ಸಮಾಜದ ಕಟ್ಟಕಡೆ ವ್ಯಕ್ತಿಗೂ ಗ್ಯಾರಂಟಿ ಯೋಜನೆ ತಲುಪಿಸಿ: ಎಚ್.ಎಂ. ರೇವಣ್ಣ

| Published : Dec 01 2024, 01:30 AM IST

ಸಮಾಜದ ಕಟ್ಟಕಡೆ ವ್ಯಕ್ತಿಗೂ ಗ್ಯಾರಂಟಿ ಯೋಜನೆ ತಲುಪಿಸಿ: ಎಚ್.ಎಂ. ರೇವಣ್ಣ
Share this Article
  • FB
  • TW
  • Linkdin
  • Email

ಸಾರಾಂಶ

ಯಾವುದೇ ಮಧ್ಯವರ್ತಿಗಳಿಲ್ಲದೇ ರಾಜ್ಯದ ಶೇ. 98ರಷ್ಟು ಜನರಿಗೆ ನೇರವಾಗಿ ಐದು ಗ್ಯಾರಂಟಿ ಯೋಜನೆಗಳ ಲಾಭ ಸಿಗುತ್ತಿದೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಹೇಳಿದರು.

ಕೊಪ್ಪಳ: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಕಾರ್ಯಕ್ರಮಗಳಾದ ಪಂಚ ಗ್ಯಾರಂಟಿ ಯೋಜನೆಗಳು ಸಮಾಜದ ಕಟ್ಟಕಡೆ ವ್ಯಕ್ತಿಗಳಿಗೂ ತಲುಪಬೇಕು ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಹೇಳಿದರು.ಇಲ್ಲಿಯ ಜಿಪಂ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಕೊಪ್ಪಳ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು. ಜನಸಾಮಾನ್ಯರ ಏಳಿಗೆಗಾಗಿ ರಾಜ್ಯ ಸರ್ಕಾರ ಜಾರಿಗೆ ತಂದ ಗೃಹಲಕ್ಷ್ಮಿ ಯೋಜನೆ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಯೋಜನೆ ಒಳಗೊಂಡ ಪಂಚ ಗ್ಯಾರಂಟಿ ಯೋಜನೆಗಳು ಜನಪರ ಕಾರ್ಯಕ್ರಮಗಳಾಗಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ತುಂಬಾ ಸಹಕಾರಿಯಾಗಿದೆ. ಯಾವುದೇ ಮಧ್ಯವರ್ತಿಗಳಿಲ್ಲದೇ ರಾಜ್ಯ ಶೇ. 98ರಷ್ಟು ಜನರಿಗೆ ನೇರವಾಗಿ ಐದು ಗ್ಯಾರಂಟಿ ಯೋಜನೆಗಳ ಲಾಭ ಸಿಗುತ್ತಿದೆ. ರಾಜ್ಯ ಸರ್ಕಾರದ ಸಾಮಾಜಿಕ ಪರಿವರ್ತನೆಯ ಕಾರ್ಯಕ್ರಮಗಳಿಂದ ಮಹಿಳೆಯರ ಸಬಲೀಕರಣಕ್ಕೆ ಅನುಕೂಲವಾಗಿದೆ ಎಂದರು.

