು ಎಂದು ತಿಳಿಸಿದರು.

ಪೌರ ಕಾರ್ಮಿಕರು/ ಸ್ಪಚ್ಛತಾ ಕಾರ್ಮಿಕರಿಗೆ ಹೆಪಟೈಟಿಸ್- ಬಿ, ಟಿ.ಬಿ., ಅಸ್ತಮಾ ಹಾಗೂ ಹೃದಯ ಸಂಬಂಧಿ ರೋಗಗಳ ನಿಯಂತ್ರಿಸಲು ಜಿಲ್ಲಾ ಹಾಗೂ ತಾಲೂಕು ಸರ್ಕಾರಿ ಆಸ್ಪತ್ರೆಗಳಲ್ಲಿ ಆರೋಗ್ಯ ಪರೀಕ್ಷೆ ನಡೆಸಲಾಗುತ್ತಿದೆ. ಇದನ್ನು ನಿಯಮಿತವಾಗಿ ಅಂದರೆ ಪ್ರತಿ ಮೂರು ತಿಂಗಳಿಗೊಮ್ಮೆ ಕಡ್ಡಾಯವಾಗಿ ನಡೆಸಬೇಕು ಹಾಗೂ ಪೌರಕಾರ್ಮಿಕರು ಕಾರ್ಯನಿರ್ವಹಿಸಲು ಅವಶ್ಯವಿರುವ ಮಾಸ್ಕ್, ಗ್ಲೌಸ್, ಇತರೆ ಸಲಕರಣೆ- ಸಾಮಗ್ರಿಗಳನ್ನು ಸಮರ್ಪಕವಾಗಿ ಒದಗಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಶೇಖರ್, ಜಿಪಂ ಉಪ ಕಾರ್ಯದರ್ಶಿ ಧನರಾಜ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶಿವಕುಮಾರ್, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ದೀಪ ಎಸ್., ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮ 2013ರ ಅನುಷ್ಠಾನದ ಜಿಲ್ಲಾ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಆರ್. ನಾಗರಾಜು, ಚಲಪತಿ, ಡಾ. ಲೋಕೇಶ್ , ಜೀವನ್ ಮೂರ್ತಿ , ನಗರಸಭೆಗಳ ಪೌರಾಯುಕ್ತರು, ಪುರಸಭೆ ಮುಖ್ಯಾಧಿಕಾರಿಗಳು, ಪಟ್ಟಣ ಪಂಚಾಯಿತಿ ಅಧಿಕಾರಿ, ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

3ಕೆಆರ್ ಎಂಎನ್ 1.ಜೆಪಿಜಿ

ರಾಮನಗರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ಅಧ್ಯಕ್ಷತೆಯಲ್ಲಿ

ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಯಿತು.