ಜನರ ಮನೆಬಾಗಿಲಿಗೆ ಸರ್ಕಾರದ ಯೋಜನೆ ತಲುಪಿಸಿ

| Published : Mar 11 2025, 12:51 AM IST

ಸಾರಾಂಶ

ಗ್ರಾಮೀಣ ಜನರ ಶ್ರೇಯೋಭಿವೃದ್ಧಿಗೆ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಅವುಗಳನ್ನು ಸಾಮಾನ್ಯರಿಗೆ ತಲುಪಿಸುವ ಪ್ರಾಮಾಣಿಕತೆ ಅಧಿಕಾರಿಗಳಿಗೆ ಇರಬೇಕು.

ಯಲಬುರ್ಗಾ:

ಸರ್ಕಾರದ ಜನಪರ ಯೋಜನೆಗಳನ್ನು ಅಧಿಕಾರಿಗಳು ಅರ್ಹ ಫಲಾನುಭವಿಗಳ ಮನೆಬಾಗಿಲಿಗೆ ತಲುಪಿಸಿದಾಗ ಮಾತ್ರ ಯೋಜನೆಗಳು ಸಾರ್ಥಕಗೊಳ್ಳುತ್ತವೆ ಎಂದು ಸಂಸದ ರಾಜಶೇಖರ ಹಿಟ್ನಾಳ ಹೇಳಿದರು.

ತಾಲೂಕಿನ ಹಿರೇವಂಕಲಕುಂಟಾ ಗ್ರಾಮದ ಶ್ರೀ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಹೋಬಳಿ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ರಾಮೀಣ ಜನರ ಶ್ರೇಯೋಭಿವೃದ್ಧಿಗೆ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಅವುಗಳನ್ನು ಸಾಮಾನ್ಯರಿಗೆ ತಲುಪಿಸುವ ಪ್ರಾಮಾಣಿಕತೆ ಅಧಿಕಾರಿಗಳಿಗೆ ಇರಬೇಕು ಎಂದರು.

ಗ್ರಾಪಂ ಹಂತದ ಜನಪ್ರತಿನಿಧಿಗಳು ಜನರ ಜತೆ ಕೂಡಿಕೊಂಡು ಸರ್ಕಾರಗಳ ನಾನಾ ಇಲಾಖೆಗಳ ಯೋಜನೆ ಮತ್ತು ಕಾರ್ಯಕ್ರಮಗಳ ಬಗ್ಗೆ ಮಾಹಿತಿ ತಿಳಿದುಕೊಂಡು, ಅವರ ಸಮಸ್ಯೆ ಪರಿಹರಿಸಬೇಕು. ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳಿಗೆ ಯೋಜನೆಗಳ ಮಾಹಿತಿ ಕೊರತೆ ಇದೆ. ಜನಸಾಮಾನ್ಯರು ಇಲಾಖೆಗಳ ಸೌಲಭ್ಯಗಳನ್ನು ಬಯಸಿ ಅಲೆದಾಡುವ ಪರಿಸ್ಥಿತಿ ಇದೆ. ಪ್ರತಿ ಆರು ತಿಂಗಳಿಗೊಮ್ಮೆ ಹೋಬಳಿ ಹಂತದಲ್ಲಿ ಸಭೆ ನಡೆಸಿದರೆ ಯಾವ ಇಲಾಖೆಯಲ್ಲಿ ಯಾವ ಯೋಜನೆ ಇದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ದೊರೆಯುತ್ತದೆ. ಸಮಸ್ಯೆಗಳ ಪರಿಹಾರಕ್ಕೊ ಅನುಕೂಲವಾಗುತ್ತದೆ ಎಂದು ಹೇಳಿದರು.

ಸಿಎಂ ಆರ್ಥಿಕ ಸಲಹೆಗಾರ, ಶಾಸಕ ಬಸವರಾಜ ರಾಯರಡ್ಡಿ ದೂರದೃಷ್ಟಿಯ ಫಲವಾಗಿ ಕ್ಷೇತ್ರದ ೩೯೦ ಹಳ್ಳಿಗಳಿಗೆ ಶಾಶ್ವತ ನೀರು ಪೂರೈಸುವ ಉದ್ದೇಶದಿಂದ ₹೭೬೩ ಕೋಟಿ ವೆಚ್ಚದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಂಡಿದೆ. ಜನಸಾಮಾನ್ಯರಿಗೆ ಕುಡಿಯುವ ನೀರಿನ ದಾಹ ನೀಗಿಸಲು ಅನುಕೂಲವಾಗಿದೆ ಎಂದು ಹೇಳಿದರು.

ಬೇಸಿಗೆ ಹಿನ್ನೆಲೆಯಲ್ಲಿ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಗಮನ ಹರಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹಿರೇವಂಕಲಕುಂಟಾ ಗ್ರಾಪಂ ಅಧ್ಯಕ್ಷೆ ಹುಲಿಗೆಮ್ಮ ತಳವಾರ, ದಿಶಾ ಸಮಿತಿ ಸದಸ್ಯೆ ಡಾ. ನಂದಿತಾ ದಾನರಡ್ಡಿ, ತಹಸೀಲ್ದಾರ್‌ ಬಸವರಾಜ ತೆನ್ನಳ್ಳಿ, ತಾಪಂ ಇಒ ಸಂತೋಷ ಪಾಟೀಲ, ಪ್ರಮುಖರಾದ ಕೆರಿಬಸಪ್ಪ ನಿಡಗುಂದಿ, ಶರಣಗೌಡ ಇದ್ದರು.