ಗೃಹಲಕ್ಷ್ಮಿ ಯೋಜನೆ ಯೋಜನೆಯಡಿ ರಾಜ್ಯದ 1.22 ಕೋಟಿ ಕುಟುಂಬದ ಮನೆ ಯಜಮಾನಿಯರಿಗೆ ಮಾಸಿಕ ₹2 ಸಾವಿರದಂತೆ ಒಟ್ಟು ₹32,645 ಕೋಟಿಗಳನ್ನು ನೀಡಲಾಗಿದೆ. ಗೃಹಜ್ಯೋತಿ ಯೋಜನೆಯಡಿ ₹1.61 ಕೋಟಿ ವಿದ್ಯುತ್ ಗ್ರಾಹಕರಿಗೆ 200 ಯುನಿಟ್ ಉಚಿತ ವಿದ್ಯುತ್ ಸೌಲಭ್ಯ ದೊರೆತಿದ್ದು, ₹11031 ಕೋಟಿಗಳನ್ನು ಈ ಯೋಜನೆಗೆ ವ್ಯಯ ಮಾಡಲಾಗಿದೆ. ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ಹೆಚ್ಚುವರಿ ಅಕ್ಕಿಗಾಗಿ 55.47 ಕೋಟಿ ಜನರಿಗೆ ₹9040 ಕೋಟಿ ನೀಡಲಾಗಿದೆ. ಶಕ್ತಿ ಯೋಜನೆಯಡಿ ಇಲ್ಲಿಯವರೆಗೆ 336.55 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದು, ಇದಕ್ಕಾಗಿ ₹8142 ಕೋಟಿ ವೆಚ್ಚವಾಗಿದೆ. ಯುವನಿಧಿ ಯೋಜನೆಯಡಿ 1.81 ಕೋಟಿ ವಿದ್ಯಾವಂತ ನಿರುದ್ಯೋಗಿಗಳಿಗೆ ₹141 ಕೋಟಿ ಫಲಾನುಭವಿಗಳಿಗೆ ನಿರುದ್ಯೋಗ ಭತ್ಯೆ ನೀಡಲಾಗಿದ್ದು, ಈ ಗ್ಯಾರಂಟಿ ಯೋಜನೆಗಳು ರಾಜ್ಯದ ಜನರ ಮನಗಳನ್ನು ಗೆದ್ದಿವೆ ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿಗಳನ್ನು ರಚಿಸಲಾಗಿದ್ದು, ಸಮಿತಿ ಸದಸ್ಯರು ಜನರ ಮನೆ-ಮನೆಗೆ ಭೇಟಿ ನೀಡಿ ಅವರಿಗೆ ಯೋಜನೆಗಳ ಲಾಭ ಸಿಗುತ್ತಿದೆಯೋ ಅಥವಾ ಇಲ್ಲ ಎಂಬ ಬಗ್ಗೆ ಪರಿಶೀಲಿಸಬೇಕು. ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಉಂಟಾಗುತ್ತಿರುವ ಸಣ್ಣ-ಪುಟ್ಟ ತಾಂತ್ರಿಕ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸುವ ನಿಟ್ಟಿನಲ್ಲಿ ಸಮಿತಿಯ ಪದಾಧಿಕಾರಿಗಳು ಇಲಾಖಾ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಎಲ್ಲ ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಲಾಭ ದೊರಕಿಸಿ, ಐದು ಗ್ಯಾರಂಟಿ ಯೋಜನೆಗಳಡಿ ಶೇ. 100ರಷ್ಟು ಪ್ರಗತಿ ಸಾಧಿಸಲು ಶ್ರಮಿಸಬೇಕು ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಉತ್ತಮ ಪ್ರಗತಿಯಾಗಿದೆ. ಇಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಗಳು ಹೆಚ್ಚಾಗಿ ನಡೆಯುತ್ತಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಮುತುವರ್ಜಿ ವಹಿಸಬೇಕು. ಶಾಲಾ-ಕಾಲೇಜು ಮಕ್ಕಳಿಗೆ ಯಾವುದೇ ರೀತಿಯ ಬಸ್ ವ್ಯವಸ್ಥೆಗೆ ತೊಂದರೆಯಾಗದಂತೆ ಕ.ಕ.ರ.ಸಾ.ನಿ. ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಲು ಕಾರ್ಯಕ್ರಮ ರೂಪಿಸುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕೆಂದು ಸೂಚನೆ ನೀಡಿದರು.

ಕೊಪ್ಪಳ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ, ಉಪಾಧ್ಯಕ್ಷ ಎಸ್.ಬಿ. ಖಾದ್ರಿ, ಅಮರೇಶಪ್ಪ ಎಸ್.ಜಿ., ನಾಗರಾಜ ಅರಳಿ ಹಾಗೂ ಮರ್ದಾನ ಸಾಬ, ಜಿಪಂ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರು ಹಾಗೂ ತಾಲೂಕು ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.